ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ
ಬಳ್ಳಾರಿ: ಸರ್ಕಾರವು 2013-14ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಮೆಕ್ಕೆಜೋಳಕ್ಕೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಿದ್ದು, ನ. 15ರಿಂದಲೇ ಮೆಕ್ಕೆಜೋಳದ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಟಾಸ್ಕ್‌ಫೋರ್ಸ್ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಮುಂಗಾರು ಹಂಗಾಮಿನ ಮೆಕ್ಕೆಜೋಳದ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ ರು. 1310ರಂತೆ ನಿಗದಿಪಡಿಸಲಾಗಿದೆ. ರೈತರು ಮುಕ್ತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ಬೆಲೆ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಗಿಂತ ಕಡಿಮೆಯಾದಲ್ಲಿ ಶೇ. 14ರ ತೇವಾಂಶದ ಮೆಕ್ಕೆಜೋಳವನ್ನು ಖರೀದಿಸಲು ಕರ್ನಾಟಕ ಆಹಾರ ನಾಗರಿಕ ಸರಬರಾಜು ಮತ್ತು ನಿಗಮ ನಿಯಮಿತವನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ. ಬಳ್ಳಾರಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹೂವಿನಹಡಗಲಿ ತಾಲೂಕುಗಳ ಎಪಿಎಂಸಿ ಪ್ರಾಂಗಣದಲ್ಲಿರುವ ಆಹಾರ ನಿಗಮದ ಗೋದಾಮುಗಳಲ್ಲಿ ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ನಿಗಮ ನಿಯಮಿತದಿಂದ ಖರೀದಿ ಕೇಂದ್ರ ತೆರೆಯಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕೆಎಫ್‌ಸಿಎಸ್‌ಸಿ ಕಚೇರಿ ಅಥವಾ ದೂರವಾಣಿ: 08392 276283ಗೆ ಸಂಪರ್ಕಿಸಬಹುದಾಗಿದೆ.
ಇಂದು ಸಾಂಸ್ಕೃತಿಕ ಸೌರಭ
ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನ. 25ರಂದು ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ನ. 25ರ ಸಂಜೆ 6.30ಕ್ಕೆ ಹಗರಿಬೊಮ್ಮನಹಳ್ಳಿ ತಾಲೂಕು ವಲ್ಲಭಾಪುರದ ಸರ್ಕಾರಿ ಹಿರಿಯ ಪ್ರೌಢಶಾಲೆ ಆವರಣದಲ್ಲಿ ಏರ್ಪಡಿಸಲಾಗಿದೆ. ಹೊಸಪೇಟೆ ಎಸ್. ಪುಷ್ಪಾವತಿ ಅವರು ಹಿಂದೂಸ್ತಾನಿ ಶಾಸ್ತ್ರೀಯ ಗಾಯನವನ್ನು ಪ್ರಸ್ತುತಪಡಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.