ಬ್ಯಾಕ್‌ಲಾಗ್ ಹುದ್ದೆ ಭರ್ತಿಗೆ ಸಿಪಿಐಎಂನಿಂದ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜ. 28
ರಾಜ್ಯ ಸರ್ಕಾರ ಕೇಂದ್ರದ ಮಾದರಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ರಾಜ್ಯದಲ್ಲಿ ಶೇ. 7.5ರಷ್ಟು ಮೀಸಲಾತಿ, ಬ್ಯಾಕ್‌ಲಾಗ್ ಹುದ್ದೆ ಭರ್ತಿ ಹಾಗೂ ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಗೊಳಿಸಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐಎಂ ಕಾರ್ಯಕರ್ತರು ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ಎಂ. ವಿಶ್ವನಾಥಸ್ವಾಮಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 6 ದಶಕ ಗತಿಸಿದರೂ ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಸಮಾನತೆ ಸಾಧಿಸದ ದಲಿತರಲ್ಲಿ ಇಂದಿಗೂ ದೇವದಾಸಿ, ಜೀತದಾಳು ಪದ್ಧತಿಗಳಿದ್ದು, ಭೂಮಿ, ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ. ಇದರಿಂದ ಸಾಮಾಜಿಕ ಶೋಷಣೆಗೊಳಗಾಗಿರುವ ಪ. ಪಂಗಡಕ್ಕೆ ಸಮರ್ಪಕವಾಗಿ ಮೀಸಲಾತಿ ಅನುಷ್ಠಾನಕ್ಕೆ ಬಾರದೆ, ಜನಾಂಗವು ಹಿಂದುಳಿಯಲು ಕಾರಣವಾಗಿದೆ. ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಬೇಕೆಂದು ಸಂವಿಧಾನದ ಹಕ್ಕುಗಳಿದ್ದರೂ, ಮೀಸಲಾತಿಯನ್ನು ಸಮರ್ಪಕ ಅನುಷ್ಠಾನಗೊಳಿಸದ ರಾಜ್ಯ ಸರ್ಕಾರ, ಪ. ಪಂಗಡವನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಪ. ಪಂಡಗಕ್ಕೆ ಉದ್ಯೋಗ, ಶಿಕ್ಷಣ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ನೀಡುವ ಶೇ. 7.5ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರವೂ ನೀಡಬೇಕು. ರಾಜ್ಯದಲ್ಲಿ ಖಾಲಿಯಿರುವ ಸುಮಾರು 20 ಸಾವಿರಕ್ಕೂ ಹೆಚ್ಚು ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೆ ಭರ್ತಿ ಮಾಡಬೇಕು. ಇತರೆ ಹಲವು ಇಲಾಖೆಗಳಲ್ಲಿ ಖಾಲಿಯಿರುವ 1,25,359 ಹುದ್ದೆಗಳನ್ನು ಭರ್ತಿ ಮಾಡಬೇಕು. ಖಾಸಗಿ ವಲಯದಲ್ಲಿ ಮೀಸಲಾತಿ ಜಾರಿಗೊಳಿಸಬೇಕು. ಅದು ಕಟ್ಟುನಿಟ್ಟಾಗಿ ಜಾರಿಗೊಳ್ಳಲು ಎಚ್ಚರಿಕೆ ವಹಿಸಬೇಕು. ಪ. ಪಂಗಡದ ಎಲ್ಲ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್‌ಗಳನ್ನು ವಿತರಿಸಬೇಕು. ನಿವೇಶನ ರಹಿತ ಬಡ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಬೇಕು. ಜಿಲ್ಲಾ, ತಾಲೂಕು, ಹೋಬಳಿ ಮಟ್ಟಗಳಲ್ಲಿ ಎಸ್‌ಟಿ ವಿದ್ಯಾರ್ಥಿಗಳಿಗನುಗುಣವಾಗಿ ವಸತಿ ನಿಲಯಗಳನ್ನು ನಿರ್ಮಿಸಬೇಕು. ವಿದ್ಯಾರ್ಥಿ ವೇತನ ಸಮರ್ಪಕವಾಗಿ ವಿತರಿಸಬೇಕು ಸೇರಿದಂತೆ ಇತರೆ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು. ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ವಿ.ಎಸ್. ಶಿವಶಂಕರ್, ಕೆ. ಗಾದಿಲಿಂಗಪ್ಪ, ಗಾಳಿ ಬಸವರಾಜ, ರಂಗಪ್ಪ ದಾಸರ, ಅಮಿನ್‌ಸಾಬ್, ಮಹ್ಮದ್ ಖಾನ್, ಸಂಗನಕಲ್ಲು ವಿಜಯಕುಮಾರ್, ಬಿ. ಕೃಷ್ಣ, ಮೇದಾರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸೇರಿದಂತೆ, ನೂರಾರು ಕಾರ್ಯಕರ್ತರು, ಸಾರ್ವಜನಿಕರು ಇದ್ದರು.