ಅತ್ಯಾಚಾರ ನಿಯಂತ್ರಿಸಿ: ಮನವಿ
ಬಳ್ಳಾರಿ: ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು ಹಾಗೂ ಅಪರಾಧಗಳನ್ನು ನಿಯಂತ್ರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ (ಎಐಎಂಎಸ್ಎಸ್) ಕಾರ್ಯಕರ್ತರು ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಎಐಎಂಎಸ್ಎಸ್ ಜಿಲ್ಲಾಧ್ಯಕ್ಷೆ ಎಂ.ಎನ್. ಮಂಜುಳಾ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಆಸಿಡ್ ದಾಳಿ, ಅತ್ಯಾಚಾರ ನಿಯಂತ್ರಣಕ್ಕೆ ಮುಂದಾಗದ ಕೇಂದ್ರ-ರಾಜ್ಯ ಸರ್ಕಾರಗಳು ಮಹಿಳೆಯರಿಗೆ ರಕ್ಷಣೆ ನೀಡದೇ ನಿರ್ಲಕ್ಷ್ಯ ತಾಳುತ್ತಿವೆ ಎಂದು ದೂರಿದರು. ಮಹಿಳೆಯರ ಮೇಲಿನ ಅಪರಾಧಗಳನ್ನು ನಿಯಂತ್ರಿಸಲು ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅಶ್ಲೀಲ ಸಿನಿಮಾ, ಜಾಹೀರಾತುಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.