ರೈತನ ಆತ್ಮಹತ್ಯೆ: ಕರವೇ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ನ. 29
ರೈತ ವಿಠಲ್ ಅರಭಾವಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವಾದ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಹಾಗೂ ಕನ್ನಡ ವಿರೋಧಿ ಹೇಳಿಕೆ ನೀಡಿರುವ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ಶಾಸಕತ್ವ ರದ್ದತಿಗೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ)ಯ ಜಿಲ್ಲಾ ಘಟಕದ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಕರವೇ ಜಿಲ್ಲಾಧ್ಯಕ್ಷ ಎಸ್. ಸುರೇಶ್ ಮಾತನಾಡಿ, ಸರ್ಕಾರ ಕಬ್ಬಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಬೇಕು. ರೈತರು ಬೆಳಗಾವಿಯ ಸುವರ್ಣ ಸೌಧದ ಮುಂದೆ ಪ್ರತಿಭಟನೆ ನಡೆಸಿದರೂ, ಅವರ ಬೇಡಿಕೆಗಳಿಗೆ ಸ್ಪಂದಿಸದೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸಿದ್ದರಿಂದ ರೈತ ವಿಠಲ್ ಅರಭಾವಿ ಆತ್ಮಹತ್ಯೆ ಮಾಡಿಕೊಂಡಿದ್ದು ನೋವಿನ ಸಂಗತಿ. ರಾಜ್ಯ ಸರ್ಕಾರ ಅನ್ನದಾತನನ್ನು ನಿರ್ಲಕ್ಷಿಸುತ್ತಿದೆ ಎಂದು ದೂರಿದರು.
ಇತ್ತೀಚಿನ ದಿನಗಳಲ್ಲಿ ಗಡಿನಾಡು ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಮಿತಿ ಮೀರಿದೆ. ರಾಜ್ಯ ಸರ್ಕಾರ ನಾಡದ್ರೋಹಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಗಡಿಭಾಗದಲ್ಲಿ ಕನ್ನಡ ರಕ್ಷಿಸಿ, ಉಳಿಸಿ, ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು. ನಾಡಿನ ನೆಲ, ಜಲದ ಲಾಭ ಪಡೆದು ಈಗ ನಾಡಿನ ವಿರುದ್ಧ ಮಾತನಾಡುತ್ತಿರುವ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ನನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
ಅನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜಿ. ರಾಜಶೇಖರ, ಕೆ.ಎಸ್. ಅಶೋಕ, ಬಿ. ರಮೇಶ, ಶಿವಶಂಕರ, ನರೇಂದ್ರ, ಎಂ. ಶಾಂತಮ್ಮ, ಯಶೋದಾ, ದಾಕ್ಷಾಯಿಣಿ, ಎಂ.ಪಿ. ಕಮಲಾ, ನಾಗೇಂದ್ರ, ಚಿನ್ನಾರೆಡ್ಡಿ, ಸುಧಾ, ಯೇಸು, ಸೀನ, ಶ್ರೀನಿವಾಸ, ರಾಮು, ಪ್ರಸಾದ, ಜಗದೀಶ ಇತರರು ಪಾಲ್ಗೊಂಡಿದ್ದರು.