ಅರ್ಹ ಫಲಾನುಭವಿಗೆ ಯೋಜನೆ ತಲುಪಿಸಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜು. 11
ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ ಉತ್ತಮ ಆಡಳಿತ ನಡೆಸುವಂತೆ ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನ್ಯಾ. ಸುಭಾಷ್ ಆದಿ ಸೂಚಿಸಿದರು.
ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಜರುಗಿದ ಸಾರ್ವಜನಿಕ ಕುಂದು ಕೊರತೆಗಳ ಸಭೆಗೂ ಮುನ್ನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರಾಷ್ಟ್ರದಲ್ಲಿ ಬಡತನ ಮತ್ತು ಅಸಮಾನತೆಯೇ ಪ್ರಮುಖ ಸಮಸ್ಯೆಯಾಗಿದ್ದು, ಇವುಗಳ ನಿವಾರಣೆಗಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಅದರಲ್ಲೂ ಆರೋಗ್ಯ, ನಗರಾಭಿವೃದ್ಧಿ, ಗ್ರಾಮೀಣ ಮತ್ತು ಪಂಚಾಯತ್ ರಾಜ್, ವಸತಿ, ನಿರುದ್ಯೋಗ, ಶಿಕ್ಷಣ, ಬಾಲ ಕಾರ್ಮಿಕರಿಗೆ ಪುನರ್ವಸತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳು ಕೆಲವೆಡೆ ಸಮರ್ಪಕವಾಗಿ ಜಾರಿಯಾಗದ ಬಗ್ಗೆ ದೂರುಗಳು ಬಂದಿದ್ದು, ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದು ಕೆಳ ಹಂತದ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಸಾರ್ವಜನಿಕರ ಸೇವೆಗಾಗಿ ನೇಮಕಗೊಂಡಿದ್ದನ್ನು ಅರಿತು ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ವಿಳಂಬವಾದರೂ: ಕೇವಲ ದೂರು ಬಂದರಷ್ಟೇ ಅಲ್ಲದೇ ವಿಳಂಬವಾದರೂ ತಪ್ಪೆಸಗಿದಂತಾಗುತ್ತದೆ. ನಿಗದಿತ ಅವಧಿಯೊಳಗೆ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಜನ ಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರು ಲೋಕಾಯುಕ್ತ ವ್ಯಾಪ್ತಿಗೆ ಒಳಪಡುತ್ತಾರೆ. ಜನಪ್ರತಿನಿಧಿಗಳೂ ಪ್ರಜಾ ಸೇವಕರೆ ಆಗಿದ್ದು, ಈ ಹಿನ್ನೆಲೆಯಲ್ಲಿ ಸಂಬಂಧಿತ ನಿಯಮಾವಳಿಗಳನ್ನು ಅನುಸರಿಸಬೇಕು. ಜನಪ್ರತಿನಿಧಿಗಳಿಗೆ ನಿಯಮಾವಳಿಗಳ ಕುರಿತು ಅಧಿಕಾರಿಗಳು ತಿಳಿಸಬೇಕು. ವೈದ್ಯರು ಕೇಂದ್ರ ಸ್ಥಾನದಲ್ಲಿದ್ದು, ಕಾರ್ಯ ನಿರ್ವಹಿಸಬೇಕು. ಶಾಲೆಗಳಿಗೆ ಶಾಲಾ ಕೊಠಡಿ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಉತ್ತಮ ಗುಣಮಟ್ಟದ ಮಧ್ಯಾಹ್ನದ ಬಿಸಿ ಊಟ ನೀಡಬೇಕು ಎಂದರು.
ಶಾಲೆಗೆ ಮಕ್ಕಳ ಹಾಜರಾತಿ ಕಡ್ಡಾಯವಾಗಿರಬೇಕು. ಶಿಕ್ಷಣ ಹಕ್ಕು ಕಾಯ್ದೆಯನ್ನು ವ್ಯವಸ್ಥಿತವಾಗಿ ಜಾರಿಗೊಳಿಸಬೇಕು. ಕಾಯ್ದೆಯಡಿ ಆಯ್ಕೆಯಾದ ಮಕ್ಕಳು ಶಾಲೆಗೆ ಹಾಜರಾಗದಿದ್ದಲ್ಲಿ ಆ ಮಕ್ಕಳ ವಿವರ ಪಡೆದು ಹಾಜರಾಗುವಂತೆ ಕ್ರಮ ಕೈಗೊಳ್ಳಬೇಕು. ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರಗಳನ್ನು ಪೂರೈಕೆ ಮಾಡಬೇಕು. ಆರು ವರ್ಷದೊಳಗಿನ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಪೂರೈಕೆ ಮಾಡಿ ವೈಜ್ಞಾನಿಕವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ರಸ್ತೆಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು. ಯಾವುದೇ ಇಲಾಖೆಗಳು ದೂರು ಬರುವವರೆಗೆ ಕಾಯದೇ ಇಲಾಖಾ ವ್ಯಾಪ್ತಿಯ ಕಾರ್ಯಗಳನ್ನು ಸುಗಮವಾಗಿ ನಡೆಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಲೋಕಾಯುಕ್ತ ಉಪ ನಿಬಂಧಕ ನ್ಯಾ. ಗೋಪಾಲಕೃಷ್ಣ ರೈ, ಡಿಸಿ ಎ.ಎ. ಬಿಸ್ವಾಸ್, ಎಸ್ಪಿ ಡಾ. ಚೇತನ್ ಸಿಂಗ್ ರಾಥೋಡ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.