ಕಾವೇರಿ: ಇಂದು ವಾಟಾಳ್ ಪ್ರತಿಭಟನೆ
ಬೆಂಗಳೂರು: ಕಾವೇರಿ ನ್ಯಾಯಮಂಡಳಿ ತೀರ್ಪನ್ನು ಕೇಂದ್ರ ಸರ್ಕಾರ ಗೆಜೆಟ್ನಲ್ಲಿ ಪ್ರಕಟಿಸಬಾರದೆಂದು ಒತ್ತಾಯಿಸಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಫೆ.18ರಂದು ಮೈಸೂರು ಬ್ಯಾಂಕ್ ವೃತ್ತದಿಂದ ನಗರ ರೇಲ್ವೆ ನಿಲ್ದಾಣದವರೆಗೆ ಮೆರವಣಿಗೆ ನಡೆಸಲಿದ್ದಾರೆ. ಬೆಳಿಗ್ಗೆ 11.30ಕ್ಕೆ ವಾಟಾಳ್ ನೇತೃತ್ವದಲ್ಲಿ ರಾಜ್ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್ ಸೇರಿದಂತೆ ನೂರಾರು ಕನ್ನಡಪರ ಹೋರಾಟಗಾರರು ನಗರ ರೇಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲಿದ್ದಾರೆ ಎಂದು ವಾಟಾಳ್ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.