ನಾಳೆ ಸುವರ್ಣ ಮಹೋತ್ಸವ ಕಾರ್ಯಕ್ರಮ
ಬಳ್ಳಾರಿ: ವೀರಶೈವ ವಿದ್ಯಾವರ್ಧಕ ಸಂಘದ ಕುಡಿತಿನಿಯ ಹರಗಿನಡೋಣಿ ಬಸವನಗೌಡ ಪ್ರೌಢಶಾಲೆ ಹಾಗೂ ಸಂಯುಕ್ತ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮ ಫೆ. 1 ಮತ್ತು 2ರಂದು ಕುಡುತಿನಿ ಶಾಲೆಯಲ್ಲಿ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವೀವಿ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್ ತಿಳಿಸಿದರು.
ವೀವಿ ಸಂಘದ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಫೆ. 1ರಂದು ಬೆಳಗ್ಗೆ 10.45ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಉಜ್ಜಿನಿಯ ಶ್ರೀ ಸಿದ್ಧಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯರು ಕಾರ್ಯಕ್ರಮದ ಸಾನ್ನಿಧ್ಯ ವಹಿಸುವರು. ಎಮ್ಮಿಗನೂರಿನ ವಾಮದೇವ ಶಿವಾಚಾರ್ಯರು, ಹರಗಿನಡೋಣಿಯ ಸಿದ್ಧಲಿಂಗ ಶಿವಾಚಾರ್ಯರು ಭಾಗವಹಿಸಲಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ ಬಯಲು ರಂಗಮಂದಿರ ಉದ್ಘಾಟಿಸುವರು. ವೀವಿ ಸಂಘದ ಗೌರವಾಧ್ಯಕ್ಷ ಅಲ್ಲಂ ಗುರುಬಸವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಡೂರು ಶಾಸಕ ಈ. ತುಕಾರಾಂ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ದಾನಿಗಳ ವಂಶಸ್ಥರಾದ ಹರಗಿನಡೋಣಿ ಮಹಾರುದ್ರಗೌಡ ಅವರನ್ನು ಸನ್ಮಾನಿಸಿ, ಗೌರವಿಸಲಾಗುತ್ತದೆ ಎಂದರು.
ಮಧ್ಯಾಹ್ನ 2.30ಕ್ಕೆ ವಿಶ್ರಾಂತ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಎಮ್ಮಿಗನೂರಿನ ವಾಮದೇವ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ವೀವಿ ಸಂಘದ ಉಪಾಧ್ಯಕ್ಷ ಕೆ.ಎಂ. ಮಹೇಶ್ವರಸ್ವಾಮಿ ಅಧ್ಯಕ್ಷತೆ ವಹಿಸುವರು. ಸಂಜೆ 4ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಹರಗಿನಡೋಣಿಯ ಸಿದ್ಧಲಿಂಗ ಶಿವಾರ್ಯರು ಸಾನ್ನಿಧ್ಯ ವಹಿಸಿಸುವರು, ವೀವಿ ಸಂಘದ ಸಹ ಕಾರ್ಯದರ್ಶಿ ಜೆ.ಎಸ್. ನೇಪಾಕ್ಷಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಪ್ರಾಚಾರ್ಯ ಡಾ. ಬಸವರಾಜ್ ಜಗಜಂಪಿ ಭಾಷ ಮಾಧ್ಯಮ ಮತ್ತು ಶೈಕ್ಷಣಿಕ ಸವಾಲುಗಳು ಕುರಿತು ಉಪನ್ಯಾಸ ನೀಡುವರು ಎಂದರು.
ಫೆ. 2ರ ಬೆಳಗ್ಗೆ 9.30ಕ್ಕೆ ವಿಚಾರಗೋಷ್ಠಿ ನಡೆಯಲಿದ್ದು, ಗರಗ ನಾಗಲಾಪುರದ ಮರಿಮಹಾಂತ ಸ್ವಾಮೀಜಿ, ಕೊಟ್ಟೂರಿನ ಸಿದ್ಧಲಿಂಗ ಶಿವಾಚಾರ್ಯರು ಸಾನ್ನಿಧ್ಯ ವಹಿಸುವರು. ಸಂಘದ ಕಾರ್ಯದರ್ಶಿ ಎಚ್.ಎಂ. ಗುರುಸಿದ್ದಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಈಶ್ವರಿಯ ವಿಶ್ವವಿದ್ಯಾಲಯದ ಭಾರತಿ ಅಕ್ಕನವರು ಮಾನವೀಯ ಮೌಲ್ಯಗಳು ಮತ್ತು ಶಾಂತಿ ಕುರಿತು ಉಪನ್ಯಾಸ ನೀಡಲಿದ್ದಾರೆ. ಅಂದು ಮಧ್ಯಾಹ್ನ 2.30ಕ್ಕೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಉರವಕೊಂಡದ ಕರಿಬಸವ ಸ್ವಾಮೀಜಿ, ಕಲ್ಯಾಣ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಸಂಘದ ಕೋಶಾಧ್ಯಕ್ಷ ಸಂಗನಕಲ್ಲು ಹೀಮಂತರಾಜ್ ಅಧ್ಯಕ್ಷತೆ ವಹಿಸುವರು. ಸಂಜೆ 4ಕ್ಕೆ ಸಮಾರೋಪ ನಡೆಯಲಿದ್ದು, ತುಮಕೂರಿನ ಡಾ. ಶಿವಾನಂದ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದಾರೆ. ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ವಿರೂಪಾಕ್ಷಗೌಡ, ಸದಸ್ಯ ಪಂಪಾಪತಿ, ಕಾಲೇಜಿನ ಮುಖ್ಯಗುರು ಎಂ.ಜಿ. ದೇವೇಂದ್ರಪ್ಪ, ವೀವಿ ಸಂಘದ ಉಪಾಧ್ಯಕ್ಷ ಕೆ.ಎಂ. ಮಹೇಶ್ವರಸ್ವಾಮಿ, ಸಹ ಕಾರ್ಯದರ್ಶಿ ಜೆ.ಎಸ್. ನೇಪಾಕ್ಷಪ್ಪ, ಖಜಾಂಚಿ ಹಿಮಂತರಾಜ್ ಇದ್ದರು.