ಮತದಾರರು ಮತ್ತೊಮ್ಮೆ ಆಶೀರ್ವದಿಸಿ: ಆನಂದ ಸಿಂಗ್
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಏ. 18
ವಿಜಯನಗರ (ಹೊಸಪೇಟೆ) ವಿಧಾನಸಭಾ ಕ್ಷೇತ್ರದಲ್ಲಿ ತಾವು ಶಾಸಕರಾದ ಮೇಲೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಗ್ರಾಮೀಣ ಪ್ರದೇಶದಲ್ಲಿ ಉತ್ತಮ ರಸ್ತೆಗಳ ನಿರ್ಮಾಣ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದ್ದು, ಮತ್ತೊಮ್ಮೆ ತಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಸಚಿವ ಆನಂದ್‌ಸಿಂಗ್ ಮತದಾರರಲ್ಲಿ ವಿನಂತಿಸಿಕೊಂಡರು.
ತಾಲೂಕಿನ ಬುಕ್ಕಸಾಗರ, ರಾಮಸಾಗರ, ವೆಂಕಟಾಪುರ ಹಾಗೂ ವೆಂಕಟಾಪುರ ಕ್ಯಾಂಪ್‌ನಲ್ಲಿ ಗುರುವಾರ ಮತ ಯಾಚನೆ ನಡೆಸಿ ಮಾತನಾಡಿದರು.
ಕ್ಷೇತ್ರದಲ್ಲಿ ಸದಾ ಜನರೊಂದಿಗೆ ಇದ್ದುಕೊಂಡು ಜನರ ಸುಖ-ದುಃಖಗಳಿಗೆ ಸ್ಪಂದಿಸಿ ಕ್ಷೇತ್ರದ ಅಭಿವೃದ್ಧಿಗೆ ನಿಷ್ಠೆ ಮತ್ತು ಪ್ರಮಾಣಿಕವಾಗಿ ಕೆಲಸ ಮಾಡಿರುವೆ. ಕ್ಷೇತ್ರದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿದ್ದು, ಇನ್ನೂ ಮಹತ್ವದ ಅಭಿವೃದ್ಧಿ ಕಾರ್ಯಗಳಾದ ನೀರಾವರಿ ವ್ಯವಸ್ಥೆ ಸೇರಿದಂತೆ ಈಗಾಗಲೇ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಮುಗಿಸಿ, ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು ವಿನಂತಿಸಿಕೊಂಡರು.
ಇನ್ನೂ ಕ್ಷೇತ್ರದಲ್ಲಿ ನಡೆಯಬೇಕಾಗಿರುವ ಅಭಿವೃದ್ಧಿ ಕೆಲಸಗಳನ್ನು ಮತ್ತು ಸ್ಥಳೀಯ ಸಮಸ್ಯೆಗಳ ಕುರಿತಂತೆ ಆನಂದ್ ಸಿಂಗ್ ಚರ್ಚಿಸಿದರು. ಮತ್ತೊಮ್ಮೆ ಶಾಸಕರಾಗಿ ಆಯ್ಕೆಗೊಂಡ ನಂತರ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು.
ಸ್ಥಳೀಯ ಗ್ರಾಮದ ಮುಖಂಡರು, ಗ್ರಾಪಂ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಕಾರ್ಯಕರ್ತರು ಉಪಸ್ಥಿತರಿದ್ದರು.