ಅಕ್ರಮ ಗಣಿಗೆ ಕಡಿವಾಣ
ಬಳ್ಳಾರಿ: ಜಿಲ್ಲೆಯಲ್ಲಿ ನಡೆಯುವ ಗಣಿಗಾರಿಕೆ, ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲಾಗುತ್ತದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಆದ್ಯತೆ ನೀಡಲಾಗುತ್ತದೆ ಎಂದು ಬಳ್ಳಾರಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋಡ್ ತಿಳಿಸಿದರು.
ಸೋಮವಾರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಅವರು, ಜೂಜಾಟ, ಡ್ರಗ್ಸ್ ಮಾರಾಟ, ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಹೊಣೆಯಾಗಿದೆ. ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಇಲಾಖೆ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಲಾಗುತ್ತದೆ. ಜಿಲ್ಲಾದ್ಯಂತ ಪ್ರವಾಸ ಕೈಗೊಂಡು ವಿವಿಧ ಸಮಸ್ಯೆಗಳಿಗೆ ಪರಿಹಾರಕ್ಕೆ ಮುಂದಾಗುವುದಾಗಿ ತಿಳಿಸಿದರು.
ಶಿವಮೊಗ್ಗದಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ, ಚಿತ್ರದುರ್ಗದಲ್ಲಿ ಹೆಚ್ಚುವರಿ ಪೊಲೀಸ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಹಾವೇರಿಯಲ್ಲಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿ, ಇದೀಗ ಬಳ್ಳಾರಿ ಎಸ್ಪಿಯಾಗಿ ಆಗಮಿಸಿದ್ದಾರೆ. ಸೋಮವಾರ ಮಧ್ಯಾಹ್ನ ಎಸ್ಪಿ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ಸಿ.ಕೆ. ಬಾಬ, ಡಿವೈಎಸ್ಪಿ ಮುರುಣ್ಣನವರ್, ಎನ್. ರುದ್ರಮುನಿ, ಯೋಗೇಶ್ ಇದ್ದರು.