ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಸದೃಢ ಪ್ರಜಾಪ್ರಭುತ್ವಕ್ಕೆ ಯೋಗ್ಯ ಅಭ್ಯರ್ಥಿ ಆಯ್ಕೆ ಮಾಡಿ

Srinivasa Murthy VN
Updated On : 30 Apr 2013, 11:53 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಏ. 29
ಜಿಲ್ಲೆಯಲ್ಲಿ ಮೇ 5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ನ್ಯಾಯಸಮ್ಮತವಾಗಿ ಯೋಗ್ಯ ಅಭ್ಯರ್ಥಿಗೆ ಮತ ಚಲಾಯಿಸುವಂತೆ ಮಾಡಲು ವಕೀಲರು ತಮ್ಮ ಕಕ್ಷಿದಾರರು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ. ವಿಶ್ವೇಶ್ವರ ಭಟ್ ಕರೆ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ, ಜಿಪಂ ಹಾಗೂ ವಾರ್ತಾ ಇಲಾಖೆ ಸಹಯೋಗದಲ್ಲಿ ಗುರುವಾರ ವಕೀಲರ ಭವನದಲ್ಲಿ ಏರ್ಪಡಿಸಿದ್ದ ಮತದಾರರ ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರ, ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢಗೊಳಿಸಲು ಯೋಗ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು. ಯಾವುದೇ ಪ್ರಭಾವಗಳಿಗೆ ಒಳಗಾಗದೇ ಮುಕ್ತ ಮತ್ತು ನ್ಯಾಯಯುತವಾಗಿ ಮತದಾನ ಮಾಡಬೇಕು. ಆಡಳಿತ ನಡೆಸುವವರು ಉತ್ತಮರಾಗಿರಬೇಕು. ಇರುವವರಲ್ಲಿಯೇ ಉತ್ತಮ ವ್ಯಕ್ತಿ ಆಯ್ಕೆ ಮಾಡಿ ಒಳ್ಳೆಯ ಆಡಳಿತ ನಡೆಸಲು ಅವಕಾಶ ಕಲ್ಪಿಸಬೇಕು. ಮತದಾನ ಪ್ರಕ್ರಿಯೆಯಲ್ಲಿ ಎಲ್ಲ ಮತದಾರರು ಪಾಲ್ಗೊಳ್ಳಬೇಕು ಎಂದು ಹೇಳಿದರು.
ಜಿಪಂ ಸಿಇಓ ಎಂ. ಮಂಜುನಾಥ ನಾಯಕ್ ಮಾತನಾಡಿ, ಎಲ್ಲ ಮತದಾರರು ಮುಕ್ತವಾಗಿ ಮತಗಟ್ಟೆಗೆ ಆಗಮಿಸಿ ಸೂಕ್ತ ಅಭ್ಯರ್ಥಿಗೆ ಮತ ಚಲಾಯಿಸಬೇಕು. ಯಾವುದೇ ಮತದಾರನು ಮತದಾನದಿಂದ ವಂಚಿತನಾಗಬಾರದು. ನಗರ ಪ್ರದೇಶಗಳಲ್ಲಿ ವಿದ್ಯಾವಂತ ಮತದಾರರಿದ್ದರೂ ಮತದಾನ ಪ್ರಮಾಣ ಕಡಿಮೆಯಾಗಿದೆ. ಮತದಾನ ಪ್ರಮಾಣ ಹೆಚ್ಚಳವಾದಷ್ಟು ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗುತ್ತದೆ. ಕಡಿಮೆ ಮತದಾನವಾಗಿರುವ ಪ್ರದೇಶಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಎ.ಜಿ. ಶಿವಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಚುನಾವಣೆ ವಿಭಿನ್ನವಾಗಿ ನಡೆಯುತ್ತಿದೆ. ಹಿಂದಿನ ಚುನಾವಣೆಗಳಲ್ಲಿ ಅಭ್ಯರ್ಥಿ ಹಾಗೂ ಪಕ್ಷಗಳ ಪರವಾಗಿ ಧ್ವನಿವರ್ಧಕ, ಬ್ಯಾನರ್, ಬಂಟಿಂಗ್‌ಗಳ ಮೂಲಕ ವ್ಯಾಪಕ ಪ್ರಚಾರ ನಡೆಯುತ್ತಿದೆ. ವೆಚ್ಚಕ್ಕೆ ಕಡಿವಾಣ ಹಾಕಿದ ಹಿನ್ನೆಲೆಯಲ್ಲಿ ಸದ್ದು-ಗದ್ದಲವಿಲ್ಲದಂತೆ ಚುನಾವಣೆ ನಡೆಯುತ್ತಿದೆ. ಹಿಂದೆ ವಕೀಲರೇ ಹೆಚ್ಚಿನ ಪ್ರಮಾಣದಲ್ಲಿ ಅಭ್ಯರ್ಥಿಗಳಾಗುತ್ತಿದ್ದರು. ಪ್ರಸ್ತುತ ಬಂಡವಾಳಶಾಹಿಗಳು ರಾಜಕೀಯ ಪ್ರವೇಶ ಮಾಡಿ ವಕೀಲರ ಪ್ರಮಾಣ ಕ್ಷೀಣಿಸಿದೆ. ನ್ಯಾಯಯುತವಾಗಿ ಯಾವುದೇ ಆಮಿಷಗಳಿಲ್ಲದಂತೆ ಚುನಾವಣೆ ನಡೆದರೆ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳ್ಳುತ್ತದೆ ಎಂದು ಹೇಳಿದರು.
ವಕೀಲರ ಸಂಘದ ಕಾರ್ಯದರ್ಶಿ ಡಿ.ಎಸ್. ಬದರಿನಾಥ್, ಜಿಲ್ಲಾ ವಾರ್ತಾಧಿಕಾರಿ ಎಚ್. ಶ್ರೀನಿವಾಸ ಉಪಸ್ಥಿತರಿದ್ದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ, ಮುಖ್ಯ ನ್ಯಾಯಿಕ ದಂಡಾಧಿಕಾರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೊಸಮನಿ ಸಿದ್ಧಪ್ಪ ಎಚ್. ಸ್ವಾಗತಿಸಿದರು. ಸಂಘದ ಖಜಾಂಚಿ ದಿನೇಶ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement