ಕಾಣದ ಅಭಿವೃದ್ಧಿ: ಬತ್ತದ ಗದ್ದೆಯಾದ ರಸ್ತೆ
ಕನ್ನಡಪ್ರಭ ವಾರ್ತೆ, ಹೂವಿನಹಡಗಲಿ, ಆ. 9
ತಾಲೂಕಿನ ಮಾಗಳ ಗ್ರಾಮದಲ್ಲಿ ಹಾಯ್ದು ಹೋಗಿರುವ ಮಾಗಳ- ಹೊಳಲು ರಸ್ತೆಯ 1 ಕಿ.ಮೀ ರಸ್ತೆ ಅಭಿವೃದ್ಧಿ ಮಾಡಲು ಟೆಂಡರ್ ಆಗಿ 4 ವರ್ಷ ಕಳೆದರೂ ರಸ್ತೆ ಕಾಮಗಾರಿ ಮಾಡದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆ ಮೀನಮೇಷ ಎಣಿಸುತ್ತಿದೆ.
ಡಾ. ನಂಜುಂಡಪ್ಪ ವರದಿಯನ್ವಯ ಗ್ರಾಮದ 1 ಕಿ.ಮೀ ರಸ್ತೆ ಅಭಿವೃದ್ಧಿಗಾಗಿ ರು. 20 ಲಕ್ಷಕ್ಕೆ 4 ವರ್ಷ ಹಿಂದೆಯೇ ಟೆಂಡರ್ ಆಗಿತ್ತು. ಆ ಪ್ರಕಾರ ಗುತ್ತಿಗೆದಾರರು ಸಮರ್ಪಕ ರಸ್ತೆ ಮಾಡದೇ ಕಾಮಗಾರಿ ಅರ್ಧಕ್ಕೆ ನಿಂತಿದೆ. ಈ ಕುರಿತು ಅನೇಕ ಬಾರಿ ಲೋಕೋಪಯೋಗಿ ಇಲಾಖೆಗೆ ಮನವರಿಕೆ ಮಾಡಿದ್ದರೂ ಅಧಿಕಾರಿಗಳು ಮಾತ್ರ ಗುತ್ತಿಗೆದಾರರ ವಿರುದ್ಧ ಈವರೆಗೂ ಕ್ರಮ ಕೈಗೊಂಡಿಲ್ಲ. ಶೀಘ್ರದಲ್ಲೇ ರಸ್ತೆ ಅಭಿವೃದ್ಧಿ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಈ ರಸ್ತೆ ಕಾಮಗಾರಿ ವಿಚಾರವಾಗಿ ಗುತ್ತಿಗೆದಾರರಿಗೆ ಅನೇಕ ಬಾರಿ ನೋಟಿಸ್ ನೀಡಲಾಗಿದೆ. ಕೊನೆಗೆ ಅವರನ್ನು ಕಪ್ಪು ಪಟ್ಟಿಗೆ ಸೇರ್ಪಡೆ ಮಾಡುವಂತೆ ಇಲಾಖೆ ಈಗಾಗಲೇ ನೋಟಿಸ್ ನೀಡಿ ಮೇಲಾಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಮಾಹಿತಿ ನೀಡಲಾಗಿದೆ ಎನ್ನುತ್ತಾರೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು. ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಡೀ ರಸ್ತೆ ಬತ್ತದ ಗದ್ದೆಯಂತಾಗಿದೆ. ಈ ಕುರಿತು ಗ್ರಾಮಸ್ಥರು ಕಳೆದೊಂದು ವಾರದ ಹಿಂದೆ ರಸ್ತೆ ಮೇಲೆ ಬತ್ತದ ನಾಟಿ ಮಾಡಿ ವಿನೂತನ ಪ್ರತಿಭಟನೆ ಮಾಡಿದ್ದರು. ಆದರೂ ಯಾವ ಪ್ರಯೋಜನವಾಗಲಿಲ್ಲ. ಯಾವೊಬ್ಬ ಅಧಿಕಾರಿಗಳು ಬಂದು ಕ್ರಮ ಕೈಗೊಳ್ಳುವ ಭರವಸೆ ನೀಡಲಿಲ್ಲ ಎನ್ನುತ್ತಾರೆ ಗ್ರಾಮಸ್ಥರು.
ವಾರದೊಳಗೆ ರಸ್ತೆ ಅಭಿವೃದ್ಧಿ ಕುರಿತು ಲೋಕೋಪಯೋಗಿ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇದ್ದರೆ ಸಂಬಂಧ ಪಟ್ಟ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದಾರೆ.