ಮಕ್ಕಳ ಬದಲು: ತಪ್ಪಿತಸ್ಥರ ವಿರುದ್ಧ ಕ್ರಮ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 7
ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮಕ್ಕಳ ಅದಲು ಬದಲು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ನಗರದ ವಿಮ್ಸ್ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವೈದ್ಯಕೀಯ ದಂತ ಕಾಲೇಜು ಕಾಮಗಾರಿ ಪರಿಶೀಲಿಸಿದ ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ಅದಲು ಬದಲು ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಕುರಿತು ವಿಚಾರಣೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇಂತಹ ಪ್ರಕರಣಗಳು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗಳಲ್ಲೂ ನಡೆದಿವೆ. ಸದ್ಯ ಪ್ರಕರಣ ನ್ಯಾಯಾಲಯದಲ್ಲಿದ್ದು, ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಗೊಂದು ಮೆಡಿಕಲ್ ಕಾಲೇಜು: ರಾಜ್ಯಾದ್ಯಂತ ಜಿಲ್ಲೆಗೊಂದು ಮೆಡಿಕಲ್ ಕಾಲೇಜನ್ನು ಅಸ್ತಿತ್ವಕ್ಕೆ ತರಲಾಗುವುದು. ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮತಿಯೂ ದೊರೆತಿದೆ. ಪ್ರಸಕ್ತ ಸಾಲಿನಲ್ಲಿ ಕೊಪ್ಪಳ, ಗದಗ, ಮಡಿಕೇರಿ, ಕಾರವಾರ ಇತರ ಆರು ಜಿಲ್ಲೆಗಳಲ್ಲಿ ಕಾಲೇಜು ಆರಂಭಿಸಲಾಗುವುದು. ಬಳ್ಳಾರಿಯ ವಿಮ್ಸ್ ಆವರಣದಲ್ಲಿ ರು. 150 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಇನ್ನು ಸಾಕಷ್ಟು ಕಾಮಗಾರಿ ಉಳಿದಿರುವ ಕಾರಣ ಹಣ ಬಿಡುಗಡೆಗಾಗಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದರು.
ಎಂಬಿಬಿಎಸ್, ಪಿಜಿ ಮುಗಿಸಿದ ವಿದ್ಯಾರ್ಥಿಗಳು ಒಂದು ವರ್ಷ ಗ್ರಾಮೀಣ ಪ್ರದೇಶದಲ್ಲಿ ಸೇವೆ ಕಡ್ಡಾಯಗೊಳಿಸುವುದು ಹಾಗೂ ಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್ ಕುರಿತು ರಾಜ್ಯ ಸರ್ಕಾರ ಕೂಡಲೆ ಕ್ರಮ ಕೈಗೊಳ್ಳಲಿದೆ. ದಂಡ ವಿಧಿಸುವ ಕ್ರಮ ಸಮರ್ಪಕವಾಗಿ ಜಾರಿಯಾಗದಿರುವುದೇ ಇದಕ್ಕೆಲ್ಲ ಕಾರಣ. ಅಲ್ಲದೇ ಸರ್ಕಾರಿ ವೈದ್ಯರು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದನ್ನು ತಡೆಗಟ್ಟಲು ಸರ್ಕಾರ ಕ್ರಮ ಜರುಗಿಸಲಿದೆ ಎಂದು ವಿವರಿಸಿದರು.
ಕಠಿಣ ಕ್ರಮ: ಸರ್ಕಾರಿ ವೈದ್ಯರು ಸೇವಾವಧಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ಕುರಿತು ಮಾತನಾಡಿದ ಸಚಿವರು, ಇಂತಹ ಪ್ರಕರಣಗಳು ರಾಜ್ಯಾದ್ಯಂತ ನಡೆಯುತ್ತಿವೆ. ಅಂತಹ ವೈದ್ಯರ ವಿರುದ್ಧ ಅಧಿಕೃತ ದಾಖಲೆ ದೊರೆತಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು.
ಬಳ್ಳಾರಿ, ರಾಯಚೂರು, ಬೀದರ್ ಜಿಲ್ಲೆಗಳಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಮೂಲ ಸೌಲಭ್ಯ ಸೇರಿದಂತೆ ಅವುಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧ. ಮೆಡಿಕಲ್ ಕೌನ್ಸಿಲ್ (ಎಂಸಿಐ) ನಿಬಂಧನೆ, ನಿಯಮಗಳ ಅನುಸಾರ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕ ಸೇರಿದಂತೆ ಸಿಟಿ ಸ್ಕ್ಯಾನ್, ಅಲ್ಟ್ರಾಸೌಂಡ್ ಇನ್ನಿತರೆ ಉಪಕರಣಗಳನ್ನು ಒದಗಿಸಲು ಅಗತ್ಯ ಹಣ ಬಿಡುಗಡೆ ಮಾಡಲಾಗುವುದು ಎಂದ ಅವರು, ಈ ಹಿಂದೆ ಇದ್ದ ಸಿಬ್ಬಂದಿ ಕೊರತೆ, ಸದ್ಯ ಈಗಿಲ್ಲ. ಎಲ್ಲವನ್ನೂ ಸರಿಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಸೂಕ್ತ ಚಿಕಿತ್ಸೆ: ರೋಗಿಗಳಿಗೆ ಆಸ್ಪತ್ರೆಗಳಲ್ಲೇ ಔಷಧ ನೀಡದೆ ಹೊರಗಿನಿಂದ ತರಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರಿ ಆಸ್ಪತ್ರೆ ಎಂದಾಕ್ಷಣ ಸಾಕಷ್ಟು ಜನರು ಚಿಕಿತ್ಸೆಗೆಂದು ಬರುತ್ತಾರೆ. ಅದರಲ್ಲಿ ಬಹಳಷ್ಟು ಜನರು ಬಡಜನರೆ ಬರುತ್ತಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸುವುದು ನಮ್ಮ ಕರ್ತವ್ಯ. ಈ ನಿಟ್ಟಿನಲ್ಲಿ ವಿಮ್ಸ್ ಆಸ್ಪತ್ರೆ ವೈದ್ಯರೊಂದಿಗೆ ಸಭೆ ಕರೆದು ಸೂಚಿಸಲಾಗಿದೆ. ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಸಿ ರಶ್ಮಿ, ಡಿಸಿ ಎ.ಎ. ಬಿಸ್ವಾಸ್, ವಿಮ್ಸ್ ನಿರ್ದೇಶಕ ಡಾ. ಲಕ್ಷ್ಮೀನಾರಾಯಣ ರೆಡ್ಡಿ, ಪ್ರಾಚಾರ್ಯ ಡಾ. ವಿದ್ಯಾಧರ ಕಿನ್ನಾಳ, ವಿಮ್ಸ್ ಅಧೀಕ್ಷಕ ಡಾ. ಶ್ರೀನಿವಾಸ್, ಶಾಸಕ ಅನಿಲ್ ಲಾಡ್, ಪಾಲಿಕೆ ಸದಸ್ಯೆ ಪರ್ವಿನ್ ಬಾನು, ಕಾಂಗ್ರೆಸ್ ಮುಖಂಡ ಆಂಜನೇಯಲು, ಕಮಲಾ ಮರಿಸ್ವಾಮಿ, ಹುಮಾಯೂನ್ ಖಾನ್ ಇದ್ದರು.