ನಗರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ: ಶಾಸಕ ಸೇಠ್
ಬೆಳಗಾವಿ: ಭಾಷೆ, ಜಾತಿ, ಮತ ಮರೆತು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕು ಎಂದು ಉತ್ತರ ಕ್ಷೇತ್ರದ ಶಾಸಕ ಫಿರೋಜ್ ಸೇಠ್ ಅವರು ನಗರ ಸೇವಕರಿಗೆ ಸಲಹೆ ನೀಡಿದ್ದಾರೆ.
ಬೆಳಗಾವಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ನೂತನ ನಗರ ಸೇವಕರ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಬೆಳಗಾವಿ ಕ್ಷೀಪ್ರಗತಿಯಲ್ಲಿ ಬೆಳೆಯುತ್ತಿದ್ದು, ಅದರಂತೆ ಅಭಿವೃದ್ಧಿ ಕಾರ್ಯ ಕೂಡ ನಡೆಯಬೇಕಿದೆ. ಸ್ವಚ್ಛ ಹಾಗೂ ಸುಂದರ ನಗರವನ್ನು ನಿರ್ಮಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜು ಸೇಠ್ ಮಾತನಾಡಿ, ಎಲ್ಲರೂ ನಗರದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ. ಅಲ್ಲದೇ, ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳ ನಿವಾರಣೆಗೂ ಶ್ರಮಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಎಂಇಎಸ್ ತೊರೆದು ನಗರ ಸೇವಕರಾದ ಅನುಶ್ರೀ ದೇಶಪಾಂಡೆ ಮತ್ತು ಮೈನಾಬಾಯಿ ಚೌಗಲೆ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಕನ್ನಡ ಮತ್ತು ಉರ್ದು ನಗರ ಸೇವಕರನ್ನು ಸನ್ಮಾನಿಸಲಾಯಿತು. ಬಾಬು ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಪರಶುರಾಮ ವಗ್ಗನ್ನವರ ವಂದಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.