ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಬಳ್ಳಾರಿಯಲ್ಲಿ ಸಕಲ ಸಿದ್ಧತೆ

Rashmi Kasaragodu
Updated On : 28 Mar 2013, 10:46 am

ಬಳ್ಳಾರಿ: ಜಿಲ್ಲೆಯಲ್ಲಿ ಏ. 1ರಿಂದ 10ರ ವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಗಮವಾಗಿ ನಡೆಸಲು ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸಿ. ವಿಜಯ್‌ಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 30,093 ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪರೀಕ್ಷೆ ಬರೆಯಲಿದ್ದು, ಅವರಲ್ಲಿ 17,263 ವಿದ್ಯಾರ್ಥಿಗಳು ಹಾಗೂ 12,830 ವಿದ್ಯಾರ್ಥಿನಿಯರಿದ್ದಾರೆ. ಒಟ್ಟು 9 ಕಿವುಡ ಮತ್ತು ಮೂಕ ವಿದ್ಯಾರ್ಥಿಗಳಿದ್ದು, ಅವರಿಗೆ ವಿಶೇಷ ಭಾಷಾ ರಿಯಾಯಿತಿ ನೀಡಲಾಗಿದೆ.  ಪರೀಕ್ಷೆ 101 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 69 ಕ್ಲಸ್ಟರ್ ಕೇಂದ್ರಗಳು, 28 ಕ್ಲಸ್ಟರ್ ರಹಿತ ಕೇಂದ್ರಗಳು ಹಾಗೂ 4 ಖಾಸಗಿ ಅಭ್ಯರ್ಥಿಗಳ ಕೇಂದ್ರಗಳಿವೆ. ಕ್ಲಸ್ಟರ್ ಹಾಗೂ ಸ್ವತಂತ್ರ ಪರೀಕ್ಷಾ ಕೇಂದ್ರದಲ್ಲಿ ಅದೇ ಶಾಲೆಯ ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕರನ್ನಾಗಿ ನೇಮಿಸದೆ. ಒಂದು ಕ್ಲಸ್ಟರ್‌ನಿಂದ ಮತ್ತೊಂದು ಕ್ಲಸ್ಟರ್‌ಗೆ ನೇಮಕ ಮಾಡಲಾಗಿದೆ. ಪರೀಕ್ಷಾ ದಿನಗಳಂದು ಸಂಬಂಧಿಸಿದ ವಿಷಯಗಳನ್ನು ಬೋಧಿಸುವ ಪ್ರೌಢಶಾಲಾ ಹಾಗೂ ಟಿಜಿಟಿ ಶಿಕ್ಷಕರನ್ನು ನೇಮಕ ಮಾಡಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಡಯಟ್, ಬಳ್ಳಾರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಸಂಚಾರಿ ಜಾಗೃತ ದಳ ಹಾಗೂ ಉಪನಿರ್ದೇಶಕರ ಕಚೇರಿ ಹಂತದಲ್ಲಿ ಎರಡು ಸಂಚಾರಿ ಜಾಗೃತ ದಳ ರಚಿಸಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತುಮುತ್ತ 200 ಮೀ. ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಯಾವುದೇ ವಿದ್ಯಾರ್ಥಿ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯಬಾರದು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಯಲ್ಲಿ ಕನಿಷ್ಠ 24 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಯಾವುದೇ ಅಡಚಣೆಯಾಗದಂತೆ ಆಸನ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಅವ್ಯವಹಾರ ಕಂಡುಬಂದಲ್ಲಿ ಕೂಡಲೇ ಕೇಂದ್ರದ ಪರೀಕ್ಷಾ ಮುಖ್ಯ ಅಧೀಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬೇಕು.  ಪರೀಕ್ಷೆಗಳು ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಲಿದೆ. ಮೊದಲ 15 ನಿಮಿಷ ಪ್ರಶ್ನೆ ಪತ್ರಿಕೆ ಓದಲು ಅವಕಾಶ ನೀಡಲಾಗುವುದು. ವಿದ್ಯಾರ್ಥಿಗಳ ಆರೋಗ್ಯ ವ್ಯತ್ಯಾಸವಾದಲ್ಲಿ ಉಪಚರಿಸಲು ಪ್ರತಿ ಕೇಂದ್ರದಲ್ಲಿ ಆರೋಗ್ಯದಲ್ಲಿ ಕಾರ್ಯಕರ್ತರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement