22ರಂದು ಸಿಎಂ ನಿವಾಸದೆದುರು ಧರಣಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 16
ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ, ಕಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಮತ್ತು ಡಿವೈಎಫ್ಐ ನೇತೃತ್ವದಲ್ಲಿ ಅ. 22ರಂದು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸದೆದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಮಾನ್ಪಡೆ ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ರಾಜ್ಯ ಸರ್ಕಾರ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 10,600ಕ್ಕಿಂತ ಹೆಚ್ಚಿರುವ ಅತಿಥಿ ಉಪನ್ಯಾಸಕರು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದಿದ್ದು, ಕಷ್ಟಪಟ್ಟು ಉನ್ನತ ಅಧ್ಯಯನ ಮಾಡಿದವರಾಗಿದ್ದಾರೆ. ಬಡ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ದುಡಿಯುತ್ತಿದ್ದಾರೆ. ಅವರನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದು ಆರೋಪಿಸಿದರು.
ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ನೀಡುತ್ತಿದ್ದ ಎಂಟು, ಹತ್ತು ಸಾವಿರ ವೇತನವನ್ನೂ ಸರಿಯಾಗಿ ಬಿಡುಗಡೆ ಮಾಡುತ್ತಿಲ್ಲ ಎಂದ ಅವರು, ಅತಿಥಿ ಉಪನ್ಯಾಸಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸೆಪ್ಟೆಂಬರ್ 22ರಂದು ರಾಜ್ಯ ಸಮಾವೇಶ ನಡೆಸಿ ಒತ್ತಾಯಿಸಲಾಗಿತ್ತು. ಅಲ್ಲದೇ ಸೆ. 25ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಸೌಜನ್ಯಕ್ಕಾದರೂ ಅತಿಥಿ ಉಪನ್ಯಾಸಕರ ಮುಖಂಡರನ್ನು ಮಾತುಕತೆಗೆ ಕರೆದು ಸಮಸ್ಯೆಗಳ ಪರಿಹಾರಕ್ಕೆ ರಾಜ್ಯ ಸರ್ಕಾರ ಮುಂದಾಗಿಲ್ಲ ಎಂದು ದೂರಿದರು.
ಉದ್ಯೋಗ ಭದ್ರತೆ ಇಲ್ಲ: ಬೇಡಿಕೆಗಳನ್ನು ಈಡೇರಿಸುವುದಾಗಿ ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಅವರು ಕೇವಲ ಭರವಸೆ ನೀಡುತ್ತಿದ್ದಾರೆಯೇ ವಿನಃ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಮುಂದಾಗುತ್ತಿಲ್ಲ. ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಇನ್ನಿತರ ಹೆಸರುಗಳಲ್ಲಿ ದುಡಿಯುತ್ತಿರುವ 5 ಲಕ್ಷ ಯುವಜನತೆಗೆ ಉದ್ಯೋಗ ಭದ್ರತೆ ಒದಗಿಸುತ್ತಿಲ್ಲ. ಜತೆಗೆ ಉದ್ಯೋಗ ಸೃಷ್ಟಿಗೆ ಪೂರಕ ಉದ್ದಿಮೆಗಳ ಸ್ಥಾಪನೆಗೆ ಆದ್ಯತೆ ನೀಡುತ್ತಿಲ್ಲ. ಬದಲಾಗಿ ಈ ಹಿಂದಿನ ಬಿಜೆಪಿ ಸರ್ಕಾರದಂತೆ ಜಾಗತಿಕ ಬಂಡವಾಳ ಹೂಡಿಕೆ ಹೆಸರಿನಲ್ಲಿ ಮತ್ತಷ್ಟು ಉದ್ಯೋಗ ನಾಶ ಮಾಡುವ ನೀತಿಗಳನ್ನು ಸಿಎಂ ಸಿದ್ದರಾಮಯ್ಯ ಜಾರಿಗೆ ತರಲು ಹೊರಟಿದ್ದಾರೆ. ಇಂತಹ ನೀತಿಗಳ ಭಾಗವಾಗಿಯೇ ಇಂದು ಅತಿಥಿ ಉಪನ್ಯಾಸಕರು ಬೀದಿಗೆ ಬೀಳುವಂತಾಗಿದೆ ಎಂದರು.
ಹುದ್ದೆ ಭರ್ತಿ ಮಾಡಲಿ: ಅತಿಥಿ ಉಪನ್ಯಾಸಕರಿಗೆ ಯುಜಿಸಿ ನಿಯಮದಂತೆ ತಿಂಗಳಿಗೆ ರು. 25 ಸಾವಿರ ವೇತನ ನೀಡಬೇಕು. ವಯೋವುತಿ ಮೀರಿರುವ ಅಥವಾ ಮೀರುತ್ತಿರುವ ಉಪನ್ಯಾಸಕರಿಗೆ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು. ಖಾಲಿಯಿರುವ 6 ಸಾವಿರ ಉಪನ್ಯಾಸಕ, 3 ಸಾವಿರ ಬೋಧಕೇತರ ಹುದ್ದೆಗಳು ಹಾಗೂ ಕಾಲೇಜು ಶಿಕ್ಷಣ ಇಲಾಖೆ ಹುದ್ದೆಗಳನ್ನು ಭರ್ತಿ ಮಾಡಬೇಕು. ಏಕಾಏಕಿ ಅನುದಾನಿತ ಕಾಲೇಜುಗಳಿಂದ ಕಾಯಂ ಉಪನ್ಯಾಸಕರನ್ನು ಅತಿಥಿ ಉಪನ್ಯಾಸಕರ ಸ್ಥಾನಕ್ಕೆ ವರ್ಗಾಯಿಸಿ, ಅತಿಥಿ ಉಪನ್ಯಾಸಕರನ್ನು ಬೀದಿಗೆ ತಳ್ಳುವ ಕ್ರಮವನ್ನು ತಕ್ಷಣವೇ ನಿಲ್ಲಿಸಬೇಕು. ಈ ಬೇಡಿಕೆಗಳಿಗಾಗಿ ಅ. 22ರಂದು ಸಿಎಂ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು. ರಾಜ್ಯದ ಎಲ್ಲಾ ಅತಿಥಿ ಉಪನ್ಯಾಸಕರು ಪಾಲ್ಗೊಳ್ಳುವಂತೆ ಕೋರಿದರು.
ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ. ಮಹೇಶ, ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಸಮಿತಿ ಸದಸ್ಯ ಈ. ಎರ್ರಿಸ್ವಾಮಿ, ಡಿವೈಎಫ್ಐ ಜಿಲ್ಲಾ ಮುಖಂಡ ಕೆ. ರಮೇಶ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.