820 ಪಿಯು ಉಪನ್ಯಾಸಕರ ಕೊರತೆ
ಕ.ಪ್ರ. ವಾರ್ತೆ ಬೆಂಗಳೂರು ಮಾ. 2
ದ್ವಿತೀಯ ಪಿಯುಸಿ ಪರೀಕ್ಷೆಗೆ ಇನ್ನು 10 ದಿನಗಳ ಬಾಕಿ ಉಳಿದಿದೆ. ಆದರೆ, ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಉಪನ್ಯಾಸಕರ ಕೊರತೆ ಎದ್ದು ಕಾಣುತ್ತಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಜನವರಿ ಮಾಸಾಂತ್ಯದಲ್ಲಿ ನೀಡಿರುವ ಮಾಹಿತಿ ಪ್ರಕಾರ, ಪರೀಕ್ಷಾ ಸಿದ್ಧತೆಗೆ
1202 ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 820 ಉಪನ್ಯಾಸಕ ಕೊರತೆ ಇದೆ. ವಿಷಯಾಧಾರಿತವಾಗಿ ಯಾವ ಕಾಲೇಜಿನಲ್ಲಿ ಎಷ್ಟು ಉಪನ್ಯಾಸಕರ ಅವಶ್ಯವಿದೆ ಎಂಬ ಮಾಹಿತಿಯನ್ನೂ ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಈ ಕೊರತೆ ಕೇವಲ ಸರ್ಕಾರಿ ಶಾಲೆಗಳಿಗೆ ಮಾತ್ರ ಸೀಮಿತವಲ್ಲ. ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿಯೂ ಈ ಸಮಸ್ಯೆ ಇರಬಹುದು. ಆದರೆ, ಈ ಬಗ್ಗೆ ಯಾವುದೇ ಕಾಲೇಜಿನ ಆಡಳಿತ ಮಂಡಳಿ ಮಾಹಿತಿ ನೀಡದಿರುವುದರಿಂದ ಕೊರತೆ ಪ್ರಮಾಣ ತಿಳಿಯುತ್ತಿಲ್ಲ.
ಪಿಯುಸಿ ಪರೀಕ್ಷೆಗೆ 6.13ಲಕ್ಷ ವಿದ್ಯಾರ್ಥಿಗಳು ಹೆಸರು ದಾಖಲು ಮಾಡಿದ್ದಾರೆ. ಇಂತಹ ಸಂದರ್ಭದಲ್ಲಿ ಪರೀಕ್ಷೆಗೆ ಅವರನ್ನು ಸಿದ್ಧಪಡಿಸಬೇಕಾದ ಉಪನ್ಯಾಸಕರೇ ಕಡಿಮೆ ಸಂಖ್ಯೆಯಲ್ಲಿ ಇರುವುದರಿಂದ ವಿದ್ಯಾರ್ಥಿಗಳು ಯಾವ ರೀತಿ ಪರೀಕ್ಷೆಗೆ ಸಜ್ಜಾಗಲಿದ್ದಾರೆ ಎಂಬುದು ಪ್ರಶ್ನೆಯಾಗಿ ಉಳಿದಿದೆ.
ಕಳೆದ ವರ್ಷ ನೇಮಕ: ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ನೀಗಿಸುವ ಉದ್ದೇಶದಿಂದ ಸರ್ಕಾರ 2012-13ನೇ ಸಾಲಿಗೆ 1764 ಉಪನ್ಯಾಸಕರ ನೇಮಕಾತಿಗೆ ಆದೇಶ ಹೊರಡಿಸಿತ್ತು. ಜೊತೆಗೆ ಅವರಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದೆ. ಇದೀಗ ಉಪನ್ಯಾಸಕರ ಸಾಮರ್ಥ್ಯ ಪರೀಕ್ಷೆ ನಡೆಯುತ್ತಿರುವುದರಿಂದ ಈ ಉಪನ್ಯಾಸಕರು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಾಲೇಜುಗಳಲ್ಲಿ ಪಾಠ ಪ್ರಾರಂಭಿಸುವ ಸಾಧ್ಯತೆ ಇದೆ. ಹೀಗಾಗಿ ಅವರು ಈ ಬಾರಿ ವಿದ್ಯಾರ್ಥಿಗಳಿಗೆ ಲಭ್ಯವಾಗುವುದಿಲ್ಲ.
ಅಸಮಾನ ಹಂಚಿಕೆ: ಅಲ್ಲದೆ, ನೇಮಕವಾಗಿರುವ ಉಪನ್ಯಾಸಕರನ್ನು ಕಾಲೇಜುಗಳಿಗೆ ಸಮಾನವಾಗಿ ಹಂಚಿಕೆ ಮಾಡಿಲ್ಲ. ನಗರ ಪ್ರದೇಶದಲ್ಲಿ ಹೆಚ್ಚು ಉಪನ್ಯಾಸಕರಿದ್ದರೆ, ಗ್ರಾಮೀಣ ಭಾಗದ ಕಾಲೇಜುಗಳಲ್ಲಿ ಉಪನ್ಯಾಸಕರೇ ಇಲ್ಲದಂತಾಗಿದೆ ಎನ್ನುತ್ತಾರೆ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ಅಧ್ಯಕ್ಷ ತಿಮ್ಮಯ್ಯ ಪುರ್ಲೆ.
-ದೇವರಾಜ್ ಎಲ್.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.