ಡಾ. ಬಾಬೂಜಿ ಜನ್ಮದಿನಾಚರಣೆ
ಬಳ್ಳಾರಿ: ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಶುಕ್ರವಾರ ಹಸಿರುಕ್ರಾಂತಿ ಹರಿಕಾರ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ 106ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.
ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಾಂಕೇತಿಕವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ, ಜಿಲ್ಲಾಧಿಕಾರಿ ಅಮ್ಲನ್ ಆದಿತ್ಯ ಬಿಸ್ವಾಸ್, ಜಿಪಂ ಸಿಇಓ ಎಂ. ಮಂಜುನಾಥ ನಾಯಕ್, ಎಸ್ಪಿ ಡಾ. ಚಂದ್ರಗುಪ್ತ ಅವರುಗಳು ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಕೆ. ಬಾಬಾ, ಮಹಾನಗರ ಪಾಲಿಕೆ ಆಯುಕ್ತ ಡಿ.ಎಲ್. ನಾರಾಯಣ, ಜಿಪಂ ಉಪಕಾರ್ಯದರ್ಶಿ ರವಿ ಬಸರಳ್ಳಿ, ಮುಖ್ಯ ಲೆಕ್ಕಾಧಿಕಾರಿ ಚೆನ್ನಪ್ಪ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಪೂಲಯ್ಯ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಗಾವಂಕರ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಲಾವಿದ ಯಲ್ಲಪ್ಪ ಭಂಡಾರಿ ನಾಡಗೀತೆ ಮತ್ತು ಕ್ರಾಂತಿಗೀತೆಗಳನ್ನು ಹಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ ಸ್ವಾಗತಿಸಿದರು. ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಎನ್. ರಾಜಪ್ಪ ವಂದಿಸಿದರು.