ಸಾಂಕ್ರಾಮಿಕ ರೋಗ: ಮುಂಜಾಗ್ರತೆ ವಹಿಸಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಸೆ. 23
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಸ್ಚಚ್ಛತಾ ಕಾರ್ಯ ಕೈಗೊಂಡು, ಮುಂಜಾಗ್ರತೆ ವಹಿಸಬೇಕು ಎಂದು ಜಿಪಂ ಅಧ್ಯಕ್ಷೆ ಬೆಂಡಿಗೇರಿ ಶೋಭಾ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾದ್ಯಂತ ಮಳೆಯಾಗಿದ್ದು, ಸ್ವಚ್ಛತಾ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕು. ಫಾಗಿಂಗ್, ಬ್ಲೀಚಿಂಗ್ ಪೌಡರ್ ಸಿಂಪಡಿಕೆ ಇತರ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ವೈದ್ಯರು ಕೇಂದ್ರಸ್ಥಾನದಲ್ಲಿದ್ದು, ತಪಾಸಣೆ, ಚಿಕಿತ್ಸೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಬೇಕು. ಯಾವುದೇ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮಕೈಗೊಳ್ಳಬೇಕು ಎಂದರು.
ಕಾಮಗಾರಿ ಪೂರ್ಣಗೊಳಿಸಿ: ಜಿಲ್ಲೆಯ ಯಾವೊಬ್ಬ ವಿದ್ಯಾರ್ಥಿಯು ಶಾಲೆಯಿಂದ ವಂಚಿತರಾಗಬಾರದು. ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಒದಗಿಸಬೇಕು. ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕಡ್ಡಾಯವಾಗಿ ತರಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಅಕ್ಟೋಬರ್ ಅಂತ್ಯದೊಳಗೆ ಶಾಲಾ ಕಟ್ಟಡಗಳ ಕಾಂಪೌಂಡ್ಗಳ ಕಾಮಗಾರಿ ಪೂರ್ಣಗೊಳಿಸಬೇಕು. ಅಗತ್ಯವಿರುವ ಕಡೆ ಶಾಲಾ ಕೊಠಡಿಗಳನ್ನು ತುರ್ತಾಗಿ ನಿರ್ಮಿಸಬೇಕು. ಅಂಗನವಾಡಿ ಕೇಂದ್ರಗಳನ್ನು ಗ್ರಾಮಗಳ ಮಧ್ಯ ಭಾಗದಲ್ಲಿ ಪ್ರಾರಂಭಿಸಬೇಕು ಎಂದು ತಾಕೀತು ಮಾಡಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ. ಮಂಜುನಾಥ ನಾಯಕ್ ಮಾತನಾಡಿ, ಫ್ಲೋರೈಡ್ ಮುಕ್ತ ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ವಸತಿ ಯೋಜನೆಗಳಡಿ ಪೂರ್ಣಗೊಳಿಸಿದ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಬೇಕು. ಎಲ್ಲ ಪಿಡಿಒಗಳು ಅಂತರ್ಜಾಲದಲ್ಲಿ ಮಾಹಿತಿ ಅಳವಡಿಸುವಾಗ ಅಂಕಿ-ಅಂಶಗಳನ್ನು ಜಾಗೃತಿವಹಿಸಿ ಆರ್ಥಿಕ ಮತ್ತು ಭೌತಿಕ ಪ್ರಗತಿಯಲ್ಲಿ ಸಮನ್ವಯತೆ ಕಾಪಾಡಿಕೊಳ್ಳಬೇಕು. ವಿವಿಧ ವಸತಿ ಯೋಜನೆಗಳಡಿ ನಿಗಮದಿಂದ ಬ್ಲಾಕ್ ಮಾಡಲಾದ ವಸತಿಗಳನ್ನು ತೆರವುಗೊಳಿಸಲಾಗಿದ್ದು, ಕೂಡಲೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು. ನಿರ್ಮಾಣ ಮಾಡುವ ಇಲಾಖೆಗಳು ಪೂರ್ಣಗೊಳಿಸಿದ ಕಾಮಗಾರಿಗಳನ್ನು ಸಂಬಂಧಿಸಿದ ಇಲಾಖೆಗಳಿಗೆ ಹಸ್ತಾಂತರಿಸಬೇಕು ಎಂದರು.
