ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕಟಿಸಿ
ಬಳ್ಳಾರಿ: ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಬೇಕು ಎಂದು ಅಖಿಲ ಭಾರತ ಜನಗಣ ಒಕ್ಕೂಟ ಒತ್ತಾಯಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅಖಿಲ ಭಾರತ ಜನಗಣ ಒಕ್ಕೂಟದ ಸಂಚಾಲಕ ಎನ್. ಗಂಗಿರೆಡ್ಡಿ, ಚುನಾವಣೆ ನಡೆದು 5 ತಿಂಗಳಾದರೂ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ಹೊರಡಿಸದೇ, ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿದ್ದಾರೆ.
ಚುನಾವಣಾ ಫಲಿತಾಂಶ ಹೊರಬಿದ್ದು, ಈಗಾಗಲೇ ಐದು ತಿಂಗಳು ಕಳೆದಿವೆ. ಆದಾಗ್ಯೂ ಚುನಾಯಿತ ಸದಸ್ಯರಿಗೆ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಅಧ್ಯಕ್ಷ, ಉಪಾಧ್ಯಕ್ಷರಿಗೆ ಮೀಸಲಾತಿ ಜಾರಿ ಮಾಡಿಲ್ಲ. ಇದರಿಂದ ನಗರದಲ್ಲಿನ ಸಮಸ್ಯೆಗಳು ನೆನೆಗುದಿಗೆ ಬಿದ್ದಿವೆ. ಹೀಗಾಗಿ ಕೂಡಲೇ ಆದೇಶ ಹೊರಡಿಸಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ, ಹೈದರಾಬಾದ್ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ, ರಾಯಚೂರು, ಕೊಪ್ಪಳ, ಯಾದಗಿರಿ, ಗುಲ್ಬರ್ಗ, ಬೀದರ್ ಜಿಲ್ಲೆಗಳೊಂದಿಗೆ ನೆರೆಯ ಬಿಜಾಪುರ, ಹುಬ್ಬಳ್ಳಿ, ಬೆಳಗಾವಿ, ಗದಗ, ಬಾಗಲಕೋಟೆ ಜಿಲ್ಲೆಗಳನ್ನು ಹೈ-ಕ ವ್ಯಾಪ್ತಿಗೆ ಸೇರಿಸಿ ಪ್ರತ್ಯೇಕ ರಾಜ್ಯವನ್ನಾಗಿ ಬೇರ್ಪಡಿಸಬೇಕೆಂದು ಎನ್. ಗಂಗಿರೆಡ್ಡಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.