ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಳ್ಳಾರಿ

ಕೇಂದ್ರದ ಮಾದರಿಯಲ್ಲಿ ರಾಜ್ಯ ನೌಕರರಿಗೆ ಸೌಲಭ್ಯ ನೀಡಿ

Lingaraj Badiger
Updated On : 21 Mar 2014, 11:52 am

ಬಳ್ಳಾರಿ: ಕೇಂದ್ರದ ಮಾದರಿಯಲ್ಲೇ ರಾಜ್ಯ ಸರ್ಕಾರಿ ನೌಕರರಿಗೂ ತುಟ್ಟಿಭತ್ಯೆ, ಚುನಾವಣೆ ಕರ್ತವ್ಯಗಳಿಗೆ ನಿಯೋಜಿಸುವ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ಪ್ರಸ್ತುತ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಗೌರವಧನ ಹೆಚ್ಚಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಎಂ.ಟಿ. ಮಲ್ಲೇಶ್, ಕೇಂದ್ರ ಸರ್ಕಾರಿ ನೌಕರರಿಗೆ 2014 ಜನವರಿ 1ರಿಂದಲೇ ಅನ್ವಯವಾಗುವಂತೆ ಶೇ. 10ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿದೆ. ಆದರೆ ರಾಜ್ಯ ಸರ್ಕಾರ ಕೇಂದ್ರದ ಮಾದರಿಯಲ್ಲಿ ಜನವರಿ 1ರಿಂದಲೆ ತುಟ್ಟಿಭತ್ಯೆ ಅನ್ವಯಗೊಳಿಸುವಂತೆ ನಿಯಮವಿದ್ದರೂ, ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೇಂದ್ರದ ಮಾದರಿಯನ್ನು ಅನುಸರಿಸಬೇಕು ಎಂದು ಆಗ್ರಹಿಸಿದ್ದಾರೆ.
ಹೈಕ ಪ್ರದೇಶಾಭಿವೃದ್ಧಿ ದೃಷ್ಟಿಯಿಂದ ಜಾರಿಗೆ ತರಲಾಗಿರುವ 371(ಜೆ) ಕಾಯ್ದೆ ಅನುಷ್ಠಾನಕ್ಕಾಗಿ ಇದ್ದ ಎಲ್ಲ ಅಡಚಣೆಗಳನ್ನು 2014 ಜನವರಿ 29ರ ಅಧಿಸೂಚನೆ- 1, 2ರ ಮೂಲಕ ಸ್ಪಷ್ಟಪಡಿಸಲಾಗಿದೆ. ಆದರೆ, ಕೇವಲ ಬೆರಳೆಣಿಕೆಯಷ್ಟು ಇಲಾಖೆಗಳು ಅನುಷ್ಠಾನಗೊಳಿಸುತ್ತಿದ್ದು, ಉಳಿದ ಇಲಾಖೆಗಳು ವಿಳಂಬ ಧೋರಣೆ ಅನುಸರಿಸುತ್ತಿವೆ. ಈ ನಿಟ್ಟಿನಲ್ಲಿ ಈ ಭಾಗದ ನೌಕರರ ಬಡ್ತಿಗೆ ತೊಂದರೆಯಾಗಲಿದೆ. ಹೀಗಾಗಿ ಕೂಡಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಲೋಕಸಭಾ ಚುನಾವಣೆಗೆಂದು ನಿಯೋಜಿಸಿರುವ ಸರ್ಕಾರಿ ನೌಕರರು ಮತ್ತು ಅಧಿಕಾರಿಗಳ ಗೌರವಧನ ಪ್ರಸ್ತುತ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹೆಚ್ಚಿಸಬೇಕು. ಮತಗಟ್ಟೆ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಗರ್ಭಿಣಿಯರು, ಮಾರಣಾಂತಿಕ ಕಾಯಿಲೆಯುಳ್ಳವರು, ಅಂಗವಿಕಲರು, ನಿವೃತ್ತಿ ಅಂಚಿನಲ್ಲಿರುವವರನ್ನು ಚುನಾವಣಾ ಕರ್ತವ್ಯದಿಂದ ಕೈಬಿಡಬೇಕು. ಚುನಾವಣೆಗೆಂದು ನಿಯೋಜಿತ ಅಧಿಕಾರಿ, ಸಿಬ್ಬಂದಿಗೆ ಮತದಾನ ಅವಕಾಶ ಕಲ್ಪಿಸಬೇಕು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement