ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಳಗಾವಿ

'ವಿಜ್ಞಾನ ಕ್ಷೇತ್ರದಲ್ಲಿ ಹೊಸ ಸಂಶೋಧನೆ ಅಗತ್ಯ'

Parashurama
Updated On : 10 Feb 2013, 12:10 pm

ಬೆಳಗಾವಿ: ವಿಜ್ಞಾನ ಕ್ಷೇತ್ರದಲ್ಲಿ ಹೊಸ ಹೊಸ ಸಂಶೋಧನೆ ನಡೆಯಬೇಕಿದೆ. ಮಾನವನ ಕಲ್ಪನಾ ಶಕ್ತಿ ಅಪರಿಮಿತವಾಗಿದ್ದು, ಇದನ್ನು ಸೀಮಿತಗೊಳಿಸದೆ ವಿಜ್ಞಾನದ ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜೈನ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಡಿ.ಎಚ್. ರಾವ್ ಹೇಳಿದ್ದಾರೆ.
ನಗರದ ಬಸವೇಶ್ವರ ಸಭಾಭವನದಲ್ಲಿ ಶುಕ್ರವಾರ ಬೆಂಗಳೂರಿನ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ, ರಾಜ್ಯ ವಿಜ್ಞಾನ ಪರಿಷತ್ ಹಾಗೂ ಡಾ. ಸ.ಜ. ನಾಗಲೋಟಿಮಠ ವಿಜ್ಞಾನ ಕೇಂದ್ರ ವತಿಯಿಂದ ಆಯೋಜಿಸಿದ್ದ 'ವಿದ್ಯಾರ್ಥಿ ವಿಜ್ಞಾನ ನೇರ ಸಂವಾದ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಭೆ ಯಾರೊಬ್ಬರ ಸ್ವತ್ತಲ್ಲ. ಹೀಗಾಗಿ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಪ್ರತಿಭೆಯಿದೆ. ಈ ಪ್ರತಿಭೆಯನ್ನು ಗುರುತಿಸಬೇಕಾಗಿದೆ. ವಿದ್ಯಾರ್ಥಿಗಳು ಕಲಿಕೆಯ ಸಂದರ್ಭದಲ್ಲಿಯೇ ಹೆಚ್ಚು ಹೆಚ್ಚು ಜ್ಞಾನ ಸಂಪಾದಿಸಬೇಕು. ಸಂಪಾದಿಸಿದ ಜ್ಞಾನವನ್ನು ವಿಜ್ಞಾನದಲ್ಲಿ ಹೊಸ ಹೊಸ ಸಂಶೋಧನೆ ಮಾಡಲು ವಿನಿಯೋಗಿಸಬೇಕಾಗಿದೆ ಎಂದು ಹೇಳಿದರು.
ವಿಜ್ಞಾನದ ಸಂಶೋಧನೆಯಲ್ಲಿ ವಿದ್ಯಾರ್ಥಿಗಳು ಸಂಪಾದಿಸಿದ ಜ್ಞಾನಕ್ಕಿಂತಲೂ ಕಲ್ಪನಾ ಶಕ್ತಿ ಬಹುಮುಖ್ಯವಾಗಿದೆ. ಹೀಗಾಗಿ ವಿಜ್ಞಾನದ ವಿದ್ಯಾರ್ಥಿಗಳು ಪ್ರತಿ ಕ್ಷಣವೂ ನೂತನ ವಿಚಾರಗಳ ಕುರಿತು ಆಲೋಚನೆ, ಸಂಶೋಧನೆ ಮತ್ತು ತಮ್ಮನ್ನು ತಾವು ಪ್ರಶ್ನೆ ಮಾಡಿಕೊಂಡು ಉತ್ತರ ಹುಡುಕುವ ಕಾರ್ಯದಲ್ಲಿ ನಿರತರಾಗಬೇಕಾಗಿದೆ ಎಂದು ಹೇಳಿದರು.
ವಿಜ್ಞಾನದ ಕ್ಷೇತ್ರದಲ್ಲಿ ಸಂಶೋಧನೆ ನಿರಂತರವಾಗಿ ಸಾಗಲಿದೆ. ಪ್ರತಿ ಹಂತದಲ್ಲೂ ವಿಜ್ಞಾನದಲ್ಲಿ ಸಂಶೋಧಕರು ಹೊಸತನದ ಆವಿಷ್ಕಾರ ಮಾಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಆಸಕ್ತಿ ವಹಿಸಬೇಕಾಗಿದೆ ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದಿವಾಕರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಪುಸ್ತಕದ ಜ್ಞಾನ ಜೊತೆ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿರುವ ಜ್ಞಾನವನ್ನು ಸಂಪಾದಿಸಬೇಕಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಒಂದು ಕ್ಷೇತ್ರದ ಅಧ್ಯಯನಕ್ಕೆ ಮಾತ್ರ ಸೀಮಿತಗೊಳ್ಳಬಾರದು. ಬದಲಾಗಿ ಸಮಾಜದ ಎಲ್ಲ ಕ್ಷೇತ್ರಗಳ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಡಾ. ಸ.ಜ.ನಾ. ವಿಜ್ಞಾನ ಕೇಂದ್ರದ ಅಧ್ಯಕ್ಷ ಶಿವಕುಮಾರ ಸಂಬರಗಿಮಠ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯ ಕಾರ್ಯದರ್ಶಿ ಬಿ.ಜಿ. ನಾಯಕ, ಡಯಟ್ ಕಾಲೇಜಿನ ಪ್ರಾಚಾರ್ಯ ಕೆಂಚರೆಡ್ಡೇರ ಆಗಮಿಸಿದ್ದರು.
ಕರ್ನಾಟಕ ವಿಜ್ಞಾನ ವಿದ್ಯಾ ಜಾಗೃತಿಯ ಜಿಲ್ಲಾ ಸಂಯೋಜಕ ಆರ್.ಜಿ. ಹಲಗಲಿಮಠ ಸ್ವಾಗತಿಸಿದರು. ಶಿಕ್ಷಕಿಯರಾದ ಹೇಮಲತಾ ಕುಲಕರ್ಣಿ ಮತ್ತು ಶಿವಲೀಲಾ ಪೂಜಾರ ನಿರೂಪಿಸಿದರು. ಜಿಲ್ಲಾ ವಿಜ್ಞಾನ ಸಮಿತಿಯ ಕಾರ್ಯದರ್ಶಿ ರಾಜನಂದಾ ಭಿಕಾಜಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments