ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

29ರಿಂದ ದೆಹಲಿಯಲ್ಲಿ ರಾಷ್ಟ್ರೀಯ ಸಮಾವೇಶ

Lingaraj Badiger
Updated On : 6 Dec 2013, 12:28 pm

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಡಿ. 5
ನಿರ್ಭಯಾ ಅತ್ಯಾಚಾರ ಪ್ರಕರಣ ಹಿನ್ನೆಲೆಯಾಗಿಟ್ಟುಕೊಂಡು ದೆಹಲಿಯಲ್ಲಿ ಡಿ. 29 ಮತ್ತು 30ರಂದು ರಾಷ್ಟ್ರೀಯ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿ. 16ರಂದು ದೇಶದ ಎಲ್ಲ ರಾಜ್ಯಗಳಲ್ಲಿ ಪೂರ್ವಭಾವಿ ಸಭೆ ನಡೆಯಲಾಗುವುದು. ಡಿ. 17ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಸಮಾವೇಶ ಏರ್ಪಡಿಸಲಾಗಿದೆ ಎಂದು ಎಐಎಂಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಎಚ್.ಜಿ. ಜಯಲಕ್ಷ್ಮೀ ತಿಳಿಸಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿಯ ನರ್ಸಿಂಗ್ ವಿದ್ಯಾರ್ಥಿನಿ ನಿರ್ಭಯಾ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದು 2012, ಡಿ. 16ರಂದು, ಈ ದಿನದ ಅಂಗವಾಗಿ ಡಿಸೆಂಬರ್‌ನಲ್ಲಿ ರಾಷ್ಟ್ರೀಯ ಸಮ್ಮೇಳನ ಏರ್ಪಡಿಸಲಾಗಿದೆ. ದೆಹಲಿಯಲ್ಲಿ ಡಿ. 29ರಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ.ಎನ್. ಕೃಷ್ಣ ಸಮಾವೇಶ ಉದ್ಘಾಟಿಸುವರು. ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ, ಮುಂಬೈ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಹೊಸಬೆಟ್, ಸಾಮಾಜಿಕ ಕಾರ್ಯಕರ್ತೆ ದೀಪ್ತಿ ನಾವಾಲ್, ವಕೀಲರು, ಸಾಹಿತಿ, ಕಲಾವಿದ, ಶಿಕ್ಷಣ ತಜ್ಞರು ಭಾಗವಹಿಸಲಿದ್ದು, ಡಿ. 30ರಂದು ನಡೆಯಲಿರುವ ಬೃಹತ್ ರ್ಯಾಲಿಯಲ್ಲಿ ಸಾವಿರಾರು ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಭಾಗಿಯಾಗಲಿದ್ದಾರೆ ಎಂದು ವಿವರಿಸಿದರು.
ಕೇಂದ್ರದ ನಿರ್ಲಕ್ಷ್ಯ: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪತ್ರಕರ್ತ ತರುಣ್ ತೇಜ್‌ಪಾಲ್ ಪ್ರಕರಣ, ಆಸರಾಂ ಬಾಪು ಪ್ರಕರಣ ಹೀಗೆ ದೇಶದಲ್ಲಿ ಮಹಿಳೆಯರ ಮೇಲಿನ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಅತ್ಯಾಚಾರ ಪ್ರಕರಣಗಳು ಮಾಧ್ಯಮಗಳಲ್ಲಿ ಪ್ರತಿನಿತ್ಯ ಪ್ರಕಟವಾಗುತ್ತಲೆ ಇವೆ. ಈ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸುವುದನ್ನು ಬಿಟ್ಟು, ನಿರ್ಲಕ್ಷ್ಯ ಧೋರಣೆ ತಾಳುತ್ತಿದೆ ಎಂದು ಸರ್ಕಾರದ ಧೋರಣೆಯನ್ನು ಖಂಡಿಸಿದರು.
ಆತ್ಮರಕ್ಷಣೆ ಕಲೆ ಕಲಿಸಿ: ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ಅಶ್ಲೀಲವಾಗಿರುವ ವೆಬ್‌ಸೈಟ್, ಚಲನಚಿತ್ರ, ಜಾಹೀರಾತು, ಧಾರಾವಾಹಿ ಮೇಲೆ ನಿರ್ಬಂಧ ಹಾಕಬೇಕು. ಶಾಲಾ- ಕಾಲೇಜುಗಳಲ್ಲಿ ಇಂದಿಗೂ ಯುವತಿಯರನ್ನು ಚುಡಾಯಿಸಲಾಗುತ್ತಿದೆ, ಆತ್ಮರಕ್ಷಣೆಗಾಗಿ ವಿದ್ಯಾರ್ಥಿನಿಯರಿಗೆ ಕರಾಟೆ ಕಲಿಕೆ ಸೇರಿದಂತೆ ಇತರ ಆತ್ಮರಕ್ಷಣೆ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಆತ್ಮರಕ್ಷಣೆ ಕಲೆಗಳನ್ನು ಕಲಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಸಂಘಟನೆಯಿಂದ ಒತ್ತಡ ಹಾಕಲಾಗುತ್ತದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಎಐಎಂಎಸ್‌ಎಸ್ ಜಿಲ್ಲಾಧ್ಯಕ್ಷೆ ಎಂ.ಎನ್. ಮಂಜುಳಾ, ಉಪಾಧ್ಯಕ್ಷೆ ಶಾಂತಾ, ಎಐಡಿಎಸ್‌ಒ ರಾಜ್ಯ ಕಾರ್ಯದರ್ಶಿ ಡಾ. ಪ್ರಮೋದ್, ಜಿಲ್ಲಾ ಕಾರ್ಯದರ್ಶಿ ಗೋವಿಂದ್, ಈಶ್ವರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement