ರಾಜ್ಯದ ಅಭಿವೃದ್ಧಿ ಕುಂಠಿತ: ಮಾಜಿ ಶಾಸಕ ಸೋಮಲಿಂಗಪ್ಪ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜ. 31
ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶೂನ್ಯ ಹಂತಕ್ಕೆ ತಲುಪಿದೆ ಎಂದು ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಅಧ್ಯಕ್ಷ, ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ಏರ್ಪಡಿಸಿದ್ದ ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಪದಾಧಿಕಾರಿಗಳು, ಮುಖಂಡರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಹಿಡಿಶಾಪ: ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಅಭಿವೃದ್ಧಿ ಯೋಜನೆಗಳನ್ನೇ ಈಗಿನ ಸರ್ಕಾರ ಮುಂದುವರಿಸಿದ್ದು, ಯಾವೊಂದು ಯೋಜನೆಗೂ ಸಮರ್ಪಕ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಇದರಿಂದ ಗುತ್ತಿಗೆದಾರರು ಹಾಗೂ ಇತರರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ಸರ್ಕಾರ 'ಅನ್ನಭಾಗ್ಯ'ವನ್ನು ಮಹತ್ವಾಕಾಂಕ್ಷಿ ಯೋಜನೆ ಎಂದೆಲ್ಲ ಹೇಳಿಕೊಳ್ಳುತ್ತದೆ. ಆದರೆ, ಈ ಯೋಜನೆ 'ವರ್ತಕರ ಭಾಗ್ಯ'ವಾಗಿ ಪರಿವರ್ತನೆ ಹೊಂದಿದೆ. ರಾಜ್ಯದ ಬಡಜನತೆಗೆ ಅನ್ನಭಾಗ್ಯ ಯೋಜನೆಯಿಂದ ಒಳಿತಾಗಿಲ್ಲ. ಲೋಕಸಭಾ ಚುನಾವಣೆಯ ನಂತರ ಸಿಎಂ ಕುರ್ಚಿಯಲ್ಲಿ ಸಿದ್ದರಾಮಯ್ಯ ಇರುತ್ತಾರೋ, ಇಲ್ಲವೋ ಎಂಬ ಅನುಮಾನ ಪ್ರಾರಂಭವಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದ್ದು, ಅಭಿವೃದ್ಧಿ ಬದಲಾಗಿ ಅನೈತಿಕ ದಂಧೆಗಳೇ ಅಧಿಕವಾಗಿವೆ. ಇಂತಹ ವ್ಯವಸ್ಥೆಯಿಂದ ಜಿಲ್ಲಾ ಉಸ್ತುವಾರಿ ಸಚಿವರು ಇದ್ದಾರೋ, ಇಲ್ಲವೋ ಎಂದೆನಿಸುತ್ತಿದೆ. ಬರೀ ಹಡಗಲಿಗೆ ಸೀಮಿತವಾಗಿದ್ದಾರೋ ಎಂಬ ಪ್ರಶ್ನೆಗೆ ಸಚಿವರು ಉತ್ತರಿಸಬೇಕು ಎಂದು ಆಗ್ರಹಿಸಿದರು.
ಮೋದಿ ಪ್ರಧಾನಿಯಾಗಲಿ: ದೇಶಕ್ಕೆ ಸುಭದ್ರ ಆಡಳಿತ ಮತ್ತು ಅಭಿವೃದ್ಧಿಗೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕು ಎಂದು ಕೋರಿದರು.
ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ. ಅರುಣ್ ಕುಮಾರ್ ಮಾತನಾಡಿ, ಫೆ. 23ರಂದು ತುಮಕೂರಿನಲ್ಲಿ ಬಿಜೆಪಿ ಎಸ್‌ಸಿ, ಎಸ್‌ಟಿ, ಒಬಿಸಿ, ಸ್ಲಂ ಮೋರ್ಚಾಗಳ ಬೃಹತ್ ಸಮಾವೇಶ ನಡೆಯಲಿದ್ದು, ಮಧ್ಯಪ್ರದೇಶದ ಸಿಎಂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಂದಾಜು 5ರಿಂದ 6 ಲಕ್ಷ ಜನ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಸಭೆಯಲ್ಲಿ ಬಳ್ಳಾರಿ ಜಿಲ್ಲೆಯಿಂದ ಎಲ್ಲ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡು ಯಶಸ್ವಿಗೊಳಿಸಲು ಮನವಿ ಮಾಡಿದರು.
ಬಿಜೆಪಿ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುಂದರಂ, ರಾಷ್ಟ್ರ ಕಾರ್ಯಕಾರಿಣಿ ಸದಸ್ಯ ಸೋಮನಾಯಕ್, ಮುಖಂಡರಾದ ಎಂ. ಮಲ್ಲಯ್ಯ, ಶಿವಕುಮಾರ್, ಮಂಜುನಾಥ ಒಲೇಕಾರ್, ಕುಮಾರಸ್ವಾಮಿ, ಮೈಲಾರಲಿಂಗ ನಾಯಕ, ಮುರಹರಿಗೌಡ, ಆನಂದ್, ಸುಮಾರೆಡ್ಡಿ, ಮಂಜಮ್ಮ, ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಸ್ಥಳೀಯ ಬಾಲಭಾರತಿ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮುಖಂಡ ನಾರಾಯಣ ರಾಂಪುರೆ ಸ್ವಾಗತಿಸಿದರು.