ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬೆಳಗಾವಿ

ಮಿಶ್ರ ಬೆಳೆ ಪದ್ಧತಿ ಅನುಸರಿಸಿ ಡಾ. ಹೆಗ್ಗಡೆ

Parashurama
Updated On : 8 Mar 2013, 11:52 am

ಬೆಳಗಾವಿ: ಉತ್ತರ ಕರ್ನಾಟಕದ ರೈತರು ವಾತಾವರಣ, ಮಳೆ, ಬೆಳೆಗೆ ಅನುಗುಣವಾಗಿ ಮಿಶ್ರ ಬೆಳೆ ಪದ್ಧತಿ ಅಳವಡಿಸಿಕೊಂಡು ಕೃಷಿಯಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಸಾಧಿಸಬೇಕೆಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಗುರುವಾರ ತಾಲೂಕಿನ ಹಲಗಾ ಗ್ರಾಮದ ಜೆಆರ್‌ಡಿ ಭರತೇಶ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ಪ್ರಗತಿಬಂಧು-ಸ್ವಸಹಾಯ ಸಂಘಗಳ ನೂತನ ಒಕ್ಕೂಟಗಳ ಉದ್ಘಾಟನೆ, ಜಿಲ್ಲಾ ಕೆಎಂಎಫ್ ವ್ಯಾಪ್ತಿಯ 100 ಹಾಲು ಉತ್ಪಾದಕರ ಸಹಕಾರಿ ಸಂಘಗಳಿಗೆ ಒದಗಿಸಿದ 51 ಲಕ್ಷ ಮೌಲ್ಯದ ಉಪಕರಣಗಳ ವಿತರಣಾ ಸಮಾರಂಭ ಹಾಗೂ ಬೆಳಗಾವಿ ಹಾಲು ಒಕ್ಕೂಟದ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಕೃಷಿ ಚಟುವಟಿಕೆಯಿಂದ ಹಿಡಿದು ಎಲ್ಲದರಲ್ಲೂ ಉತ್ತರ ಕರ್ನಾಟಕದ ಮಂದಿ ಮುಂದಿದ್ದಾರೆ. ಗ್ರಾಮೀಣ ಪ್ರದೇಶದ ರೈತರು ಹಾಲು ಮತ್ತು ಹೂವು ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಿಬೇಕಾಗಿದೆ. ಮಿಶ್ರ ಬೆಳೆ ಪದ್ಧತಿ ಅನುಸರಿಸುವುದರಿಂದ ರೈತರು ಆರ್ಥಿಕವಾಗಿ ಸದೃಢಗೊಳ್ಳಬಹುದು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬರೂ ಸ್ವಪ್ರಯತ್ನ ಮತ್ತು ಆತ್ಮವಿಶ್ವಾಸದಿಂದ ಕಾರ್ಯ ನಿರ್ವಹಿಸಿ ಯಶಸ್ಸು ಸಾಧಿಸಬೇಕು. ಸ್ವಪ್ರಯತ್ನದಿಂದ ಕರ್ಮ, ಕಾರ್ಯ ಮಾಡುವವರು ಭಗವಂತನ ಅನುಗ್ರಹಕ್ಕೆ ಪಾತ್ರರಾಗುತ್ತಾರೆ.
ಸಮಾಜದ ಪ್ರತಿಯೊಬ್ಬ ವ್ಯಕ್ತಿ ಜೀವನದಲ್ಲಿ ಮಾನಸಿಕವಾಗಿ ಮತ್ತು ಆರ್ಥಿಕವಾಗಿ ಬೆಳವಣಿಗೆ ಸಾಧಿಸಬೇಕು. ಆಗ ಮಾತ್ರ ಇನ್ನೊಬ್ಬರ ಹಂಗಿಲ್ಲದೆ ಸ್ವಂತ ಬಲದಿಂದ ಸ್ವ ಸಾಮರ್ಥ್ಯದಿಂದ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.
ಈಗಾಗಲೇ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಬೆಳಗಾವಿ ಜಿಲ್ಲೆಯಲ್ಲಿ ಎರಡು ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈವರೆಗೆ ಸಂಸ್ಥೆ 1.65 ಲಕ್ಷ ಸದಸ್ಯರನ್ನು ಹೊಂದಿದ್ದು, ಬರೀ ಎರಡು ವರ್ಷದ ಅಧಿವಯಲ್ಲಿ ಜಿಲ್ಲೆಯ ಸ್ವಸಹಾಯ ಸಂಘಗಳು ರು. 14 ಕೋಟಿ ಉಳಿತಾಯ ಮಾಡಿವೆ. ಅದಲ್ಲದೇ, ಜಿಲ್ಲೆಯ 15 ಸಾವಿರ ಗುಂಪುಗಳ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಸದ ಸುರೇಶ ಅಂಗಡಿ ಮಾತಾನಾಡಿ, ಹಾಲು ಉತ್ಪಾದನೆಯಲ್ಲಿ ಭಾರತ ಪ್ರಪಂಚದಲ್ಲಿ ಮೊದಲ ಸ್ಥಾನದಲ್ಲಿದೆ. ಅದರಲ್ಲೂ ಕೃಷಿ ಮತ್ತು ಹೈನುಗಾರಿಕೆ ಚಟುವಟಿಕೆಯಲ್ಲಿ ಮಹಿಳೆಯ ದುಡಿಮೆ ಹೆಚ್ಚಾಗಿದ್ದು, ಹೀಗಾಗಿ ಮಹಿಳೆಯರಿಂದಲೇ ನಮ್ಮ ಆರ್ಥಿಕ ಸ್ಥಿತಿಗತಿ ಉತ್ತಮವಾಗಿದೆ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಮಹಿಳೆಯರ ಮತ್ತು ಸಮಾಜದ ಸ್ವಾಲಂಭನೆಗೆ ಶ್ರಮಿಸುತ್ತಿದೆ ಎಂದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ವಿವಿಧ ಸಂಘಗಳ ಪರವಾಗಿ ಸನ್ಮಾನಿಸಲಾಯಿತು.
ಶಾಸಕ ಸಂಜಯ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ಡಾ. ಎಲ್.ಎಚ್. ಮಂಜುನಾಥ. ಭರತೇಶ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಾಜೀವ ದೊಡ್ಡಣ್ಣವರ, ಜನಜಾಗೃತಿ ವೇದಿಕೆ ಸದಸ್ಯ ಚಾರುಕೀರ್ತಿ ಸೈಬಣ್ಣವರ ಆಗಮಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments