ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಬೆಳಗಾವಿಯಲ್ಲಿ 27ಕ್ಕೆ ಹಕ್ಕೊತ್ತಾಯ ಸಮಾವೇಶ

Mainashree
Updated On : 25 Nov 2013, 10:51 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ನ. 24
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ, ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನ. 27ರಂದು ಬೆಳಗಾವಿಯಲ್ಲಿ ಅತಿಥಿ ಉಪನ್ಯಾಸಕರ ಹಕ್ಕೊತ್ತಾಯಗಳ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಮಾನ್ಪಡೆ ತಿಳಿಸಿದರು.
ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 10,562ಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸೇವಾ ಕಾಯಮಾತಿಗಾಗಿ, ವೇತನ ಹೆಚ್ಚಳಕ್ಕಾಗಿ ಅನೇಕ ಹೋರಾಟಗಳನ್ನು ನಡೆಸುತ್ತಲೇ ಬಂದಿದ್ದಾರೆ. ಆದರೆ ಅದಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದೇ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಲೇ ಬಂದಿದೆ.
ನ. 25ರಿಂದ ಬೆಳಗಾವಿಯಲ್ಲಿ ಪ್ರಾರಂಭವಾಗಲಿರುವ ವಿಧಾನಸಭಾ ಅಧಿವೇಶನದ ಹಿನ್ನೆಲೆಯಲ್ಲಿ ತಮ್ಮ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಅತಿಥಿ ಉಪನ್ಯಾಸಕರ ಹಕ್ಕೊತ್ತಾಯಗಳ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಹಿರಿಯ ಪತ್ರಕರ್ತ ಡಾ. ಪಾಟೀಲ್ ಪುಟ್ಟಪ್ಪ ಸಮಾವೇಶ ಉದ್ಘಾಟಿಸಲಿದ್ದಾರೆ ಎಂದರು.
ಜ. 21ರಿಂದ ತರಗತಿ ಬಹಿಷ್ಕಾರ: ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸದೆ ಹೋದಲ್ಲಿ ಜ. 21ರಿಂದ ಎಲ್ಲ ಅತಿಥಿ ಉಪನ್ಯಾಸಕರೂ ತರಗತಿಗಳನ್ನು ಬಹಿಷ್ಕರಿಸಿ, ಅನಿರ್ದಿಷ್ಟ ಕಾಲದ ಧರಣಿಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಮಾನ್ಪಡೆ ಎಚ್ಚರಿಸಿದರು.
ಗೋಷ್ಠಿಯಲ್ಲಿ ಸಂಘದ ರಾಜ್ಯ ಸಮಿತಿ ಸದಸ್ಯ ಡಾ.ಈ. ಎರ್ರಿಸ್ವಾಮಿ, ಜಿಲ್ಲಾಧ್ಯಕ್ಷ ಟಿ.ದುರುಗಪ್ಪ, ಶಂಕರ ಗುರಿಕಾರ್, ತಾಲೂಕು ಘಟಕದ ಅಧ್ಯಕ್ಷ ಹನುಮೇಶ ಸೇರಿದಂತೆ ಇತರರಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement