ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಪ್ರಾಕೃತಿಕ ಸಂಪತ್ತಿದ್ದರೂ ಬಡತನ

Rashmi Kasaragodu
Updated On : 27 Oct 2013, 1:02 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಅ. 26
ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಪ್ರಾಕೃತಿಕ ಸಂಪತ್ತು ಹೊಂದಿದ್ದರೂ ಬಡತನ, ನಿರುದ್ಯೋಗ ಮತ್ತು ಅನಕ್ಷರತೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕೇಂದ್ರ ಗುತ್ತಿಗೆ ಕಾರ್ಮಿಕರ ಸಲಹಾ ಮಂಡಳಿ ಅಧ್ಯಕ್ಷ, ಮಾಜಿ ಶಾಸಕ ಯು. ಭೂಪತಿ ಆತಂಕ ವ್ಯಕ್ತಪಡಿಸಿದರು.
ರಾಮಾಂಜನೇಯ ತೊಗಲುಗೊಂಬೆ ಮೇಳ ಟ್ರಸ್ಟ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಜ್ಞಾನಪೀಠ ಪುರಸ್ಕೃತ ಗಿರೀಶ್ ಕಾರ್ನಾಡರ ತಲೆದಂಡ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗಣಿ ಉದ್ಯಮದಿಂದ ಕೆಲವೇ ಕೆಲವರು ಶ್ರೀಮಂತರಾಗಿರಬಹುದು ಆದರೆ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಬಡವರ ಸಂಖ್ಯೆ ಹೆಚ್ಚುತ್ತಿರುವುದು ನೋವಿನ ಸಂಗತಿ. ಸೇವಾ ಮನೋಭಾವ, ಮೌಲ್ಯಾಧಾರಿತ ರಾಜಕೀಯ ಕ್ಷೇತ್ರ ವ್ಯಾಪಾರೀಕರಣವಾಗಿರುವುದೇ ಜ್ವಲಂತ ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಹಿರಿಯ ಸಾಹಿತಿ ವೈ. ರಾಘವೇಂದ್ರರಾವ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮೈಸೂರಿನ ರಂಗಕರ್ಮಿ ದಂಪತಿ ಎಚ್.ಬಿ. ಯಶೋದಾ ಮತ್ತು ಬಿ.ಎಂ. ರಾಮಚಂದ್ರರಾವ್ ಅವರನ್ನು ಗೌರವಿಸಿ, ಸನ್ಮಾನಿಸಲಾಯಿತು. ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ಪಿ. ಸುರೇಶ್ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಲೆದಂಡ ನಾಟಕ ಪ್ರದರ್ಶನ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ ರಚಿಸಿರುವ ಹಾಗೂ ಬೆಳಗಲ್ಲು ಪ್ರಕಾಶ್ ನಿರ್ದೇಶನದಲ್ಲಿ ತಲೆದಂಡ ನಾಟಕ ಪ್ರದರ್ಶನಗೊಂಡಿತು.
ಈ ಸಂದರ್ಭದಲ್ಲಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ್, ಟ್ರಸ್ಟ್ ಸಂಚಾಲಕ ಬೆಳಗಲ್ಲು ಮಲ್ಲಿಕಾರ್ಜುನ ಉಪಸ್ಥಿತರಿದ್ದರು.
ಸಾಯಿ ಶ್ರುತಿ ಪ್ರಾರ್ಥಿಸಿದರು. ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಕೆ.ಬಿ. ಸಿದ್ದಲಿಂಗಪ್ಪ ಸ್ವಾಗತಿಸಿದರು. ಎಸ್. ಮಂಜುನಾಥ್ ನಿರೂಪಿಸಿದರು. ನಾಡೋಜ ಬೆಳಗಲ್ಲು ವೀರಣ್ಣ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement