ಮಾನವ ಹಕ್ಕು ಉಲ್ಲಂಘನೆ: ಕ್ರಮ ಕೈಗೊಳ್ಳಿ
ಬಳ್ಳಾರಿ: ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಯಾವುದೇ ದೂರುಗಳು ಬಂದ ಕೂಡಲೇ ವಿಲೇವಾರಿ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯೆ ಮೀರಾ ಸಿ. ಸಕ್ಸೇನಾ ಸೂಚಿಸಿದರು.
ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬುಧವಾರ ಸಾರ್ವಜನಿಕರಿಂದ 20 ಅಹವಾಲುಗಳನ್ನು ಸ್ವೀಕರಿಸಿ, ಶೀಘ್ರವಾಗಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು. ಎಲ್ಲ ಇಲಾಖೆಗಳು ನಿಯಮಾನುಸಾರ ಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ದೂರು ಬಂದ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ರಕ್ಷಣೆ ಕೋರಿ ಪೊಲೀಸರಿಗೆ ಬಂದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಮಹಾನಗರ ಪಾಲಿಕೆ, ಕಂದಾಯ ಇಲಾಖೆ, ತಾಲೂಕು ಪಂಚಾಯತಿ, ಪೊಲೀಸ್ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಆಲಿಸಿದರು.
ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಸ್ವಾಗತಿಸಿ, ವಿವಿಧ ಪ್ರಕರಣಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೇತನ್ ಸಿಂಗ್ ರಾಥೋಡ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ನಾಯಕ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.