ಆಯುಷ್ ವೈದ್ಯರ ಮೊರೆಹೋದ ಆರೋಗ್ಯ ಇಲಾಖೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಫೆ. 10
ತಮ್ಮ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಜಿಲ್ಲೆಯಲ್ಲಿ ಕೆಲವು ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ. ಇನ್ನೂ ಕೆಲವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸೋಮವಾರದಿಂದ ಮುಷ್ಕರ ತೀವ್ರವಾಗುವ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪರ್ಯಾಯವಾಗಿ ಆಯುಷ್ ಇಲಾಖೆಯ ವೈದ್ಯರ ಮೊರೆ ಹೋಗಿದೆ.
ಬಳ್ಳಾರಿ ಜಿಲ್ಲೆಯಲ್ಲಿ 55 ಪ್ರಾಥಮಿಕ ಆರೋಗ್ಯ ಕೇಂದ್ರ, 3 ಸಮುದಾಯ ಆರೋಗ್ಯ ಕೇಂದ್ರ ಹಾಗೂ 8 ತಾಲೂಕು ಆರೋಗ್ಯ ಕೇಂದ್ರಗಳಿದ್ದು, 10 ವೈದ್ಯರು ಮಾತ್ರ ಮುಷ್ಕರ ನಡೆಸುತ್ತಿದ್ದಾರೆ. ಅಗತ್ಯವಿದ್ದಲ್ಲಿ ಆಯುಷ್ ವೈದ್ಯರ ನೆರವು ಪಡೆಯಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ ಶ್ರೀಕಾಂತ ಬಾಸೂರ್ ತಿಳಿಸಿದ್ದಾರೆ.
ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ. ಕೆ.ಟಿ. ಪ್ರಕಾಶ್ ರೆಡ್ಡಿ ಅವರನ್ನು ಸಂಪರ್ಕಿಸಿದಾಗ, ಬಳ್ಳಾರಿ ಜಿಲ್ಲೆಯಲ್ಲಿ ಬಹುತೇಕ ಕಡೆಗಳಲ್ಲಿ ವೈದ್ಯರು ತಮ್ಮ ಕೆಲಸ ಸ್ಥಗಿತಗೊಳಿಸಿ ಫೆ. 8ರಿಂದ ಮುಷ್ಕರ ಆರಂಭಿಸಿದ್ದಾರೆ. ಇದರಿಂದಾಗಿ ಇಲಾಖೆ ಆಯುಷ್ ವೈದ್ಯರ ಸಹಕಾರ ಪಡೆದುಕೊಂಡಿದೆ. ಫೆ. 11ರಂದು ಬೆಂಗಳೂರಿನಲ್ಲಿ ಪದಾಧಿಕಾರಿಗಳ ಸಭೆ ಇದ್ದು, ಸಭೆಯ ನಿರ್ಣಯದಂತೆ ನಡೆದುಕೊಳ್ಳುತ್ತೇವೆ. ವೈದ್ಯರು ಸೋಮವಾರ ಬೆಂಗಳೂರಿಗೆ ತೆರಳಲಿದ್ದು, ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಡಿಎಚ್ಓ ಹಾಗೂ ಸಂಘದ ಅಧ್ಯಕ್ಷರು ಭಿನ್ನವಾದ ಹೇಳಿಕೆ ನೀಡುತ್ತಿದ್ದಾರೆ. ಆದರೆ ಸೋಮವಾರದಿಂದ ಹೋರಾಟ ತೀವ್ರಗೊಂಡು, ಬಹುತೇಕ ವೈದ್ಯರು ಮುಷ್ಕರಕ್ಕೆ ಮುಂದಾಗಲಿದ್ದಾರೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.