ಬಳ್ಳಾರಿ: ಜಿಲ್ಲೆಯಲ್ಲಿ ಆ. 15ರಂದು ಸ್ವಾತಂತ್ರ್ಯ ದಿನವನ್ನು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಲಾಗುವುದು ಎಂದು ಡಿಸಿ ಸಮೀರ್ ಶುಕ್ಲಾ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಆ. 5ರಂದು ಏರ್ಪಡಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳಗ್ಗೆ 9ಕ್ಕೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಲಾಗುವುದು. ಧ್ವಜವಂದನೆ ಸ್ವೀಕಾರ ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಅಗ್ನಿಶಾಮಕ ದಳದಿಂದ ಅಣಕು ಪ್ರದರ್ಶನ, ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ ನಡೆಸಲಾಗುವುದು. ಆ. 14, 15ರಂದು ಎಲ್ಲ ದೇವಸ್ಥಾನ, ಮಸೀದಿಗಳು, ಸರ್ಕಾರಿ ಕಚೇರಿಗೆ ವಿದ್ಯುತ್ ದೀಪಾಲಂಕಾರ ಮಾಡಬೇಕು. ಎಸ್ಸೆಸ್ಸೆಲ್ಸಿ, ಪಿಯುಸಿ, ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಜೇತರಾದವರನ್ನು ಸನ್ಮಾನಿಸಲಾಗುವುದು. ಕ್ರೀಡಾಂಗಣದ ಸುತ್ತಮುತ್ತ ಸ್ವಚ್ಛತೆ ಕೈಗೊಳ್ಳಬೇಕು. ಪುಷ್ಪಕುಂಡಗಳನ್ನಿಟ್ಟು ಶೃಂಗರಿಸಬೇಕು. ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಮಹಾತ್ಮ ಗಾಂಧೀಜಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ಸಂಜೆ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದರು. ಜಿಲ್ಲಾ ಕೇಂದ್ರದ ಎಲ್ಲ ಇಲಾಖೆ ಅಧಿಕಾರಿಗಳು ಅಂದು ಬೆಳಗ್ಗೆ 7 ಗಂಟೆಗೆ ತಮ್ಮ ಕಚೇರಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಭಾಗವಹಿಸಬೇಕು. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಬೇಕು. ಪೂರ್ವ ತಯಾರಿಗಾಗಿ ಹಲವು ಸಮಿತಿಗಳನ್ನು ರಚಿಸಿ, ಕಾರ್ಯಗಳನ್ನು ಹಂಚಿ ನಿರ್ವಹಿಸುವಂತೆ ಸೂಚಿಸಲಾಗಿದೆ. ಸಂಬಂಧಿಸಿದ ಸಮಿತಿಗಳ ಪದಾಧಿಕಾರಿಗಳು ಸ್ವಯಂ ಪ್ರೇರಣೆಯಿಂದ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಡಿವೈಎಸ್ಪಿ ಮುರುಗಣ್ಣನವರ್, ಮಹಾನಗರ ಪಾಲಿಕೆ ಆಯುಕ್ತ ಚಿಕ್ಕಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.