ಕಾಂಗ್ರೆಸ್ನಲ್ಲಿ ಭುಗಿಲೆದ್ದ ಅಸಮಾಧಾನ
ಬಳ್ಳಾರಿ: ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲೂ ಕಾಂಗ್ರೆಸ್ಗೆ ಬಂಡಾಯದ ಬಿಸಿ ತಾಕಿದೆ. ಗ್ರಾಮೀಣ ಕ್ಷೇತ್ರದ ಕೈ ಟಿಕೆಟ್ ಆಕಾಂಕ್ಷಿ ವಿ.ಕೆ. ಬಸಪ್ಪ ಅವರು ಪಕ್ಷದ ಟಿಕೆಟ್ ಹಂಚಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾದವರಿಗೆ ಟಿಕೆಟ್ ನೀಡುವ ಮೂಲಕ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿದ್ದಾರೆ ಎಂದು ತಮ್ಮ ನೋವನ್ನು ಮಾಧ್ಯಮದವರ ಮುಂದೆ ತೋಡಿಕೊಂಡಿದ್ದಾರೆ.
ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಲು ಹೋದರೆ ಅವರು ಸಿಕ್ಕಿಲ್ಲ. ಬಳ್ಳಾರಿ ಗ್ರಾಮೀಣ ಕ್ಷೇತ್ರದ ಆಕಾಂಕ್ಷಿಯಾಗಿದ್ದ ನನಗೆ ಪಕ್ಷದ ಟಿಕೆಟ್ ತಪ್ಪಲು ರಾಜ್ಯಸಭಾ ಸದಸ್ಯ ಅನಿಲ್ ಲಾಡ್ ಹಾಗೂ ಇತರರು ಕಾರಣರಾಗಿದ್ದು, ಏ. 12ರಂದು ಕಾರ್ಯಕರ್ತರ, ಬೆಂಬಲಿಗರ, ಅಭಿಮಾನಿಗಳ ಸಭೆ ಕರೆದಿದ್ದು, ಪಕ್ಷದಲ್ಲಿರುವ ಅಥವಾ ಪಕ್ಷ ಬಿಡುವ ಬಗ್ಗೆ, ಸ್ವತಂತ್ರವಾಗಿ ಸ್ಪರ್ಧಿಸುವ ಕುರಿತು ತಮ್ಮ ನಿರ್ಧಾರವನ್ನು ಪ್ರಕಟಿಸಲಾಗುತ್ತದೆ ಎಂದು ಬಳ್ಳಾರಿ ನಗರ ಬಸಪ್ಪ ತಿಳಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2008ರ ಸಾರ್ವತ್ರಿಕ ಚುನಾವಣೆಯಿಂದ ಇಂದಿನವರೆಗೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ದುಡಿದಿದ್ದೇನೆ. ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದೇನೆ. ನನ್ನ ವಿರುದ್ಧ ಸುಳ್ಳು ಮೊಕದ್ದಮೆಗಳನ್ನು ದಾಖಲಿಸಲಾಗಿತ್ತು. ಆದರೆ ಪಕ್ಷದ ಪರವಾಗಿ ಕಾರ್ಯನಿರ್ವಹಿಸುತ್ತಿರುವ ತಮಗೆ ಟಿಕೆಟ್ ನೀಡದಿರುವುದು ತೀವ್ರ ಬೇಸರ ತಂದಿದೆ ಎಂದು ತಿಳಿಸಿದರು.
ಅನಿಲ್ ಲಾಡ್ ಕಾರಣ: ನನಗೆ ಟಿಕೆಟ್ ಕೈ ತಪ್ಪಲು ಸಂಸದ ಅನಿಲ್ ಲಾಡ್ ಕಾರಣರಾಗಿದ್ದಾರೆ. ಕೆಲ ವಿಷಯಗಳ ಬಗ್ಗೆ ನಮ್ಮಿಬ್ಬರ ಮಧ್ಯೆ ಮನಸ್ತಾಪಗಳಿದ್ದವು. ಆದರೆ ಇದನ್ನೇ ಮನಸ್ಸಿನಲ್ಲಿಟ್ಟುಕೊಂಡು ಟಿಕೆಟ್ ತಪ್ಪಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರು ಮತ್ತಿತರೆ ಮುಖಂಡರಿಗೆ ಹೇಳಿ ಟಿಕೆಟ್ ಸಿಗದಂತೆ ನೋಡಿಕೊಳ್ಳಲಾಗಿದೆ ಎಂದು ದೂರಿದ ಅವರು, 2011ರಲ್ಲಿ ಈ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲೇ ನನಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, ಅನಿವಾರ್ಯ ಕಾರಣಗಳಿಂದ ರಾಮ್ಪ್ರಸಾದ್ ಅವರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿ, ನನಗೆ 2013ರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಆದರೆ, ಇದೀಗ ಪಕ್ಷಕ್ಕಾಗಿ ಶ್ರಮಿಸಿದ ನಿಷ್ಠಾವಂತ ಕಾರ್ಯಕರ್ತರನ್ನು ಬಿಟ್ಟು, ಡಿಸೆಂಬರ್ ತಿಂಗಳಲ್ಲಿ ಪಕ್ಷ ಸೇರಿದವರಿಗೆ ಟಿಕೆಟ್ ನೀಡಿದ್ದು ಸರಿಯಾದ ಕ್ರಮವಲ್ಲ ಎಂದರು.
ಗ್ರಾಮಾಂತರ ಕ್ಷೇತ್ರದ ಮತ್ತೊಬ್ಬ ಆಕಾಂಕ್ಷಿ ಗೋಪಾಲಕೃಷ್ಣ, ಇಸಾಕ್ ಅಹ್ಮದ್, ಮಾಬುಸಾಬ್, ಎಸ್. ಪ್ಯಾರಿಜಾನ್, ದೇವೇಂದ್ರ, ಮೇಘರಾಜ್ ಇದ್ದರು.