ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಂಗಳೂರು ನಗರ

ಅಪಘಾತ; ನಾಲ್ವರು ಬೈಕ್ ಸವಾರರ ಸಾವು

Parashurama
Updated On : 18 Feb 2013, 1:09 am

ಬೆಂಗಳೂರು: ನಗರದಲ್ಲಿ ಹಲವೆಡೆ ನಡೆದ ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು ಬೈಕ್ ಸವಾರರು ಮೃತಪಟ್ಟಿದ್ದಾರೆ.
ಆಟೋ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ, 62 ವರ್ಷದ ನೂರುಲ್ಲಾ ಶರೀಫ್ ಮೃತಪಟ್ಟಿದ್ದಾರೆ. ಬಾಣಸವಾಡಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ಈ ಅಪಘಾತ ಸಂಭವಿಸಿದೆ.
ಬಾಣಸವಾಡಿ ನಿವಾಸಿ ನೂರುಲ್ಲಾ ಗ್ಯಾರೇಜ್ ನಡೆಸುತ್ತಿದ್ದು, ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ಬಾಣಸವಾಡಿಯ 100 ಅಡಿ ರಸ್ತೆಯಲ್ಲಿ 'ಯು' ತಿರುವು ತೆಗೆದುಕೊಳ್ಳುತ್ತಿದ್ದಾಗ ಎದುರಿನಿಂದ ವೇಗವಾಗಿ ಬಂದ ಆಟೋ ಡಿಕ್ಕಿ ಹೊಡೆದಿದೆ.
ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ನೂರುಲ್ಲಾ ಅವರು ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ. ಆಟೋ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೈಕ್ ಸವಾರ ಸಾವು: ಮತ್ತೊಂದು ಪ್ರಕರಣದಲ್ಲಿ ಟೆಂಪೋ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ವಿನಾಯಕ ನಗರ ನಿವಾಸಿ ಉಮೇಶ್(25) ಮೃತರು. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಇವರು, ಶನಿವಾರ ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂತಿರುಗುತ್ತಿದ್ದರು. ಜೆ.ಪಿ.ನಗರ 24ನೇ ಕ್ರಾಸ್ ಪುಟ್ಟೇನಹಳ್ಳಿ ಬಳಿ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟೆಂಪೋ ಡಿಕ್ಕಿ ಹೊಡೆದಿದೆ.
ತಲೆಗೆ ಪೆಟ್ಟು ಬಿದ್ದ ಉಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹುಳಿಮಾವು ಸಂಚಾರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಟೆಂಪೋ ವಶಕ್ಕೆ ತೆಗೆದುಕೊಂಡಿದ್ದಾರೆ.
ಸರ ಅಪಹರಣ: ದ್ವಿಚಕ್ರ ವಾಹನದಲ್ಲಿ ಬಂದ ಸವಾರರಿಬ್ಬರು ಮಹಿಳೆಯ ಸರ ಅಪಹರಿಸಿದ ಘಟನೆ ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
  ವಿವೇಕನಗರ 7ನೇ ಕ್ರಾಸ್ ನಿವಾಸಿ ಎಸ್.ಗೀತಾ ಸರ ಕಳೆದುಕೊಂಡವರು. ಸಹೋದರನ ಮನೆಗೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, 40 ಗ್ರಾಂ ಸರ ಕಳೆದುಕೊಂಡಿದ್ದಾರೆ.
ಆರೋಪಿಗಳಿಬ್ಬರೂ ಹೆಲ್ಮೆಟ್ ಧರಿಸಿದ್ದರಿಂದ ಅವರ ಮುಖ ನೋಡಲು ಸಾಧ್ಯವಾಗಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement