ಆಯ ತಪ್ಪಿ ಬಿದ್ದು ಟೆಕಿ ಸಾವು
ಬೆಂಗಳೂರು: ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ಸಾಫ್ಟ್ವೇರ್ ಎಂಜಿನಿಯರ್ ಬಸ್ಗೆ ಸಿಲುಕಿ ಮೃತಪಟ್ಟಿರುವ ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ದೇವನಹಳ್ಳಿ ಕೋಟೆ ನಿವಾಸಿ ರಾಮ್ಮೋಹನ್ ಎಂಬುವವರ ಪುತ್ರಿ ಜಲಜಾಶ್ರೀ(27) ಮೃತರು. ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಎಚ್ಪಿ ಕಂಪನಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಬಳ್ಳಾರಿ ರಸ್ತೆಯ ಚಿಕ್ಕಸಣ್ಣೇಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಜಲಜಾಶ್ರೀ ಅವರು ಪ್ರತಿನಿತ್ಯ ಅದೇ ಬಸ್ಗೆ ಹೋಗುತ್ತಿದ್ದರು. ಮಂಗಳವಾರ ಮನೆಯಿಂದ ಹೊರಡುವಾಗ ಸ್ವಲ್ಪ ತಡವಾಗಿದೆ. ಈ ವೇಳೆ ತಂದೆ ಜೊತೆ ದ್ವಿಚಕ್ರ ವಾಹನದಲ್ಲಿ ಬಂದ ಅವರು, ಬಸ್ ಹೊರಟಿದ್ದುದನ್ನು ಗಮನಿಸಿದರು.
ನಂತರ ವಾಹನವನ್ನು ಹಿಂಬಾಲಿಸುತ್ತಾ ಸ್ವಲ್ಪ ದೂರ ಹೋದರು. ಬಸ್ ಹತ್ತುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಅದೇ ಬಸ್ನ ಹಿಂಬದಿ ಚಕ್ರ ಅವರ ಮೇಲೆ ಹರಿದಿದೆ. ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ದೇವನಹಳ್ಳಿ ಸಂಚಾರ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ. ಬಸ್ ಚಾಲಕನನ್ನು ಬಂಧಿಸಿ ವಾಹನ ವಶಕ್ಕೆ ತೆಗೆದುಕೊಂಡಿದ್ದಾರೆ. ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಮೃತದೇಹ ಒಪ್ಪಿಸಲಾಗಿದೆ.
ಜಲಜಾಶ್ರೀ ಅವರು ಪ್ರತಿನಿತ್ಯ ದೇವನಹಳ್ಳಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವೃತ್ತದವರೆಗೆ ಬಂದು, ನಂತರ ಅಲ್ಲಿಂದ ಕಂಪನಿಯ ವಾಹನದಲ್ಲಿ ಎಲೆಕ್ಟ್ರಾನಿಕ್ ಸಿಟಿಗೆ ಹೋಗುತ್ತಿದ್ದರು. ಮಂಗಳವಾರ ಬೆಳಗ್ಗೆ ಕೆಲಸಕ್ಕೆ ಹೋಗುವ ಧಾವಂತದಲ್ಲಿ ಆಯತಪ್ಪಿ ಬಿದ್ದು ಈ ಅನಾಹುತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.