ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ನೀರಿನ ಸಮಸ್ಯೆ ಪರಿಹರಿಸಲು ಆಗ್ರಹ

Rashmi Kasaragodu
Updated On : 22 May 2013, 11:49 am

ಬಳ್ಳಾರಿ: ನಗರದ ನಾನಾ ಭಾಗಗಳಲ್ಲಿ ಕುಡಿವ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೂಡಲೇ ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳಬೇಕು ಎಂದು ಬಳ್ಳಾರಿ ನಾಗರಿಕ ಹೋರಾಟ ಸಮಿತಿ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಈ ಕುರಿತು ಪಾಲಿಕೆ ಆಯುಕ್ತ ಡಿ.ಎಲ್. ನಾರಾಯಣ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸಮಿತಿ ಮುಖಂಡ ಡಾ. ಪ್ರಮೋದ್, ನಗರದಲ್ಲಿ ಬಿಸಿಲಿನ ಬೇಗೆಗೆ ಬಸವಳಿದಿರುವ ಜನತೆ ನೀರಿನ ಬವಣೆಯಿಂದ ಕಂಗೆಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ನಗರದ ಹಲವು ಬಡಾವಣೆಗಳಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆಯಾಗುತ್ತಿಲ್ಲ. ಕೆಲವೆಡೆ 10 ದಿನಗಳಾದರು ನೀರು ಪೂರೈಕೆಯಾಗುತ್ತಿಲ್ಲ. ನಿತ್ಯವೂ ಕೊಡಗಳನ್ನು ಹಿಡಿದು ನಿಲ್ಲುವ ಸ್ಥಿತಿ ನಿರ್ಮಾಣವಾಗಿದೆ ಎಂದರು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯವಿರುವಲ್ಲಿ ಕೊಳವೆಬಾವಿ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಗಾಂಧಿನಗರದ ಸೊಂತಾ ಲಿಂಗಣ್ಣ ಕಾಂಪೌಂಡ್ ಮುಂಭಾಗದ ಪ್ರದೇಶದಲ್ಲಿ ನೆಲೆಸಿರುವ ನೂರಾರು ಜನರಿಗೆ ಮೊದಲು ಕುಡಿಯುವ ನೀರಿಗಾಗಿ ಹೊಸ ಬೋರ್‌ವೆಲ್ ಕೊರೆಸಬೇಕು ಎಂದು ಒತ್ತಾಯಿಸಿದರು. ಮುಖಂಡರಾದ ಡಿ. ನಾಗಲಕ್ಷ್ಮಿ, ಆರ್. ಸೋಮಶೇಖರ್‌ಗೌಡ, ನಾಗರತ್ನ, ಉಮೇಶ್, ಮಂಜುನಾಥ್, ನಿಜಾಮುದ್ದೀನ್, ಶಿವಶಂಕರ್ ಇದ್ದರು.
ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ
ಬಳ್ಳಾರಿ: ಪದೇ ಪದೆ ಕಾಣಿಸಿಕೊಳ್ಳುತ್ತಿದ್ದ ಹೊಟ್ಟೆನೋವನ್ನು ತಾಳಲಾರದೆ ಮಹಿಳೆಯೋರ್ವಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿರುಗುಪ್ಪ ತಾಲೂಕಿನ ಆಗಲೂರು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಮೃತ ಮಹಿಳೆಯನ್ನು ಗ್ರಾಮದ ಲಕ್ಷ್ಮೀ ಸಿದ್ಲಿಂಗಪ್ಪ (24) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಹೊಟ್ಟೆನೋವು ಕಾಣಿಸಿಕೊಂಡಿದೆ. ನೋವು ತಾಳಲಾರದೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದಾಳೆ. ಕೂಡಲೇ ಆಕೆಯನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾಳೆ. ಈ ತುರಿತು ಸಿರುಗುಪ್ಪ ತಾಲೂಕು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement