ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಒಳ ಮೀಸಲಾತಿ ಬಿಲ್ ಪಾಸ್‌ಗೆ ಆಗ್ರಹಿಸಿ ಧರಣಿ

Lingaraj Badiger
Updated On : 8 Jul 2013, 11:30 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜು. 7
ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಅಧಿವೇಶನದಲ್ಲಿ ಮಂಡನೆ ಮಾಡಿ ತೀರ್ಮಾನ ತೆಗೆದುಕೊಳ್ಳಬೇಕು. ಆ ಮೂಲಕ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಬಿಲ್‌ನ್ನು ಪಾಸ್ ಮಾಡಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ಆಗ್ರಹಿಸಿ ಜು. 10ರಂದು ರಾಜ್ಯಾದ್ಯಂತ ಸಾಂಕೇತಿಕ ಧರಣಿ ನಡೆಸಲಾಗುವುದು ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎಚ್. ಹನುಮಂತಪ್ಪ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನಾರ್ಥ ಸಾಂಕೇತಿಕ ಧರಣಿ ನಡೆಸಲಿದೆ. ಜು. 12ರಿಂದ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಇದೇ ಅಧಿವೇಶನದಲ್ಲಿ ಒಳ ಮೀಸಲಾತಿ ಮಸೂದೆ ಮಂಡಿಸಿ, ಅನುಮತಿ ಪಡೆಯುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧ ಇದು ಪ್ರಥಮ ಪ್ರತಿಭಟನೆ ಎಂದರು.
ಮಂಡಿಸುವ ವಿಶ್ವಾಸವಿದೆ: ರಾಜ್ಯದಲ್ಲಿ ಒಂದು ಕೋಟಿ ಜನಸಂಖ್ಯೆ ಹೊಂದಿರುವ ಅಸ್ಪೃಶ್ಯ, ಮಾದಿಗ ಸಮುದಾಯದ ಹಿತಕ್ಕೆ ಬದ್ಧವಾಗಿ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದೇ ಅಧಿವೇಶನದಲ್ಲಿ ಮಸೂದೆ ಮಂಡಿಸಿ, ಒಪ್ಪಿಗೆ ಪಡೆಯಬೇಕು. ಇಲ್ಲದೇ ಹೋದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಈ ಸಮಾಜದ ಜನರು ಕಾಂಗ್ರೆಸ್ ವಿರುದ್ಧ ಮತ ಚಲಾಯಿಸುವ ನಿರ್ಧಾರ ಕೈಗೊಳ್ಳುತ್ತಾರೆ. ಈ ಹಿಂದೆ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ, ಸದಾಶಿವ ಆಯೋಗ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸುವಂತೆ, ಜಾರಿಗೆ ತರುವ ಮೂಲಕ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಒತ್ತಾಯಿಸಿದ್ದಾರೆ. ಇದೀಗ ಅವರೇ ಸಿಎಂ ಆಗಿದ್ದು, ಈ ಸಮಾಜದ ಬಗ್ಗೆ ಕಾಳಜಿ ಹೊಂದಿರುವುದರಿಂದ ಆಯೋಗದ ವರದಿಯನ್ನು ಮಂಡಿಸುತ್ತಾರೆಂಬ ವಿಶ್ವಾಸ ಇದೆ ಎಂದು ತಿಳಿಸಿದರು.
ಎಲ್ಲ ಪಕ್ಷಗಳಿಂದ ಬರೀ ಭರವಸೆ: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿ ವರ್ಗೀಕರಣಕ್ಕಾಗಿ ಮಾದಿಗರಿಗೆ ಒಳ ಮೀಸಲಾತಿ ಕಲ್ಪಿಸಲು ಹೋರಾಟ ಮಾಡಿದ ರಾಜ್ಯದ ಮಾದಿಗರ ಒತ್ತಾಯಕ್ಕೆ ಕಳೆದ 15 ವರ್ಷಗಳಿಂದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಚುನಾವಣೆ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ನೀಡುತ್ತೇವೆ ಎಂದು ಭರವಸೆ ನೀಡಿದ್ದರೂ, ಈವರೆಗೆ ಇನ್ನು ಈಡೇರಿಲ್ಲ. 2008ರ ಸಾರ್ವತ್ರಿಕ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಗಳಿಗೆ ಹಾಗೂ ಮಾದಿಗ ಸಮಾಜಕ್ಕೆ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ಹೋರಾಟ ಸಮಿತಿ ಮುಖಂಡ ರಾಮಣ್ಣ ತೊಂಡಲಂ, ದಲಿತ ಸಂಘರ್ಷ ಸಮಿತಿ ಮುಖಂಡ ಎ. ಈಶ್ವರಪ್ಪ, ಸಮಿತಿ ಜಿಲ್ಲಾಧ್ಯಕ್ಷ ಸಿ. ಸೋಮಶೇಖರ್, ಬಿ. ಗುರುಸಿದ್ದಪ್ಪ ಹಾಗೂ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement