ಎಂ.ಪಿ. ರವೀಂದ್ರಗೆ ಸಚಿವ ಸ್ಥಾನ ನೀಡಿ
ಹೂವಿನಹಡಗಲಿ: ಹರಪನಹಳ್ಳಿ ನೂತನ ಶಾಸಕ, ಕಾಂಗ್ರೆಂಸ್ ಯುವ ಮುಖಂಡ ಎಂ.ಪಿ. ರವೀಂದ್ರರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ತಾಲೂಕು ಜಂಗಮ ಸಮಾಜದ ಅಧ್ಯಕ್ಷ ಎಚ್.ಎಂ. ಬೆಟ್ಟಯ್ಯ ಒತ್ತಾಯಿಸ್ದಿದಾರೆ. ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶರ ಎಲ್ಲ ಗುಣಗಳನ್ನು ಅಳವಡಿಸಿಕೊಂಡಿರುವ ರವೀಂದ್ರ ಸಚಿವರಾಗಲು ಸೂಕ್ತ ಹಾಗೂ ಸಮರ್ಥ ವ್ಯಕ್ತಿಯಾಗಿದ್ದಾರೆ. ಡಿಸಿಸಿ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಿದ ಪರಿಣಾಮವಾಗಿ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ ಎಂದರು. ಎಂ.ಪಿ. ಪ್ರಕಾಶರು ಹಾಕಿಕೊಟ್ಟ ಮಾರ್ಗದಲ್ಲಿಯೇ ಸಾಗುತ್ತಿರುವ ರವೀಂದ್ರ, ರಂಗ ಕಲೆ, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿಯೂ ಒಡನಾಟ ಬೆಳಸಿಕೊಂಡವರಾಗಿದ್ದಾರೆ. ಹರಪನಹಳ್ಳಿ ಕ್ಷೇತ್ರದಲ್ಲಿ ಗಣಿ ಉದ್ಯಮಿಯನ್ನು ಸೋಲಿಸಿ ವಿಧಾನಸಭೆ ಪ್ರವೇಶಿಸಿದ್ದಾರೆ. ಅಲ್ಲದೇ ಹಡಗಲಿ ಕ್ಷೇತ್ರದಲ್ಲಿ ಅವರ ಪ್ರಭಾವದಿಂದಾಗಿಯೇ ಕಾಂಗ್ರೆಸ್ ಅಭ್ಯರ್ಥಿ ಪಿ.ಟಿ. ಪರಮೇಶ್ವರನಾಯ್ಕ 40 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನಿಸಿ ರವೀಂದ್ರ ಅವರನ್ನು ಸಚಿವರನ್ನಾಗಿ ನೇಮಕ ಮಾಡಬೇಕೆಂದು ತಾಲೂಕು ಜಂಗಮ ಸಮಾಜದಿಂದ ಕಾಂಗ್ರೆಸ್ ವರಿಷ್ಠ ಮಂಡಳಿಯನ್ನು ಒತ್ತಾಯ ಮಾಡುವುದಾಗಿ ತಿಳಿಸಿದರು. ಸಮಾಜದ ಮುಖಂಡರು ಉಪಸ್ಥಿತರಿದ್ದರು.