ಪುರುಷ-ಮಹಿಳೆ ಸಮಾನ ಅನುಪಾತವಿರಲಿ
ಬಳ್ಳಾರಿ: ಸಮಾಜದಲ್ಲಿ ಪುರುಷ, ಮಹಿಳೆಯರ ಸಮಾನ ಅನುಪಾತ ಕಾಪಾಡುವುದರೊಂದಿಗೆ ಅಸಮತೋಲನ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ವಿಜಯಲಕ್ಷ್ಮೀ ಹೇಳಿದರು.
ಜಿಲ್ಲಾ ತರಬೇತಿ ಕೇಂದ್ರದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಿಂದ ಹೆರಿಗೆಗೆ ಮುನ್ನ ಭ್ರೂಣ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಪತ್ತೆ ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ತಾಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ, ಭ್ರೂಣ ಹತ್ಯೆಗೆ ಕಾರಣವಾದ ಬಾಲ್ಯ ವಿವಾಹ ಪದ್ಧತಿ, ಹೆಣ್ಣಿನ ಸಾಮಾಜಿಕ ಸ್ಥಾನಮಾನ, ವರದಕ್ಷಿಣೆ, ವಿವಾಹ ವಿಚ್ಛೇದನ, ಮೂಢನಂಬಿಕೆ, ವೈಜ್ಞಾನಿಕ ತಂತ್ರಜ್ಞಾನ ಅಳವಡಿಕೆ, ಮಾನಸಿಕ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.
ಉಪನ್ಯಾಸ ನೀಡಿದ ಕಾನೂನು ಕಾಲೇಜಿನ ಪ್ರಾಚಾರ್ಯ ಷಡಕ್ಷರಿ, ಗರ್ಭಪೂರ್ವ ಭ್ರೂಣಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯಲ್ಲಿರುವ ಮಹಿಳಾ ಸಿಬ್ಬಂದಿ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ತಾಲೂಕು ನೋಡೆಲ್ ಅಧಿಕಾರಿ ಸೌಭಾಗ್ಯವತಿ ಅಧ್ಯಕ್ಷತೆ ವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಆರ್ಕಾಣಿ ಪ್ರಾರ್ಥಿಸಿದರು. ಬಿಎಚ್ಒ ಟಿ. ಕೃಷ್ಣ ನಾಯಕ್ ಸ್ವಾಗತಿಸಿದರು. ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯ ಡಾ. ಜಂಭುಗಲ್, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.