ಎಲ್ಲರೂ ಆರೋಗ್ಯವಂತರಾದರೆ ದೇಶ ಅಭಿವೃದ್ಧಿ
ಹೊಸಪೇಟೆ: ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವಿಸಿದಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣವಾಗಿ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಹಾಯಕ ಆಯುಕ್ತ ಡಾ. ಡಿ.ಆರ್. ಅಶೋಕ್ ಹೇಳಿದರು.
ನಗರದಲ್ಲಿ ಗುರುವಾರ ಸರ್ಕಾರಿ ಬಾಲಕಿಯರ ಪಪೂ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಚೈತನ್ಯ ಹಾಗೂ ಕ್ಷೀರಭಾಗ್ಯ ಯೋಜನೆಗೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, ಶಾಲಾ ವಿದ್ಯಾರ್ಥಿಗಳಲ್ಲಿರುವ ನ್ಯೂನತೆಗಳನ್ನು ಗುರುತಿಸಿ, ಆರೋಗ್ಯ ತಪಾಸಣೆ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿರುವ ಅಪೌಷ್ಟಿಕತೆ ಗುರುತಿಸಲು ಸಾಧ್ಯವಾಗಲಿದೆ. ಅಪೌಷ್ಟಿಕತೆ ಯಿಂದ ನರಳುವ ವಿದ್ಯಾರ್ಥಿಗಳನ್ನು ಗುರುತಿಸಿ ಅಂತಹ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಸೇರಿದಂತೆ ಇತರೆ ಔಷಧೋಪಚಾರ ಕೈಗೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು ಆರೋಗ್ಯವಂತರನ್ನಾಗಿ ರೂಪಿಸಬೇಕಿದೆ ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಶಂಕರ್ ನಾಯ್ಕ ಮಾತನಾಡಿ, ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮದಡಿ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಕಾಯಲೆಗಳು ಕಂಡು ಬಂದಲ್ಲಿ ಸ್ಥಳೀಯವಾಗಿ ಸೂಕ್ತ ಚಿಕಿತ್ಸೆ ನೀಡಲಾಗುತ್ತದೆ. ಆದರೆ ವಿದ್ಯಾರ್ಥಿಗಳಿಗೆ ಮಾರಕ ಮತ್ತು ಗಂಭೀರ ಸ್ವರೂಪದ ಕಾಯಿಲೆ ಕಂಡು ಬಂದರೆ ಬಳ್ಳಾರಿ ಅಥವಾ ಬೆಂಗಳೂರಿನಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಪ್ರತಿ ವಿದ್ಯಾರ್ಥಿಗಳು ಆರೋಗ್ಯಕರವಾಗಿ ಜೀವಿಸಬೇಕು ಎನ್ನುವುದು ಸರ್ಕಾರದ ಮುಖ್ಯ ಉದ್ದೇಶ. ಈ ದಿಸೆಯಲ್ಲಿ ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ಹೇಳಿದರು.
ರೋಟರಿ ಕ್ಲಬ್ ಅಧ್ಯಕ್ಷ ಎಚ್. ಶ್ರೀನಿವಾಸ್ರಾವ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರಶಿಕ್ಷಣಾಧಿಕಾರಿ ಪಿ. ಸುನಂದಾ, ಅಕ್ಷರ ದಾಸೋಹದ ಅಧಿಕಾರಿ ಪದ್ಮನಾಭ ಕರ್ಣಂ, ಕಾಲೇಜು ಪ್ರಾಚಾರ್ಯ ಪುರುಷೋತ್ತಮ, ಉಪ ಪ್ರಾಚಾರ್ಯೆ ಸರಳಾ, ಶಿಕ್ಷಕರ ಸಂಘದ ಮುಖಂಡ ಬಸವರಾಜ್, ಆರೋಗ್ಯ ಇಲಾಖೆ ಅಧಿಕಾರಿ ದೊಡ್ಡಮನಿ ಸೇರಿದಂತೆ ಇತರರು ಭಾಗವಹಿಸಿದ್ದರು.