ಕುಡಿವ ನೀರಿನ ಸಮಸ್ಯೆ ಶೀಘ್ರ ಪರಿಹರಿಸಿ: ಸೂಚನೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಫೆ. 13
ಜಿಲ್ಲೆಯಲ್ಲಿ ಮಳೆಯ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂಜಾಗ್ರತಾ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಮಂಗಳಮ್ಮ ಗುಬಾಜಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಸರಾಸರಿ ಮಳೆ ಕಡಿಮೆಯಾಗಿದೆ. ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮೋಟಾರ್ ದುರಸ್ತಿ ಸೇರಿದಂತೆ ಯಾವುದೇ ನ್ಯೂನತೆಗಳಿದ್ದರೂ ಶೀಘ್ರವಾಗಿ ದುರಸ್ತಿಗೊಳಿಸಿ ವ್ಯವಸ್ಥಿತವಾಗಿ ನೀರನ್ನು ಸರಬರಾಜು ಮಾಡಬೇಕು. ಕೆಲ ಯೋಜನೆಗಳಡಿ ಪ್ರಗತಿ ಕುಂಠಿತವಾಗಿದೆ. ಈಗಾಗಲೇ ನಾವು ಕೊನೆಯ ತ್ರೈಮಾಸಿಕ ಹಂತ ತಲುಪಿದ್ದೇವೆ. ಸಮಯ ಕಡಿಮೆ ಇದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ತಮ್ಮ ಇತರೆ ಕೆಲಸಗಳೊಂದಿಗೆ ವಿವಿಧ ಯೋಜನೆಗಳಡಿ ಇಲಾಖೆಗೆ ನಿಗದಿಪಡಿಸಿದ ಗುರಿಯನ್ನು ನಿಗದಿತ ಅವಧಿಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
ವಸತಿ ಯೋಜನೆಗಳಾದ ಇಂದಿರಾ ಆವಾಸ್ ಹಾಗೂ ಆಶ್ರಯ ಯೋಜನೆಯಡಿ ಬಾಕಿಯಿರುವ ಮನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಅಧಿಕಾರಿಗಳು ಯಾವುದೇ ವಿಳಂಬ ತೋರದೆ ತ್ವರಿತಗತಿಯಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಕೈಗೊಳ್ಳಬೇಕು. ನಿರ್ಮಲ ಭಾರತ ಅಭಿಯಾನ ಯೋಜನೆಯಡಿ ಸ್ವಚ್ಛತಾ ಕಾಮಗಾರಿಗಳನ್ನು ಕ್ರಮಬದ್ಧವಾಗಿ ಕೈಗೊಳ್ಳಬೇಕು. ವೈಯಕ್ತಿಕ ಹಾಗೂ ಸಾಮೂಹಿಕ ಶೌಚಾಲಯಗಳ ನಿರ್ಮಾಣಕ್ಕೆ ಜನರು ಸಹಕರಿಸಬೇಕು ಎಂದರು.
ಯೋಜನೆ ಅನುಷ್ಠಾನಗೊಳಿಸಿ: ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ್ ಮಾತನಾಡಿ, ಗಂಗಾಕಲ್ಯಾಣ ಯೋಜನೆಯಡಿ ಅರ್ಹ ಫಲಾನುಭವಿಗಳು ಯೋಜನೆಯ ಲಾಭ ಪಡೆಯುವಂತಾಗಬೇಕು. ಈಗಾಗಲೇ ಕೊರೆಸಿರುವ ಕೊಳವೆ ಬಾವಿಗಳಿಗೆ ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಬೇಕು. ಪರಿಶಿಷ್ಟರ ಕಲ್ಯಾಣ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ವಿಶೇಷ ಘಟಕ ಯೋಜನೆಯಡಿ ಯೋಜನೆಗಳನ್ನು ಎಲ್ಲ ಇಲಾಖೆಗಳು ಯಶಸ್ವಿಯಾಗಿ ಪೂರೈಸಬೇಕು. ಸಂಬಂಧಿಸಿದ ಇಲಾಖೆಗಳಿಗೆ ಶೀಘ್ರವಾಗಿ ವರದಿ ನೀಡಬೇಕು. ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಬೇಕು. ಎಸ್ಎಸ್ಎಲ್ಸಿ ಫಲಿತಾಂಶ ಉತ್ತಮಪಡಿಸುವ ನಿಟ್ಟಿನಲ್ಲಿ ವಸತಿ ನಿಲಯಗಳ ಹಾಗೂ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಪ್ರತಿದಿನ ಸಂಜೆ 6.30ರಿಂದ 8.30ರವರೆಗೆ ವಿಶೇಷ ಬೋಧನಾ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ನೀರಿನ ಜಾಗೃತಿ ಅಗತ್ಯ: ಜಿಪಂ ಸಿಇಓ ಮಂಜುನಾಥ್ ನಾಯಕ್ ಮಾತನಾಡಿ, ಕುಡಿಯುವ ನೀರಿನ ಮಿತವ್ಯಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಪಂಪ್ ಆಪರೇಟರ್ಸ್, ಗ್ರಾಪಂ ಪಿಡಿಓಗಳ ಹಾಗೂ ಗ್ರಾಪಂ ಸಿಬ್ಬಂದಿ ಜೊತೆಗೆ ಸಭೆ ನಡೆಸಿ, ನೀರು ಸಂಗ್ರಹ ಹಾಗೂ ಸರಬರಾಜುಗಳ ಬಗ್ಗೆ ಸೂಕ್ತ ಮಾಹಿತಿ ನೀಡಿ, ಗ್ರಾಮಗಳಲ್ಲಿ ನೀರಿನ ಪೂರೈಕೆ ಬಗ್ಗೆ ದೂರುಗಳು ಬಾರದಂತೆ ಎಚ್ಚರ ವಹಿಸಲು ಎಲ್ಲ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸುನಂದಬಾಯಿ, ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಸಾವಿತ್ರಿಮ್ಮ, ಉಪಕಾರ್ಯದರ್ಶಿ (ಆಡಳಿತ) ರವಿ ಬಸರಳ್ಳಿ, ಉಪಕಾರ್ಯದರ್ಶಿ (ಅಭಿವೃದ್ಧಿ) ಮಹೇಶ್ವರಯ್ಯ, ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ವಿವಿಧ ಅಧಿಕಾರಿಗಳು ಹಾಜರಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.