ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿಲ್ಲ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಆ. 16
ರಾಜ್ಯ ಸರ್ಕಾರ ಜಾರಿಗೆ ತಂದ ಅನ್ನಭಾಗ್ಯ ಯೋಜನೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಎಂದೆಲ್ಲಾ ಕಾಂಗ್ರೆಸ್ ಹೇಳಿಕೊಳ್ಳುತ್ತದೆ. ಆದರೆ ರಾಜ್ಯದಲ್ಲಿ ಸಮರ್ಪಕ ಹಂಚಿಕೆಯಾಗದ ಬಿಪಿಎಲ್ ಕಾರ್ಡ್ ಶ್ರೀಮಂತರಿಗೆ ದೊರೆತಿದ್ದು, ನಿಜವಾದ ಬಡವರು ಬಿಪಿಎಲ್ ಕಾರ್ಡ್‌ಗಾಗಿ ಪರದಾಡುವಂತಾಗಿದೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದೆಯೇ ಎಂಬುದು ಅರ್ಥವಾಗುತ್ತಿಲ್ಲ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಕೇಂದ್ರ ಹಾಗೂ ರಾಜ್ಯದಲ್ಲಿನ ಆಡಳಿತರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದ ಮುನ್ಸಿಪಲ್ ಮೈದಾನದಲ್ಲಿ ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ 14ನೇ ವರ್ಷದ ಸಾಮೂಹಿಕ ಉಚಿತ ವಿವಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಜನಾರ್ದನ ರೆಡ್ಡಿ ಸಚಿವರಾಗಿದ್ದಾಗ ಜಿಲ್ಲೆಯಲ್ಲಿ ಸಾವಿರಾರು ಕೋಟಿ ರು. ವೆಚ್ಚದಲ್ಲಿ ಕೈಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಸ್ತೆ, ವಾರದ 24 ಗಂಟೆ ಕುಡಿವ ನೀರಿನ ಯೋಜನೆ ಇತರೆ ಅಭಿವೃದ್ಧಿ ಕಾಮಗಾರಿಗಳು ನಗರದಲ್ಲಿ ನಡೆಯುತ್ತಿವೆ. ಜಿಲ್ಲೆಯ ಕಾಂಗ್ರೆಸ್ ಶಾಸಕರು, ಸಚಿವರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಳಕಳಿ- ಕಾಳಜಿ ಇದ್ದರೆ ಕೂಡಲೇ ಹಣ ಬಿಡುಗಡೆ ಮಾಡಿಸಲಿ ಎಂದು ಸವಾಲು ಹಾಕಿದರು.
ಸಿಎಂಗೆ ಕಾಳಜಿ ಇಲ್ಲ: ಅಕ್ರಮ ಗಣಿಗಾರಿಕೆ ವಿರೋಧಿಸಿ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿದ ಕಾಂಗ್ರೆಸ್ ಮುಖಂಡರು, ಜಿಲ್ಲೆ ಹಾಗೂ ರಾಜ್ಯದಲ್ಲಿ ಗಣಿಗಾರಿಕೆ ಸ್ಥಗಿತಗೊಂಡು ಲಕ್ಷಾಂತರ ಜನರು ಬೀದಿಗೆ ಬಿದ್ದಿದ್ದು, ಅವರ ಕಲ್ಯಾಣಕ್ಕೆ, ಉದ್ಧಾರಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲವೇಕೆ ಎಂದು ಪ್ರಶ್ನಿಸಿದರು. ರಾಯಚೂರು, ಬಳ್ಳಾರಿ ಜಿಲ್ಲೆಗಳ ರೈತರ ಲಕ್ಷಾಂತರ ಎಕರೆ ಭೂಮಿಗೆ ನೀರುಣಿಸುವ ತುಂಗಭದ್ರಾ ಜಲಾಶಯದಲ್ಲಿ ಈಗಾಗಲೇ 30 ಟಿಎಂಸಿ ಹೂಳು ತುಂಬಿದ್ದು ಕೇವಲ 100 ಟಿಎಂಸಿ ನೀರನ್ನು ಮಾತ್ರ ಸಂಗ್ರಹಿಸಲಾಗುತ್ತದೆ. ಆದರೆ ಸಿಎಂ ಸಿದ್ದರಾಮಯ್ಯ ತುಂಗಭದ್ರಾ ಜಲಾಶಯದಲ್ಲಿನ ಹೂಳು ತೆಗೆಯಲು ಸಾಧ್ಯವಿಲ್ಲ ಎಂದು ಹೇಳುತ್ತಿರುವುದು ರೈತರ ಬಗ್ಗೆ ಸಿಎಂಗಿರುವ ಕಾಳಜಿ ತೋರಿಸುತ್ತದೆ ಎಂದು ಕುಟುಕಿದರು.
ದೇವರ ದಯೆ ಹೊರಗಿದ್ದೇನೆ: ಕಂಪ್ಲಿ ಶಾಸಕ ಸುರೇಶ್ ಬಾಬು ಮಾತನಾಡಿ, ಕಳೆದ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಸಂದರ್ಭದಲ್ಲಿ ಅಕ್ರಮ ಗಣಿಗಾರಿಕೆಯಿಂದ ಜೈಲು ಸೇರಿರುವ ಜನಾರ್ದನ ರೆಡ್ಡಿ ಪರ ಕೆಲಸ ಮಾಡಿದ್ದೇನೆ ಎಂದು ನನ್ನನ್ನು ಬಂಧಿಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ ದೇವರ ದಯೆಯಿಂದಾಗಿ ನಾನು ಹೊರ ಬಂದಿದ್ದೇನೆ ಎಂದರು.
ಕೆಎಂಎಫ್ ರಾಜ್ಯಾಧ್ಯಕ್ಷ ಜಿ. ಸೋಮಶೇಖರ ರೆಡ್ಡಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಗೈರು ಹಾಜರಾದದ್ದು ಎದ್ದು ಕಾಣುತ್ತಿತ್ತು. ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 108 ನವ ವಧು- ವರರು ನೂತನ ದಾಂಪತ್ಯಕ್ಕೆ ಕಾಲಿಟ್ಟರು. ಕಾರ್ಯಕ್ರಮದಲ್ಲಿ ಸಂಸದರಾದ ಜೆ. ಶಾಂತಾ, ಸಣ್ಣಫಕ್ಕೀರಪ್ಪ, ಕುಡಚಿ ಶಾಸಕ ರಾಜೀವ್, ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ, ವಿಧಾನಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ, ಚಿತ್ರನಟಿ ಪೂಜಾಗಾಂಧಿ ಮಾತನಾಡಿದರು.
ಪಾಲಿಕೆ ಸದಸ್ಯರಾದ ಮಲ್ಲನಗೌಡ, ಗೋವಿಂದರಾಜುಲು, ಬಿಎಸ್‌ಆರ್ ಮುಖಂಡರಾದ ಗುರುಲಿಂಗನಗೌಡ, ರುದ್ರಗೌಡ ಪಕ್ಷದ ಇತರೆ ಕಾರ್ಯಕರ್ತರಿದ್ದರು. ರಾಜ್ಯ ಕಾರ್ಯದರ್ಶಿ ಮಹಿಪಾಲ್ ಸ್ವಾಗತಿಸಿದರು.