ಸೂರ್ಯನಾರಾಯಣ ರೆಡ್ಡಿ ರಾಜಿನಾಮೆ
ಬಳ್ಳಾರಿ: ಜೆಡಿಎಸ್ ಜಿಲ್ಲಾಧ್ಯಕ್ಷ ಎನ್. ಸೂರ್ಯನಾರಾಯಣ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರಿಗೆ ಶುಕ್ರವಾರ ಸಲ್ಲಿಸಿದ್ದಾರೆ. ರೆಡ್ಡಿ ಅವರು ಕೆಲ ದಿನಗಳಿಂದ ಪಕ್ಷದಲ್ಲಿ ತಟಸ್ಥರಾಗಿದ್ದು, ಪಕ್ಷದಿಂದ ದೂರ ಸರಿಯುವ ಸಾಧ್ಯತೆ ಇದೆ ಎಂದು ಡಿ. 18ರಂದು ಕನ್ನಡಪ್ರಭ ವಿಶೇಷ ವರದಿ ಪ್ರಕಟಿಸಿತ್ತು. ಇದೀಗ ನಾರಾ ಸೂರ್ಯನಾರಾಯಣ ರೆಡ್ಡಿ ಪಕ್ಷದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ತೀರಾ ಕುತೂಹಲ ಕೆರಳಿಸಿದೆ. ಆದರೆ ಪಕ್ಷದ ಸಕ್ರಿಯ ಸದಸ್ಯರಾಗಿ ಇರುವುದಾಗಿ ಹೇಳಿದ್ದಾರೆ. ಅವರ ಮುಂದಿನ ನಡೆ ಎನೇಂಬುದು ಕುತೂಹಲ ಮೂಡಿಸಿದೆ. ಇನ್ನು ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಯಾವ ಪಕ್ಷದಿಂದ ಸ್ಪರ್ಧಿಸುತ್ತಾರೆ ಎಂಬುದು ತಿಳಿದಿಲ್ಲ.
ರಾಜಿನಾಮೆ ಪತ್ರದಲ್ಲಿ ಏನಿದೆ?: ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನೀಡಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಿದ್ದಕ್ಕೆ ಚಿರಋಣಿಯಾಗಿರುತ್ತೇನೆ. ಕೌಟುಂಬಿಕ ಕಾರಣ ಹಾಗೂ ವೈಯಕ್ತಿಕ ಸಮಸ್ಯೆಗಳಿಂದ ಸಕ್ರಿಯ ಹಾಗೂ ರಚನಾತ್ಮಕವಾಗಿ ಪಕ್ಷದ ಚಟುವಟಿಕೆಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಳ್ಳಾರಿ ಜಿಲ್ಲೆಯ ಜನತಾದಳ (ಜಾ) ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ರಾಜಿನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಶುಕ್ರವಾರ ದೇವೇಗೌಡ, ರಾಜ್ಯಾಧ್ಯಕ್ಷ ಕೃಷ್ಣಪ್ಪ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ಮಾಡಿ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.