ಶ್ರೀರಾಮುಲು ಬಂಧನ: ಉದ್ರಿಕ್ತ ಪರಿಸ್ಥಿತಿ
ಕ.ಪ್ರ. ವಾರ್ತೆ ಬಳ್ಳಾರಿ ಮಾ.23
ಬೀದಿ ಬದಿ ವ್ಯಾಪಾರಿಗಳ ತೆರವು ಖಂಡಿಸಿ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಬಿಎಸ್ಆರ್ ಸಂಸ್ಥಾಪಕ ಶ್ರೀರಾಮುಲು, ಇತರರನ್ನು ಪೊಲೀಸರು ಬಂಧಿಸುವ ವೇಳೆ ನಗರದಲ್ಲಿ ಉದ್ರಿಕ್ತ ಪರಿಸ್ಥಿತಿ ಉಂಟಾಗಿತ್ತು. ಶ್ರೀರಾಮುಲು, ಸಂಸದೆ ಜೆ. ಶಾಂತಾ, ಮೃತ್ಯುಂಜಯ ಜಿನಗಾ ಸೇರಿದಂತೆ 62 ಜನರನ್ನು ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆ ಮಾಡಿದರು. ನಗರದ ಬೀದಿಬದಿಯ ವ್ಯಾಪಾರಿಗಳನ್ನು ತೆರವುಗೊಳಿಸುವ ಕ್ರಮ ಖಂಡಿಸಿ ಬಳ್ಳಾರಿ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಶ್ರೀರಾಮುಲು ಇತರರು ಶುಕ್ರವಾರ ಧರಣಿ ಆರಂಭಿಸಿದ್ದರು. ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ, ಧರಣಿ ನಿರತರೊಂದಿಗೆ ಚರ್ಚಿಸಬೇಕು. ಅಲ್ಲಿಯವರೆಗೂ ಧರಣಿ ಹಿಂಪಡೆಯುವುದಿಲ್ಲ ಎಂದು ಶ್ರೀರಾಮುಲು ಪಟ್ಟು ಹಿಡಿದು ಕುಳಿತಿದ್ದರು. ಶುಕ್ರವಾರ ಇಡೀ ರಾತ್ರಿ, ಶನಿವಾರ ಬೆಳಗ್ಗೆ ಧರಣಿ ಮುಂದುವರಿದಿತ್ತು. ಆದರೆ ಅವರ ಬೇಡಿಕೆಗೆ ಜಿಲ್ಲಾಧಿಕಾರಿ ಸೊಪ್ಪು ಹಾಕಿರಲಿಲ್ಲ. ಶನಿವಾರ ಬೆಳಗ್ಗೆ ಪಾಲಿಕೆ ಮುಂಭಾಗದಲ್ಲಿ ವಾಹನ ದಟ್ಟಣೆ, ಇತರ ಸಮಸ್ಯೆ ತಲೆದೋರಿತು. ಹೀಗಾಗಿ ಧರಣಿ ಕೈಬಿಡುವಂತೆ ಪೊಲೀಸರು ಮನವಿ ಮಾಡಿದರು. ಶ್ರೀರಾಮುಲು, ಇತರ ಮುಖಂಡರು ಧರಣಿ ಕೈಬಿಡಲು ಒಪ್ಪದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದರು. ನಗರದ ಗಡಿಗಿ ಚೆನ್ನಪ್ಪ ವೃತ್ತದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಯಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.