ವರದಿ ಜಿಪಂಗೆ ಸಲ್ಲಿಸಿ: ಉದ್ಯೋಗ ಖಾತರಿ ಯೋಜನೆಯಡಿ ಅಕ್ಟೋಬರ್ ಅಂತ್ಯದೊಳಗೆ ಶೇ. 80ರಷ್ಟು ಪ್ರಮಾಣದ ಕಾಮಗಾರಿಗಳನ್ನು ಪೂರ್ಣಗೊಳಿಸಿ ಆನ್ಲೈನ್ನಲ್ಲಿ ಅಪ್ಲೋಡ್ ಮಾಡಬೇಕು. ಎಲ್ಲ ಪಿಡಿಒಗಳು ಕೇಂದ್ರಸ್ಥಾನದಲ್ಲಿದ್ದು, ಗ್ರಾಮದ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವಲ್ಲಿ ಹೆಚ್ಚಿನ ಗಮನಹರಿಸಬೇಕು. ತಮ್ಮ ವ್ಯಾಪ್ತಿಯ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ವರದಿಯನ್ನು ಸಂಬಂಧಿಸಿದ ಕಾರ್ಯನಿರ್ವಾಹಕಾಧಿಕಾರಿಗಳಿಗೆ ಸಲ್ಲಿಸಬೇಕು. ಎಲ್ಲ ಕಾರ್ಯನಿರ್ವಾಹಕ ಅಧಿಕಾರಿಗಳು ಕ್ರೋಡೀಕೃತ ವರದಿಯಲ್ಲಿ ಜಿಪಂಗೆ ಸಲ್ಲಿಸಬೇಕು ಎಂದು ತಿಳಿಸಿದರು.
ವಿವಿಧ ಬಗೆಯ ಬಿಸಿಯೂಟ ನೀಡಿ: ಎಸ್ಜಿಎಸ್ವೈ ಅಡಿ ಕಾಮಗಾರಿಗಳ ಬಗ್ಗೆ ಸಂಬಂಧಿಸಿದ ಏಜೆನ್ಸಿಯವರೊಂದಿಗೆ ಕಾರ್ಯನಿರ್ವಾಹಕ ಅಧಿಕಾರಿಗಳ ಜಂಟಿ ಪರಿಶೀಲನೆ ನಡೆಸಿ, ಪೂರ್ಣಗೊಂಡ ಕಾಮಗಾರಿಗಳನ್ನು ಹಸ್ತಾಂತರ ಪಡೆದುಕೊಳ್ಳುವಂತೆ ಸೂಚಿಸಲಾಯಿತು. ಬಿಸಿಯೂಟ ನೀಡುವ ಸಂದರ್ಭದಲ್ಲಿ ಮಕ್ಕಳನ್ನು ಕೂಡಿಸಿ ಬಡಿಸಬೇಕು. ವಿವಿಧ ಬಗೆಯ ಬಿಸಿಯೂಟ ನೀಡಲು ಅಕ್ಷರದಾಸೋಹ ಅಧಿಕಾರಿಗಳಿಗೆ ಸೂಚಿಸಿದರು.
ಅಂಗವಿಕಲರಿಗೆ ಶೇ. 3ರಷ್ಟು ಮೀಸಲಾತಿಯನ್ನು ಎಲ್ಲ ಇಲಾಖೆಗಳು ಕಡ್ಡಾಯವಾಗಿ ಪಾಲಿಸಬೇಕು. ಯೋಜನೆ, ಫಲಾನುಭವಿಗಳ ಆಯ್ಕೆ ಕುರಿತು ಕ್ರಿಯಾಯೋಜನೆಯನ್ನು ಸಿದ್ಧಪಡಿಸಿ ಆಯಾ ತಿಂಗಳೇ ಯೋಜನೆಗಳನ್ನು ಶೇ. 100 ಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು. ಇಲಾಖೆಗಳಿಂದ ಯೋಜನಾ ಕಾಮಗಾರಿಗಳ ಗುರಿ ಬಂದ ಕೂಡಲೇ ಕಾಮಗಾರಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅವರು ಸೂಚಿಸಿದರು.
ಉಪಾಧ್ಯಕ್ಷೆ ಮಮತಾ ಸುರೇಶ್, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾವಿತ್ರಮ್ಮ, ಶಶಿಧರ್, ಮುಖ್ಯಯೋಜನಾಧಿಕಾರಿ ಚಂದ್ರಶೇಖರ ಗುಡಿ, ಮುಖ್ಯಲೆಕ್ಕಾಧಿಕಾರಿ ಚನ್ನಪ್ಪ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.