ಯೋಜನೆ ಸಮರ್ಪಕ ಜಾರಿಗೊಳಿಸಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ನ. 14
ಕೇಂದ್ರ ಸರ್ಕಾರದ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಿ, ಜಿಲ್ಲೆಯ ಅಭಿವೃದ್ಧಿಗಾಗಿ ಶ್ರಮಿಸುವಂತೆ ಸಂಸದೆ ಜೆ. ಶಾಂತಾ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಜಾಗ್ರತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸುವಂತೆ ಅನುದಾನ ನೀಡಿದೆ. ಈ ಎಲ್ಲಾ ಯೋಜನೆಗಳು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಕೊಠಡಿ ನಿರ್ಮಾಣಕ್ಕಾಗಿ ಮಂಜೂರಾದ ರು. 3 ಲಕ್ಷ ಅನುದಾನವನ್ನು ವೇತನಕ್ಕಾಗಿ ಮರು ಹೊಂದಾಣಿಕೆ ಮಾಡಿದ ಹಗರಿಬೊಮ್ಮನಹಳ್ಳಿ ಬಿಇಒ ಕೆ. ರಾಮನಗೌಡ ಅವರ ಮೇಲೆ ಶೀಘ್ರವಾಗಿ ಶಿಸ್ತುಕ್ರಮ ಜರುಗಿಸಬೇಕು ಎಂದು ತಿಳಿಸಿದರು.
ನೆನೆಗುದಿಗೆ ಬಿದ್ದಿರುವ ಮಿಂಚೇರಿ ಮತ್ತು ಕುಡಿತಿನಿ ಗ್ರಾಮದ ಕೆರೆಗಳ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ, ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. 13ನೇ ಹಣಕಾಸು ಯೋಜನೆಯಡಿ ಅನುಮೋದನೆಗೊಂಡ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅಪೌಷ್ಟಿಕ ಮಕ್ಕಳಿಗೆ ಕೋಳಿ ಮೊಟ್ಟೆ ಮತ್ತು ಪೌಷ್ಟಿಕ ಆಹಾರವನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ತಾಕೀತು ಮಾಡಿದರು.
ರು. 68.26 ಕೋಟಿ ಅನುದಾನವಿದೆ: ಜಿಪಂ ಸಿಇಒ ಮಂಜುನಾಥ ನಾಯಕ್ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆಯಡಿ ರು. 68.26 ಕೋಟಿ ಅನುದಾನ ಲಭ್ಯವಿದ್ದು, ರು. 25 ಕೋಟಿ ಆರ್ಥಿಕ ಪ್ರಗತಿ ಸಾಧಿಸಲಾಗಿದೆ. 2011-12 ನೇ ಸಾಲಿನ ಇಂದಿರಾ ಆವಾಸ ವಸತಿ ಯೋಜನೆಯಡಿ 11,120 ಮನೆಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, 6,967 ಮನೆಗಳನ್ನು ನಿರ್ಮಿಸಲಾಗಿದೆ.
ಉಳಿದವು ಪ್ರಗತಿಯ ಹಂತದಲ್ಲಿವೆ. ಪ್ರಸಕ್ತ ಸಾಲಿನ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಗತಿ ಹಂತದಲ್ಲಿದೆ. ನಿರ್ಮಲ ಭಾರತ ಅಭಿಯಾನ ಯೋಜನೆಯಡಿ 1,20,431 ವೈಯಕ್ತಿಕ ಶೌಚಾಲಯ, 1071 ಶಾಲಾ ಶೌಚಾಲಯ, 251 ಅಂಗನವಾಡಿ ಶೌಚಾಲಯ, 69 ಮಹಿಳಾ ಸಾಮೂಹಿಕ ಶೌಚಾಲಯ ನಿರ್ಮಿಸಲಾಗಿದೆ. ಎಲ್ಲಾ ಅಧಿಕಾರಿಗಳು ಕೇಂದ್ರ ಸರ್ಕಾರದ ಯೋಜನೆಗಳನ್ನು ಜನಪ್ರತಿನಿಧಿಗಳ ಸಹಕಾರ ಪಡೆದು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು ಎಂದರು.
ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ, ಆರೋಗ್ಯ ಇಲಾಖೆಗೆ ಸಂಬಂಧಿಸಿದ ಯೋಜನೆಗಳನ್ನು ವೈದ್ಯಾಧಿಕಾರಿಗಳು ಸಮರ್ಪಕವಾಗಿ ಜಾರಿಗೊಳಿಸಿ, ಕೇಂದ್ರ ಸ್ಥಾನದಲ್ಲಿದ್ದು ಕಾರ್ಯ ನಿರ್ವಹಿಸಬೇಕು ಎಂದರು.
ಉಪಾಧ್ಯಕ್ಷೆ ಮಮತಾ ಸುರೇಶ್, ಸಮಿತಿ ಸದಸ್ಯರಾದ ಕೊಟ್ರೇಶ್, ರಾಮಾಂಜನೇಯ ಯೋಜನೆಗಳ ಸ್ಥಿತಿಗತಿ, ಸ್ಥಳೀಯ ಸಮಸ್ಯೆಗಳ ಕುರಿತು ಸಭೆಯ ಗಮನ ಸೆಳೆದರು. ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ ನಂದೀಶ್, ಮುಖ್ಯ ಯೋಜನಾಧಿಕಾರಿ ಚಂದ್ರಶೇಖರ ಗುಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.