ಕನ್ನಡ ಬಳಸದ ಅಧಿಕಾರಿಗಳ ಮೇಲೆ ಕ್ರಮ: ಸಿಎಂ ಶೆಟ್ಟರ್
ಬೆಂಗಳೂರು: ಆಡಳಿತದಲ್ಲಿ ಕನ್ನಡ ಬಳಸದೆ ವಿರೋಧಿ ನೀತಿ ಅನುಸರಿಸುತ್ತಿರುವ ಹಿರಿಯ ಅಧಿಕಾರಿಗಳ ವಿರುದ್ಧ ಕಠಿಣ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಹೊರ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಕನ್ನಡ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮದಲ್ಲಿ ಮಂಗಳವಾರ ಅವರು ಮಾತನಾಡಿದರು.
ಕನ್ನಡ ಭಾಷೆ ಬಳಸದ 90 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಪ್ರಸ್ತಾಪಿಸಿದ ವಿಷಯಕ್ಕೆ ಪೂರಕವಾಗಿ ಶೆಟ್ಟರ್ ಮಾತನಾಡಿ, ಆಡಳಿತದಲ್ಲಿ ಕನ್ನಡವೇ ಜಾರಿಯಾಗಬೇಕು. ಉಲ್ಲಂಘಿಸಿದರೆ ಕ್ರಮ ಅಗತ್ಯ ಎಂದು ಎಚ್ಚರಿಸಿದರು.
ಕನ್ನಡಿಗರಿಗೆ ಉದ್ಯೋಗ, ಭಾಷಾ ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡುವ ಸರೋಜಿನಿ ಮಹಿಷಿ ವರದಿ ಜಾರಿಗೆ ಇದೀಗ ಕಾಲ ಕೂಡಿ ಬಂದಿದೆ. ಇದನ್ನು ಜಾರಿಗೊಳಿಸಲು ಪ್ರಯತ್ನಿಸಲಾಗುತ್ತದೆ. ಅಲ್ಲದೆ, ರಾಜ್ಯದಲ್ಲಿರುವ 24 ಸಾವಿರ ಹಿರಿಯ ಪ್ರಾಥಮಿಕ ಪಾಠಶಾಲೆಗಳ ಮಕ್ಕಳಿಗೆ ಕಂಪ್ಯೂಟರ್ ವಿತರಣೆ ಹಾಗೂ ಕನ್ನಡ ಭಾಷಾ ಗಣಕ ನೀತಿ ಪ್ರಕಟಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
ಹೊರ ನಾಡ ಕನ್ನಡಿಗರಿಗೆ ರಕ್ಷಣೆ: ಹೊರ ರಾಜ್ಯದಲ್ಲಿರುವ ಕನ್ನಡಿಗರ ರಕ್ಷಣೆ ಹಾಗೂ ಅವರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.
ಕನ್ನಡ ಭಾಷೆ ಬೆಳವಣಿಗೆ, ಗಣಕ ನೀತಿ ಹಾಗೂ ಕನ್ನಡ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಅನಂತಕುಮಾರ್ ಪ್ರಸ್ತಾಪಿಸಿದ ವಿಷಯಗಳ ಅನುಷ್ಠಾನದ ಬಗ್ಗೆ ಮುಖ್ಯಮಂತ್ರಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ತಮಿಳುನಾಡಿನಲ್ಲಿ ಕನ್ನಡ ಭಾಷೆಯನ್ನು ತೃತೀಯ ಭಾಷೆಯನ್ನಾಗಿ ಅಳವಡಿಸುವ ಮುನ್ನ ಚರ್ಚೆಯ ಅಗತ್ಯವಿತ್ತು. ಈಗಲೂ ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು ಚರ್ಚಿಸಿ ಕ್ರಮ ಕೈಗೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ತಿಳಿಸಿದರು.
ತಮಿಳುಶಾಲೆ ಮುಚ್ಚುವ ಎಚ್ಚರಿಕೆ: ತಮಿಳುನಾಡಿನಲ್ಲಿ ಕನ್ನಡ ವಿದ್ಯಾರ್ಥಿಗಳಿ ಕನ್ನಡ ಭಾಷೆ ಕಲಿಕೆಗೆ ಅಡ್ಡಿಪಡಿಸಿದರೆ ಕರ್ನಾಟಕದಲ್ಲಿ ತಮಿಳು ಶಾಲೆಗಳನ್ನು ಮುಚ್ಚಬೇಕಾಗುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ನುಡಿದರು.
ಹೊರ ರಾಜ್ಯದಲ್ಲಿ ಕನ್ನಡ ಅಧ್ಯಯನ ಮಾಡಿದವರಿಗೆ ರಾಜ್ಯದಲ್ಲಿ ಉದ್ಯೋಗ ಸಿಗುವಂತೆ ಪ್ರಾಶಸ್ತ್ಯ ನೀಡುವ ಅಗತ್ಯ ಇದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಗೋವಿಂದ ಕಾರಜೋಳ ನುಡಿದರು.
ವಾರಣಾಸಿಯಲ್ಲಿ ಕನ್ನಡ ಅಧ್ಯಯನ ಪೀಠ ಮುಚ್ಚಿದೆ. ಅದನ್ನು ಮತ್ತೆ ಪ್ರಾರಂಭಿಸುವ ಕಾರ್ಯ ಆಗಬೇಕಿದೆ. ತಮಿಳುನಾಡು ಕನ್ನಡವನ್ನು ಮೂರನೇ ಭಾಷೆಗೆ ಮಾತ್ರ ಸೀಮಿತ ಮಾಡಿದೆ ಎಂದು ನಾವೂ ಹಾಗೆ ಮಾಡುವುದು ಸರಿಯಲ್ಲ. ಎರಡೂ ರಾಜ್ಯದ ಮುಖ್ಯಮಂತ್ರಿಯವರು ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಬೇಕು ಎಂದು ಸುತ್ತೂರು ಮಠಾಧೀಶ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.