ಕುಷ್ಟಗಿ: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಾರಾಮಾರಿ
ಕುಷ್ಟಗಿ: ದುಡ್ಡು ಪಡೆದು ವೋಟ್ ಹಾಕಿಲ್ಲ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ ಘಟನೆ ಗುರುವಾರ ರಾತ್ರಿ ಕುಷ್ಟಗಿ ತಾಲೂಕಿನ ಕ್ಯಾದಗುಪ್ಪಾ ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು ಕುಷ್ಟಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚುನಾವಣೆಯಲ್ಲಿ ಸೋತಿದ್ದರಿಂದ ಕುಪಿತರಾದ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರಾದ ಸಂಗಪ್ಪ ವಾಲೀಕಾರ, ದೊಡ್ಡನಗೌಡ ಗೌಡರ, ಹನುಮಂತ ಹುಳ್ಳಿ ಹಾಗೂ ನಿಂಗಪ್ಪ ಗೌಡರ ಆರೋಪಿಸಿದ್ದಾರೆ. ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೂ ಗಾಯಗಳಾಗಿವೆ ಎನ್ನಲಾಗಿದೆ. ಕಾಂಗ್ರೆಸ್-ಬಿಜೆಪಿ ಘರ್ಷಣೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.