ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಹಣದುಬ್ಬರ ನಿಯಂತ್ರಣ: ಕೇಂದ್ರ ವಿಫಲ

Lingaraj Badiger
Updated On : 26 Sept 2013, 11:32 am

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಸೆ. 25
ದೇಶದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿರುವ ಆರ್ಥಿಕ ಪರಿಸ್ಥಿತಿಯಿಂದ ದುಡಿಯವ ವರ್ಗಗಳ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಕುಸಿಯುತ್ತಿರುವ ರುಪಾಯಿ ಮೌಲ್ಯ ನಿಯಂತ್ರಿಸುವಲ್ಲಿ ಕೇಂದ್ರ ಯುಪಿಎ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಗ್ರಾಪಂ ನೌಕರರ ಸಂಘದ ರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಆರೋಪಿಸಿದರು.
ಕರ್ನಾಟಕ ಗ್ರಾಮ ಪಂಚಾಯಿತಿ ನೌಕರರ ಸಂಘ ನಗರದ ಗಾಂಧಿ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿ ನೌಕರರ 3ನೇ ಜಿಲ್ಲಾ ಮಟ್ಟದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಎಸ್ಮಾ ಬೇಡ: ಕಾರ್ಮಿಕರ ಹಕ್ಕುಗಳನ್ನು ಹತ್ತಿಕ್ಕಲು ಹೊರಟಿರುವ ರಾಜ್ಯ ಸರ್ಕಾರ ಎಸ್ಮಾ ಕಾಯ್ದೆ ಜಾರಿಗೊಳಿಸಲು ಮುಂದಾಗುತ್ತಿದೆ. ಇದರಿಂದ ಕೆಎಸ್‌ಆರ್‌ಟಿಸಿ ನೌಕರರು ಸೇರಿದಂತೆ ಇತರೆ ಕಾರ್ಮಿಕರು ತಮ್ಮ ಬೇಡಿಕೆಗಳಿಗಾಗಿ ಹೋರಾಟ, ಚಳವಳಿಗಳನ್ನು ನಡೆಸಿದಲ್ಲಿ ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವ ಅಧಿಕಾರ ಕಾಯ್ದೆ ನೀಡಲಿದೆ. ಆದ್ದರಿಂದ ಕಾಯ್ದೆಯನ್ನು ರದ್ದುಗೊಳಿಸಬೇಕು. ದೇಶದ ಜನರ ಹಿತರಕ್ಷಣೆಗೆ ಕಾರ್ಮಿಕ ಸಂಘಟನೆಗಳು ಒಗ್ಗೂಡಬೇಕು ಎಂದು ಸಲಹೆ ಮಾಡಿದರು.
ಕಾರ್ಮಿಕ ವಿರೋಧಿ ನೀತಿ: ಕಾರ್ಮಿಕ ವಿರೋಧಿ ನೀತಿ, ನೌಕರ ವಿರೋಧಿ ನೀತಿಗಳಿಂದಾಗಿ ಇಂದು ಗ್ರಾಮ ಪಂಚಾಯಿತಿ ಸೇರಿದಂತೆ ಇತರೆ ಅನೇಕ ವಲಯಗಳ ನೌಕರರು ಅತಿ ಕಡಿಮೆ ಸಂಬಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದುಡಿಯುವಂತಾಗಿದೆ. ಗುತ್ತಿಗೆ, ಹೊರಗುತ್ತಿಗೆ ಪದ್ಧತಿ ಜಾರಿಗೆ ತಂದು ನೌಕರರನ್ನು ಶೋಷಿಸಲಾಗುತ್ತಿದೆ. ಕಾರ್ಮಿಕರಿಗೆ ಕನಿಷ್ಠ ರು. 10 ಸಾವಿರ ವೇತನ ನಿಗದಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಗುತ್ತಿಗೆ ಪದ್ಧತಿ ರದ್ದು ಮಾಡಬೇಕು. ಎಲ್ಲರಿಗೂ ಪಿಂಚಣಿ ಸೌಲಭ್ಯ ಕಲ್ಪಿಸಬೇಕು. ಷೇರು ಮಾರುಕಟ್ಟೆ ಆಧಾರಿತ ಪಿಂಚಣಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಮೃದು ಧೋರಣೆ: ಅಂದು ಅಕ್ರಮ ಗಣಿಗಾರಿಕೆ ವಿರುದ್ಧ ಸೆಡ್ಡು ಹೊಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿದರು. ಆದರೆ, ಅದೇ ಅಕ್ರಮ ಗಣಿಗಾರಿಕೆ ಕಳಂಕ ಹೊತ್ತಿರುವ ಸಚಿವ ಸಂತೋಷ್ ಲಾಡ್ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗದೆ, ಅವರ ಬಗ್ಗೆ ಮೃದುಧೋರಣೆ ತೋರುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದರು.
ಸಿಐಟಿಯುನ ಜಿಲ್ಲಾ ಕಾರ್ಯದರ್ಶಿ ಸತ್ಯಬಾಬು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ, ಜನವಿರೋಧಿ ನೀತಿಗಳ ವಿರುದ್ಧ ಹೋರಾಡಲು ಮತ್ತು ದೇಶದ ಜನತೆಯ ಹಿತರಕ್ಷಣೆಗಾಗಿ ಎಲ್ಲ ಕಾರ್ಮಿಕ ಸಂಘಟನೆಗಳು ಒಗ್ಗೂಡಿ ಹೋರಾಟಕ್ಕೆ ಮುಂದಾಗಬೇಕಾಗಿದೆ ಎಂದರು.
ಸಂಘದ ಜಿಲ್ಲಾಧ್ಯಕ್ಷ ಆರ್.ಎಸ್. ಬಸವರಾಜ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಎಚ್. ತಿಪ್ಪಯ್ಯ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಗ್ರಾಮ ಪಂಚಾಯಿತಿಯ ನೂರಾರು ನೌಕರರು ಸಮಾವೇಶದಲ್ಲಿ ಭಾಗವಹಿಸಿದ್ದರು. ರಾಜಶೇಖರಗೌಡ ಸ್ವಾಗತಿಸಿದರು. ರಾರಾವಿ ಬಸವನಗೌಡ ನಿರೂಪಿಸಿದರು. ಎಚ್. ಹುಲಗಪ್ಪ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement