ಬ್ಯಾಕ್‌ಲಾಗ್ ಹುದ್ದೆ ಭರ್ತಿಗೆ ಆಗ್ರಹ
ಹೊಸಪೇಟೆ: ಎಸ್‌ಟಿ ಮೀಸಲಾತಿ ಶೇ. 7.5ಕ್ಕೆ ಹೆಚ್ಚಳ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ, ಖಾಸಗಿ ವಲಯದಲ್ಲಿ ಮೀಸಲಾತಿಗಾಗಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಪಿಐಎಂ ತಾಲೂಕು ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐಎಂ ತಾಲೂಕು ಕಾರ್ಯದರ್ಶಿ ಆರ್. ಭಾಸ್ಕರ್ ರೆಡ್ಡಿ, ಖಾಸಗೀಕರಣ, ಜಾಗತೀಕರಣ ಹಾಗೂ ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳನ್ನು ಮೀಸಲಾತಿ ಸೌಲಭ್ಯಗಳಿಂದ ವಂಚಿಸುತ್ತಿದ್ದಾರೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮೀಸಲಾತಿ ಪ್ರಮಾಣ ಶೇ. 7.5ರಂತೆ ಕರ್ನಾಟಕ ಸರ್ಕಾರ ಶೇ. 3ರ ಬದಲು ಶೇ. 7.5ಕ್ಕೆ ಹೆಚ್ಚಿಸಬೇಕು. ರಾಜ್ಯ ಸರ್ಕಾರ ಶೇ. 3ರಷ್ಟು ನಿಗದಿಪಡಿಸಿ ಸಂವಿಧಾನ ಬದ್ದ ಮೀಸಲಾತಿ ನೀತಿಯನ್ನು ಉಲ್ಲಂಘಿಸಿದೆ ಎಂದು ಅವರು ಆರೋಪಿಸಿದರು.
ಸಿಪಿಐಎಂ ಮುಖಂಡ ಆರ್.ಎಸ್. ಬಸವರಾಜ್ ಮಾತನಾಡಿ, ಎಸ್ಟಿ ಸಮುದಾಯಕ್ಕೆ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಶೇ. 7.5ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ನೀಡಬೇಕು. ರಾಜ್ಯದಲ್ಲಿ 20 ಸಾವಿರಕ್ಕೂ ಹೆಚ್ಚು ತುಂಬದೆ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು. ಖಾಸಗಿ ವಲಯದಲ್ಲಿ ಮೀಸಲಾತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಮೂಲಕ ಕಾನೂನು ತಿದ್ದುಪಡಿ ತರಬೇಕು ಎಂದು ಒತ್ತಾಯಿಸಿದರು.
ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿದೆ, ಗೌರವ ವೇತನ, ಅತಿಥಿ ಉಪನ್ಯಾಸಕರ ಹಾಗೂ ಶಿಕ್ಷಕರ ನೇಮಕಾತಿಯಲ್ಲಿ ಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಿಹಿಸಿದರುಯ.
ಸಿಪಿಐಎಂನ ಎ. ಕರುಣಾನಿಧಿ, ಕೆ. ನಾಗರತ್ನಮ್ಮ, ವಾಲ್ಮೀಕಿ ಸಮಾಜದ ಮುಖಂಡ ಬಿ.ಎಸ್. ಜಂಬಯ್ಯ ನಾಯಕ, ಸತ್ಯನಾರಾಯಣ ಮಾತನಾಡಿದರು. ಎಂ. ಗೋಪಾಲ್, ಬಿಸಾಟಿ ಮಹೇಶ್, ಎಚ್. ಪ್ರಕಾಶ್, ಸುರೇಶ್ ಚವ್ಹಾಣ್, ಕೆ. ರಮೇಶ್, ಯಲ್ಲಾಲಿಂಗ, ಕಿಚಿಡಿ ಶ್ರೀನಿವಾಸ, ವೆಂಕೋಬ ಪೂಜಾರಿ, ಸುಭಾಷ್ ನಾಯಕ, ಕಟಗಿ ವಿಜಯ ಕುಮಾರ್ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ನಗರದ ವಾಲ್ಮೀಕಿ ಪ್ರೌಢಶಾಲೆಯಿಂದ ಪ್ರತಿಭಟನಾ ರ್ಯಾಲಿ ಆರಂಭಗೊಂಡು, ವಾಲ್ಮೀಕಿ ವೃತ್ತ, ಮದಕರಿ ನಾಯಕ ವೃತ್ತ, ಉದ್ಯೋಗ ಪೆಟ್ರೋಲ್ ಬಂಕ್, ನಗರಸಭೆ ಕಚೇರಿ ರಸ್ತೆ, ಬಸ್ ನಿಲ್ದಾಣ, ರೋಟರಿ ವೃತ್ತದ ಮೂಲಕ ತಹಸೀಲ್ದಾರ್ ಕಚೇರಿಗೆ ಮೆರವಣಿಗೆ ಆಗಮಿಸಿತು. ನಂತರ ಅಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಿದರು.