ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಕನಿಷ್ಠ ವೇತನಕ್ಕೆ ಕಾರ್ಮಿಕರ ಆಗ್ರಹ

Lingaraj Badiger
Updated On : 21 Sept 2013, 11:59 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಸೆ. 20
ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ನಗರದ ಕನಕ ದುರ್ಗಮ್ಮ ದೇವಸ್ಥಾನದ ಬಳಿ ಸಂಘಟನೆಯ ನೂರಾರು ಕಾರ್ಯಕರ್ತರು, ಅಂಗನವಾಡಿ ನೌಕರರು, ಕಾರ್ಮಿಕರು, ಬಿಸಿಯೂಟ ನೌಕರರು ಸಮಾವೇಶಗೊಂಡು ನಂತರ ಅಂಡರ್ ಬ್ರಿಡ್ಜ್, ರಾಯಲ್ ವೃತ್ತದ ಮೂಲಕ ಡಿಸಿ ಕಚೇರಿ ತಲುಪಿ ಕೆಲಕಾಲ ಧರಣಿ ನಡೆಸಿದರು.
ಕಾಮಿಕ ಪರ ನಿರ್ಧಾರವಿಲ್ಲ: ಸಿಐಟಿಯು ಜಿಲ್ಲಾ ಸಮಿತಿ ಅಧ್ಯಕ್ಷ ಆರ್.ಎಸ್. ಬಸವರಾಜ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಕಾರ್ಮಿಕರ ಪರ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಾನೂನು ರೂಪಿಸಿಲ್ಲ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ಬಿಡಿಗಾಸನ್ನು ನೀಡದೇ ವಂಚಿಸಿದೆ. ಇನ್ನು ಮನೆ ಕೆಲಸಗಾರರು, ಬೀದಿ ಬದಿ ವ್ಯಾಪಾರಿಗಳು, ಆಟೋ ಟ್ಯಾಕ್ಸಿ ಚಾಲಕರು ಸೇರಿದಂತೆ ಇತರೆ ಅಸಂಘಟಿತರಿಗೆ ಲಭ್ಯವಿರುವ ರಾಷ್ಟ್ರೀಯ ಸ್ವಾಸ್ಥ್ಯ ಭಿಮಾ ಯೋಜನೆಗೆ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. ಆದರೆ ಅವರನ್ನು ಫಲಾನುಭವಿಗಳನ್ನಾಗಿಸಲು ಸರ್ಕಾರ ಪ್ರಯತ್ನಿಸುತ್ತಿಲ್ಲ ಎಂದು ಆರೋಪಿಸಿದರು.
ಅಂಗನವಾಡಿ ಕೇಂದ್ರಗಳ ಖಾಸಗೀಕರಣ, ಶಾಲೆಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಹೊರ ಗುತ್ತಿಗೆಕರಣಕ್ಕೆ ಸರ್ಕಾರ ಮುಂದಾಗಿದೆ. ಆದರೆ ಆಶಾ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ನೀಡದಿರುವುದು ಹಾಗೂ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಂಪ್ಯೂಟರ್ ಆಪರೇಟರ್‌ಗಳಿಗೆ ನಿಗದಿತ ಸಮಯಕ್ಕೆ ವೇತನ ನೀಡದೆ ಪ್ರತಿ ಬಾರಿ ಪ್ರತಿಭಟನೆ, ಧರಣಿ, ಹೋರಾಟ ನಡೆಸುವ ಪರಿಸ್ಥಿತಿಗಳನ್ನು ಸೃಷ್ಟಿಸುವಂತೆ ಮಾಡಿದೆ ಎಂದು ದೂರಿದರು.
ರು. 10 ಸಾವಿರ ವೇತನ ನೀಡಿ: ಕಾರ್ಮಿಕರಿಗೆ ಕನಿಷ್ಠ ರು. 10 ಸಾವಿರ ವೇತನ ನಿಗದಿ ಮಾಡಬೇಕು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಎಸ್ಮಾ ಕಾಯ್ದೆಯನ್ನು ಜಾರಿಗೆ ತರಬಾರದು. ಕಾರ್ಮಿಕರ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. 45ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸಿನಂತೆ ಸರ್ಕಾರದ ವಿವಿಧ ಯೋಜನೆಗಳಡಿ ದುಡಿಯುತ್ತಿರುವ ಅಂಗನವಾಡಿ, ಬಿಸಿಯೂಟ, ಆಶಾ, ಕಂಪ್ಯೂಟರ್ ಆಪರೇಟರ್‌ಗಳು, 108 ಆರೋಗ್ಯ ಕವಚ ಸಿಬ್ಬಂದಿ ಸೇರಿದಂತೆ ಇತರರನ್ನು ನೌಕರರೆಂದು ಪರಿಗಣಿಸಬೇಕು ಎಂದು ಆಗ್ರಹಿಸಿದರು.
ರಾಷ್ಟ್ರೀಯ ಸ್ವಾಸ್ಥ್ಯ ಭಿಮಾ ಯೋಜನೆಯಡಿ ಅರ್ಜಿ ಸಲ್ಲಿಸಿರುವ ಮನೆ ಕೆಲಸಗಾರರು, ಬೀದಿ ಬದಿ ವ್ಯಾಪಾರಿಗಳು ಮತ್ತಿತರರಿಗೆ ಕೂಡಲೇ ಯೋಜನೆ ಜಾರಿಗೊಳಿಸಿ, ಅಮ್ ಆದ್ಮಿ ಭೀಮಾ ಯೋಜನೆಯನ್ನು ಕಾರ್ಮಿಕ ಇಲಾಖೆ ಮೂಲಕ ಅನುಷ್ಠಾನಗೊಳಿಸಬೇಕು. ಬೆಲೆ ಏರಿಕೆ ನಿಯಂತ್ರಿಸಿ ಎಲ್ಲ ಕುಟುಂಬಗಳಿಗೂ ಸಾರ್ವತ್ರಿಕ ಪಡಿತರ ವ್ಯವಸ್ಥೆ ಜಾರಿಗೊಳಿಸಬೇಕು. ಬೋನಸ್ ಪಾವತಿ ಕಾಯ್ದೆ- 1965, ನೌಕರರ ಭವಿಷ್ಯ ನಿಧಿ ಕಾಯ್ದೆ- 1952, ಉಪಧನ ಪಾವತಿ ಕಾಯ್ದೆ- 1972ಗಳಿಗೆ ಅಗತ್ಯ ತಿದ್ದುಪಡಿ ಮಾಡಿ ಅರ್ಹತೆ, ಪಾವತಿ ಮತ್ತು ಮೊತ್ತದ ಮೇಲಿನ ನಿರ್ಬಂಧಗಳನ್ನು ತೆಗೆದು ಹಾಕಬೇಕು. ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಿಐಟಿಯುನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ. ಸತ್ಯಬಾಬು ಸೇರಿದಂತೆ ನೂರಾರು ಕಾರ್ಮಿಕರು, ನೌಕರರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement