ಮಾರಕಾಸ್ತ್ರಗಳಿಂದ ವ್ಯಕ್ತಿ ಕೊಲೆ
ರಾಮನಗರ: ವ್ಯಕ್ತಿಯೊಬ್ಬನನ್ನು ಹಾಡಹಗಲೇ ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ಬಸವನಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಬಸವನಪುರ ಗ್ರಾಮದ ವಾಸಿ ಕುಮಾರ್(30) ಕೊಲೆಯಾದ ವ್ಯಕ್ತಿ. ಗ್ರಾಮದ ಪಕ್ಕದಲ್ಲೇ ಇರುವ ತೋಟದ ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಆಗಮಿಸಿದ ದುಷ್ಕರ್ಮಿಗಳ ತಂಡ ಕುಮಾರ್ ಮೇಲೆ ಮಾರಕಾಸ್ತ್ರಗಳಿಂದ ಕುತ್ತಿಗೆ, ಕೈ, ತಲೆಗೆ ಹಲ್ಲೆ ನಡೆಸಿ, ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ಕುಮಾರ್‌ನನ್ನು ಸ್ಥಳೀಯರು ಕೂಡಲೇ ಆಸ್ಪತ್ರೆ ಸಾಗಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಕೊಲೆಗೆ ಹಳೆ ದ್ವೇಷ ಕಾರಣವಿರಬಹುದು ಎಂದು ಶಂಕಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.