ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ನಗರ

ದೇವೇಗೌಡ ಪುನರುಚ್ಚಾರ ಕಾವೇರಿ ಅಧಿಸೂಚನೆ ಬೇಡ

Parashurama
Updated On : 3 Feb 2013, 12:33 pm

ಬೆಂಗಳೂರು: ಕಾವೇರಿ ಐತೀರ್ಪು ಅಧಿಸೂಚನೆ ಹೊರಡಿಸುವ ಮೂಲಕ ರಾಜ್ಯಕ್ಕೆ ಅನ್ಯಾಯವಾಗುವಂತಹ ಕ್ರಮ ಕೇಂದ್ರ ಕೈಗೊಳ್ಳಬಾರದು ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಗ್ರಹಿಸಿದ್ದಾರೆ.
ಕಾವೇರಿ ಐತೀರ್ಪು ಅಧಿಸೂಚನೆಯಾದರೆ ರಾಜ್ಯಕ್ಕೆ ಭಾರೀ ನಷ್ಟವಾಗುತ್ತದೆ. ಕೇಂದ್ರ ಈ ರೀತಿಯ ಏಕಪಕ್ಷೀಯ ನಿರ್ಧಾರ ಕೈಗೊಂಡರೆ ರಾಜ್ಯಕ್ಕೆ ಅನ್ಯಾಯವಾಗುತ್ತದೆ. ತಮಿಳುನಾಡಿನ ಡಿಎಂಕೆ ಸಂಸದ ಅಳಗಿರಿ ಕಾವೇರಿ ಐತೀರ್ಪು ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಜಲಸಂಪನ್ಮೂಲ ಖಾತೆ ಸಚಿವ ಹರೀಶ್ ರಾವತ್ ಮೇಲೆ ಒತ್ತಡ ತರುತ್ತಿದ್ದಾರೆ. ಇದಕ್ಕೆಲ್ಲ ಕೇಂದ್ರ ಮಣಿಯಬಾರದು ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಒತ್ತಾಯಿಸಿದರು.
ಕಾವೇರಿ ಐತೀರ್ಪು ಅಧಿಸೂಚನೆಯಾದರೆ ಬೆಂಗಳೂರು ಸೇರಿದಂತೆ ಒಂಬತ್ತು ಜಿಲ್ಲೆ ಹಾಗೂ 22 ತಾಲೂಕುಗಳು, ಹಲವಾರು ಗ್ರಾಮಗಳಿಗೆ ತೊಂದರೆಯಾಗುತ್ತದೆ. ರಾಜ್ಯದಲ್ಲಿ ಈಗಾಗಲೇ ಬರಗಾಲದಿಂದ ಜನ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಕಾವೇರಿ ಐತೀರ್ಪಿನಿಂದ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರನ್ನು ಎರಡು ಬಾರಿ ಭೇಟಿ ಮಾಡಿ ಕಾವೇರಿ ಅಂತಿಮ ತೀರ್ಪನ್ನು ಅಧಿಸೂಚನೆ ಮಾಡುವುದು ಬೇಡ ಎಂದು ಮನವಿ ಮಾಡಿಕೊಂಡಿದ್ದೇನೆ. ಕೇಂದ್ರದ ಜಲಸಂಪನ್ಮೂಲ ಹಾಗೂ ಕಾನೂನು ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳಿಗೂ ಮನವಿ ಮಾಡಿದ್ದೇನೆ. ಆದರೆ ಯಾರೂ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ಭೇಟಿ ಮಾಡಲು ಪ್ರಯತ್ನಿಸಿದ್ದರೂ ಅದು ಪ್ರಯೋಜನವಾಗಿಲ್ಲ. ಇಷ್ಟಾದರೂ ಕೇಂದ್ರ ಏಕಪಕ್ಷೀಯವಾಗಿ ಅಧಿಸೂಚನೆ ಹೊರಡಿಸುವುದು ಸಮಂಜಸವಲ್ಲ ಎಂದು ದೇವೇಗೌಡ ನುಡಿದರು.
ಕಾವೇರಿ ನದಿ ನೀರಿನ ವಿಷಯವಾಗಿ ಲೋಕಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಯಬೇಕಾದ ಅಗತ್ಯವಿದೆ. ಇದಕ್ಕಾಗಿ ಸಾಕಷ್ಟು ಬಾರಿ ನಾನು ಪ್ರಯತ್ನಿಸಿದ್ದೇನೆ. ಈ ಹಿಂದೆ ಕಾವೇರಿ ನ್ಯಾಯಮಂಡಳಿ ಅಂತಿಮ ತೀರ್ಪಿನ ಅಧಿಸೂಚನೆ ಹೊರಡಿಸುವ ಬಗ್ಗೆ ನಡೆದ ಚರ್ಚೆಗೆ ಅವಕಾಶ ಮಾಡಿಕೊಟ್ಟಾಗ ಸದನದಲ್ಲಿ ಕೋಲಾಹಲ ಸೃಷ್ಟಿಯಾಗಿತ್ತು. ಚಿದಂಬರಂ ಸೇರಿದಂತೆ ತಮಿಳುನಾಡಿನವರಿಗೆ ಮಾತ್ರ ಚರ್ಚೆಯಲ್ಲಿ ಮಾತನಾಡಲು ಅವಕಾಶ ಮಾಡಿಕೊಡಲಾಗಿತ್ತು. ನಮಗೆ ಅವಕಾಶ ಮಾಡಿಕೊಡಲಿಲ್ಲ. ಇಂದು ರಾಷ್ಟ್ರಪತಿಯಾಗಿರುವ ಪ್ರಣಬ್ ಮುಖರ್ಜಿ ಅಂದು ಸದನದಲ್ಲಿ ಈ ಬಗ್ಗೆ ಚರ್ಚೆ ನಡೆಯಬೇಕೆಂದು ಅಭಿಪ್ರಾಯಪಟ್ಟಿದ್ದರು. ಆದರೂ ಅಂದು ತಮಿಳುನಾಡಿನ ಸಂಸದರನ್ನು ಯಾರೂ ಸುಮ್ಮನಿರಲು ಹೇಳಲಿಲ್ಲ ಎಂದು ಟೀಕಿಸಿದರು.
