ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಸೆ. 23
ಹಗರಿಬೊಮ್ಮನಹಳ್ಳಿ ತಾಲೂಕಿನ ನಕ್ರಾಳ ತಾಂಡಾದ ವಿದ್ಯಾರ್ಥಿನಿಯ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಮತ್ತು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಒತ್ತಾಯಿಸಿ ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ತಾಲೂಕು ಘಟಕದ ಪದಾಧಿಕಾರಿಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕಚೇರಿಯ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.
ಇತ್ತೀಚಿನ ದಿನಗಳಲ್ಲಿ ದೆಹಲಿಯ ಸಾಮೂಹಿಕ ಅತ್ಯಾಚಾರ ಘಟನೆಗಳ ನಂತರ ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಸಾಕಷ್ಟು ಸರಣಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪಿಗಳನ್ನು ತಕ್ಷಣವೇ ಶಿಕ್ಷೆಗೆ ಒಳಪಡಿಸಬೇಕು. ಆದರೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.
ಸೆ. 19ರಂದು ಹಗರಿಬೊಮ್ಮನಹಳ್ಳಿ ತಾಲೂಕಿನ ನಕ್ರಾಳ ತಾಂಡಾದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದನ್ನು ಎಸ್‌ಎಫ್‌ಐ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ.
ವಿದ್ಯಾರ್ಥಿಗಳ ಮೇಲೆ ಹಾಗೂ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರಗಳು ನಡೆಯುತ್ತಿರುವುದರಿಂದ ಶಾಲಾ- ಕಾಲೇಜುಗಳಿಗೆ ಬರಲು ಭಯಪಡುತ್ತಿದ್ದಾರೆ. ಹೊಸಪೇಟೆ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು ಆರಂಭವಾಗುವ ಮುನ್ನ ಮತ್ತು ಶಾಲಾ ಕಾಲೇಜುಗಳು ಬಿಡುವ ಮುನ್ನ ಶಾಲಾ-ಕಾಲೇಜುಗಳ ಮುಂದೆ ಪೊಲೀಸರ ಗಸ್ತು ವ್ಯವಸ್ಥೆ ಮಾಡಬೇಕು. ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಟಿ. ಶರತ್ ಕುಮಾರ್, ತಾಲೂಕು ಕಾರ್ಯದರ್ಶಿ ವೈ. ಪಂಪಾನಂದ, ಸಹ ಕಾರ್ಯದರ್ಶಿ ವಸಂತ ಕಲಾಲ್ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ನಗರದ ಥಿಯೋಸಾಫಿಕಲ್ ಮಹಿಳಾ ಕಾಲೇಜಿನಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ನಂತರ ತಹಸೀಲ್ದಾರ್ ಕಚೇರಿಯ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.