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರು ರಾಜ್ಯಕ್ಕೆ ಅವರದ್ದೇ ತಂಡ ಕಳುಹಿಸಲಿ. ರಾಜ್ಯದಲ್ಲಿನ ನೀರಿನ ಸಂಗ್ರಹ, ಇಲ್ಲಿನ ಬರದ ಪರಿಸ್ಥಿತಿ ಬಗ್ಗೆ ಅವಲೋಕನ ಮಾಡಲಿ. ಆಗ ಅವರಿಗೇ ಇಲ್ಲಿನ ಸಂಕಷ್ಟದ ಪರಿಸ್ಥಿತಿ ಅರಿವಾಗುತ್ತದೆ. ಈಗಾಗಲೇ ಕೇಂದ್ರದ ತಂಡ ಇಲ್ಲಿನ ಪರಿಸ್ಥಿತಿಯನ್ನು ವರದಿ ಮಾಡಿದೆ. ಆದ್ದರಿಂದ, ಅಂತಿಮ ತೀರ್ಪಿನ ಅಧಿಸೂಚನೆ ಬಗ್ಗೆ ಈಗ ನಿರ್ಧರಿಸುವುದು ಸೂಕ್ತವಲ್ಲ ಎಂದು ಎಚ್.ಡಿ. ದೇವೇಗೌಡ ಅಭಿಪ್ರಾಯಪಟ್ಟರು.
ಕಾವೇರಿ ಐತೀರ್ಪಿನ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಸೋನಿಯಾಗಾಂಧಿ ಅವರ ಭೇಟಿಗೂ ಮನವಿ ಮಾಡಿದ್ದೇನೆ. ಅವರು ಇನ್ನೂ ಕಾಲಾವಕಾಶ ನೀಡಿಲ್ಲ. ಅಲ್ಲದೆ, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರೊಂದಿಗೆ ಶನಿವಾರ ಬೆಳಗ್ಗೆ ದೂರವಾಣಿ ಮೂಲಕ ಮಾತನಾಡಿ, ಈ ಬಗ್ಗೆ ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ದೇನೆ ಎಂದರು. ಕಾವೇರಿ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಬಗ್ಗೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿ ವಿಚಾರಣೆ ಫೆ.4ರಂದು ನಡೆಯಲಿದೆ. ಹೀಗಾಗಿ, ಈ ಸಂದರ್ಭದಲ್ಲಿ ಅದರ ಬಗ್ಗೆ ಹೆಚ್ಚು ಮಾತನಾಡುವುದು ಸರಿಯಲ್ಲ. ಹೀಗಾಗಿ ಈ ಅರ್ಜಿ ವಿಚಾರಣೆ ನಡೆದು, ಎಲ್ಲ ರಾಜ್ಯಗಳ ಅಭಿಪ್ರಾಯಗಳು ದಾಖಲಾಗಲಿ. ಈ ವಿಚಾರಣೆ ಮುಗಿಯುವವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವುದು ಬೇಡ ಎಂದು ಆಗ್ರಹಿಸಿದರು.
ಕಾವೇರಿ ಐತೀರ್ಪನ್ನು ಒಂದು ಬಾರಿ ಅಧಿಸೂಚನೆ ಹೊರಡಿಸಿದರೆ ಅದರ ಪುನರ್‌ಪರಿಶೀಲನೆ ಬಗ್ಗೆ ಒತ್ತಾಯಿಸುವುದಕ್ಕೂ ಅವಕಾಶ ಇರುವುದಿಲ್ಲ. ಈ ವಿಷಯವನ್ನು ಕೇಂದ್ರ ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು. ರಾಜ್ಯಕ್ಕೆ ಆಗುವ ಅನ್ಯಾಯದ ಬಗ್ಗೆ ಕೇಂದ್ರದಲ್ಲಿರುವ ನಮ್ಮ ರಾಜ್ಯದ ಸಚಿವರು ಇದನ್ನು ಅರಿತುಕೊಳ್ಳಬೇಕು. ಈ ಬಗ್ಗೆ ಆಲೋಚಿಸಿ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ದೇವೇಗೌಡರು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments